ರಾಂಚಿಯಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ 52ನೇ ಶತಕ ಸಿಡಿಸಿ ಮಿಂಚಿದ್ದಾರೆ. ರೋಹಿತ್ ಶರ್ಮಾ ಅವರ ಅರ್ಧಶತಕ ಹಾಗೂ ಕೊಹ್ಲಿ ಜೊತೆಗಿನ ಶತಕದ ಜೊತೆಯಾಟದ ನೆರವಿನಿಂದ ಟೀಂ ಇಂಡಿಯಾ ಬೃಹತ್ ಮೊತ್ತದತ್ತ ಸಾಗುತ್ತಿದೆ.

ರಾಂಚಿ: ಕ್ರಿಕೆಟ್ ದಂತಕತೆ ಮಹೇಂದ್ರ ಸಿಂಗ್ ಧೋನಿ ತವರಿನಲ್ಲಿ ವಿರಾಟ್ ಕೊಹ್ಲಿ ಆಕರ್ಷಕ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ದಕ್ಷಿಣ ಆಫ್ರಿಕಾ ಎದುರಿನ ಮೊದಲ ಪಂದ್ಯದಲ್ಲಿ ಆಕರ್ಷಕ ಬೌಂಡರಿ ಹಾಗೂ ಸಿಕ್ಸರ್‌ಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ ಟೀಂ ಇಂಡಿಯಾ ರನ್ ಮಷೀನ್ ಕೊಹ್ಲಿ, ತಮ್ಮ ಏಕದಿನ ಕ್ರಿಕೆಟ್ ವೃತ್ತಿಜೀವನದ 52ನೇ ಶತಕ ಸಿಡಿಸಿ ಸಂಭ್ರಮಿಸಿದರು. ಕೊಹ್ಲಿಯ ಶತಕ ಹಾಗೂ ರೋಹಿತ್ ಶರ್ಮಾ ಆಕರ್ಷಕ ಅರ್ಧಶತಕಗಳ ನೆರವಿನಿಂದ ಟೀಂ ಇಂಡಿಯಾ ಇದೀಗ ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ.

ಇಲ್ಲಿನ ಜೆಎಸ್‌ಸಿಎ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಆರಂಭವಾದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಲಿಳಿದ ಟೀಂ ಇಂಡಿಯಾ 25 ರನ್ ಗಳಿಸುವಷ್ಟರಲ್ಲಿ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು. ಇದಾದ ಬಳಿಕ ಜತೆಯಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾಯಿತು. ಎರಡನೇ ವಿಕೆಟ್‌ಗೆ ಈ ಜೋಡಿ ಕೇವಲ 109 ಎಸೆತಗಳಲ್ಲಿ 136 ರನ್‌ಗಳ ಜತೆಯಾಟವಾಡಿತು. ಆಕರ್ಷಕ ಬ್ಯಾಟಿಂಗ್‌ ನಡೆಸಿದ ರೋಹಿತ್ ಶರ್ಮಾ 51 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 57 ರನ್ ಸಿಡಿಸಿ ಮಾರ್ಕೊ ಯಾನ್ಸನ್‌ ಬೌಲಿಂಗ್‌ನಲ್ಲಿ ಎಲ್‌ಬಿ ಬಲೆಗೆ ಬಿದ್ದರು.

Scroll to load tweet…

ಆಕರ್ಷಕ ಶತಕ ಸಿಡಿಸಿ ಸಂಭ್ರಮಿಸಿದ ವಿರಾಟ್ ಕೊಹ್ಲಿ:

ಆಸ್ಟ್ರೇಲಿಯಾ ಪ್ರವಾಸದಲ್ಲಿ ಮೊದಲೆರಡು ಏಕದಿನ ಪಂದ್ಯಗಳಲ್ಲಿ ಶೂನ್ಯ ಸುತ್ತಿ, ಸಿಡ್ನಿಯಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಅಜೇಯ 74 ರನ್ ಸಿಡಿಸಿದ್ದ ಕೊಹ್ಲಿ, ಇದೀಗ ಅದೇ ಫಾರ್ಮ್ ಮುಂದುವರೆಸಿದ್ದಾರೆ. ಆರಂಭದಿಂದಲೇ ಆಕರ್ಷಕ ಬ್ಯಾಟಿಂಗ್ ಮೂಲಕ ಅಭಿಮಾನಿಗಳನ್ನು ರಂಜಿಸಿದ ಕೊಹ್ಲಿ 102 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 100 ರನ್ ಪೂರೈಸುವಲ್ಲಿ ಯಶಸ್ವಿಯಾದರು.

ಬೃಹತ್ ಮೊತ್ತದತ್ತ ಭಾರತ:

ರೋಹಿತ್ ಶರ್ಮಾ ಅವರ ಆಕರ್ಷಕ ಶತಕ ಹಾಗೂ ವಿರಾಟ್ ಕೊಹ್ಲಿ ಬಾರಿಸಿದ ಆಕರ್ಷಕ ಶತಕದ ನೆರವಿನಿಂದ ಟೀಂ ಇಂಡಿಯಾ, ಇದೀಗ ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ. 38 ಓವರ್ ಅಂತ್ಯದ ವೇಳೆಗೆ ಟೀಂ ಇಂಡಿಯಾ 4 ವಿಕೆಟ್ ಕಳೆದುಕೊಂಡು 233 ರನ್ ಬಾರಿಸಿದ್ದು ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ.