ವೈಜಾಗ್ ಟೆಸ್ಟ್ ಗೆಲ್ಲಲು ಇಂಗ್ಲೆಂಡ್‌ಗೆ 399 ರನ್ ಗುರಿ

ಎರಡನೇ ದಿನದಾಟದಂತ್ಯದ ವೇಳೆಗೆ ಎರಡನೇ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾ ವಿಕೆಟ್ ನಷ್ಟವಿಲ್ಲದೇ 28 ರನ್ ಕಲೆಹಾಕುವ ಮೂಲಕ ಒಟ್ಟಾರೆ 171 ರನ್‌ಗಳ ಮುನ್ನಡೆ ಪಡೆದಿತ್ತು. ಬೃಹತ್ ಮೊತ್ತ ಕಲೆಹಾಕುವ ಲೆಕ್ಕಾಚಾರದೊಂದಿಗೆ ಮೂರನೇ ದಿನದಾಟ ಆರಂಭಿಸಿದ ಟೀಂ ಇಂಡಿಯಾಗೆ ಆರಂಭದಲ್ಲೇ ವೇಗಿ ಜೇಮ್ಸ್ ಆಂಡರ್‌ಸನ್ ಶಾಕ್ ನೀಡಿದರು. 

Vizag Test Team India set 399 runs target to England win 2nd Test kvn

ವಿಶಾಖಪಟ್ಟಣ(ಫೆ.04): ಶುಭ್‌ಮನ್ ಗಿಲ್ ಆಕರ್ಷಕ ಶತಕ ಹಾಗೂ ಅಕ್ಷರ್ ಪಟೇಲ್ ಸಮಯೋಚಿತ ಬ್ಯಾಟಿಂಗ್ ಹೊರತಾಗಿಯೂ ಉಳಿದ ಬ್ಯಾಟರ್‌ಗಳು ಕೈಕೊಟ್ಟಿದ್ದರಿಂದ ಟೀಂ ಇಂಡಿಯಾ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ 255 ರನ್‌ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ವೈಜಾಗ್ ಟೆಸ್ಟ್ ಪಂದ್ಯ ಗೆಲ್ಲಲು ಭಾರತ ತಂಡವು ಪ್ರವಾಸಿ ಇಂಗ್ಲೆಂಡ್‌ಗೆ 399 ರನ್‌ಗಳ ಸವಾಲಿನ ಗುರಿ ನೀಡಿದೆ. ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಬೆನ್ ಸ್ಟೋಕ್ಸ್ ನೇತೃತ್ವದ ಇಂಗ್ಲೆಂಡ್ ತಂಡವು ಈಗಾಗಲೇ 1-0 ಮುನ್ನಡೆಯಲ್ಲಿದೆ.

ಎರಡನೇ ದಿನದಾಟದಂತ್ಯದ ವೇಳೆಗೆ ಎರಡನೇ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾ ವಿಕೆಟ್ ನಷ್ಟವಿಲ್ಲದೇ 28 ರನ್ ಕಲೆಹಾಕುವ ಮೂಲಕ ಒಟ್ಟಾರೆ 171 ರನ್‌ಗಳ ಮುನ್ನಡೆ ಪಡೆದಿತ್ತು. ಬೃಹತ್ ಮೊತ್ತ ಕಲೆಹಾಕುವ ಲೆಕ್ಕಾಚಾರದೊಂದಿಗೆ ಮೂರನೇ ದಿನದಾಟ ಆರಂಭಿಸಿದ ಟೀಂ ಇಂಡಿಯಾಗೆ ಆರಂಭದಲ್ಲೇ ವೇಗಿ ಜೇಮ್ಸ್ ಆಂಡರ್‌ಸನ್ ಶಾಕ್ ನೀಡಿದರು. 

ಮೂರನೇ ದಿನದಾಟದಲ್ಲಿ ಟೀಂ ಇಂಡಿಯಾ ತನ್ನ ಖಾತೆಗೆ ಒಂದು ರನ್ ಸೇರಿಸುತ್ತಿದ್ದಂತೆಯೇ ರೋಹಿತ್ ಶರ್ಮಾ(17) ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ಇನ್ನು ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ದ್ವಿಶತಕ ವೀರ ಯಶಸ್ವಿ ಜೈಸ್ವಾಲ್ 17 ರನ್ ಗಳಿಸಿ ಆಂಡರ್‌ಸನ್‌ಗೆ ಎರಡನೇ ಬಲಿಯಾದರು.

ಅಯ್ಯರ್-ಗಿಲ್ ಜುಗಲ್ಬಂದಿ: 30 ರನ್‌ಗಳಿಗೆ ಆರಂಭಿಕರಿಬ್ಬರನ್ನು ಕಳೆದುಕೊಂಡು ಕಂಗಾಲಾಗಿದ್ದ ಟೀಂ ಇಂಡಿಯಾಗೆ ಮೂರನೇ ವಿಕೆಟ್‌ಗೆ ಶುಭ್‌ಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಸಮಯೋಚಿತ 81 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. 52 ಎಸೆತಗಳಲ್ಲಿ 29 ರನ್ ಸಿಡಿಸಿದ್ದ  ಅಯ್ಯರ್ ದೊಡ್ಡ ಹೊಡೆತಕ್ಕೆ ಯತ್ನಿಸಿ ಬೆನ್ ಸ್ಟೋಕ್ಸ್ ಹಿಡಿದ ಅದ್ಭುತ ಕ್ಯಾಚ್‌ಗೆ ಪೆವಿಲಿಯನ್ ಸೇರಿದರು.

ಗಿಲ್ ಭರ್ಜರಿ ಶತಕ: ಆರಂಭದಲ್ಲೇ ಎರಡು ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಟೀಂ ಇಂಡಿಯಾಗೆ ಶುಭ್‌ಮನ್ ಗಿಲ್ ಸಮಯೋಚಿತ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾದರು. ಮೊದಲಿಗೆ ಶ್ರೇಯಸ್ ಅಯ್ಯರ್ ಜತೆಗೂಡಿ 81 ರನ್ ಜತೆಯಾಟವಾಡಿದ ಗಿಲ್, ಬಳಿಕ ಅಕ್ಷರ್ ಪಟೇಲ್ ಜತೆಗೂಡಿ 89 ರನ್‌ಗಳ ಜತೆಯಾಟವಾಡಿದರು. 

ಇಂಗ್ಲೆಂಡ್‌ ಬೌಲರ್‌ಗಳನ್ನು ದಿಟ್ಟವಾಗಿ ಎದುರಿಸಿದ ಗಿಲ್ 132 ಎಸೆತಗಳನ್ನು ಎದುರಿಸಿ ಟೆಸ್ಟ್ ವೃತ್ತಿಜೀವನದ ಮೂರನೇ ಶತಕ ಸಿಡಿಸಿ ಸಂಭ್ರಮಿಸಿದರು. ಅಂತಿಮವಾಗಿ ಗಿಲ್ 147 ಎಸೆತಗಳನ್ನು 11 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 104 ರನ್ ಬಾರಿಸಿ ಶೋಯೆಬ್ ಬಷೀರ್‌ಗೆ ವಿಕೆಟ್ ಒಪ್ಪಿಸಿದರು. 

ಇನ್ನು ಶುಭ್‌ಮನ್ ಗಿಲ್‌ಗೆ ಉತ್ತಮ ಸಾಥ್ ನೀಡಿದ ಅಕ್ಷರ್ ಪಟೇಲ್ ಕೇವಲ 5 ರನ್ ಅಂತರದಲ್ಲಿ ಅರ್ಧಶತಕ ಸಿಡಿಸುವ ಅವಕಾಶ ಕೈಚೆಲ್ಲಿದರು. ಅಕ್ಷರ್ ಪಟೇಲ್ 84 ಎಸೆತಗಳನ್ನು ಎದುರಿಸಿ 6 ಬೌಂಡರಿ ಸಹಿತ 45 ರನ್ ಬಾರಿಸಿ ಟಾಮ್ ಹಾರ್ಟಿಗೆ ವಿಕೆಟ್ ಒಪ್ಪಿಸಿದರು. 

ವಿಕೆಟ್ ಕೀಪರ್ ಬ್ಯಾಟರ್ ಕೆ ಎಸ್ ಭರತ್ ಮತ್ತೊಮ್ಮೆ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ವಿಫಲವಾದರು. ಭರತ್ 28 ಎಸೆತಗಳನ್ನು ಎದುರಿಸಿ ಕೇವಲ ಒಂದು ಬೌಂಡರಿ ಸಹಿತ 6 ರನ್‌ ಗಳಿಸಿ ರೆಹನ್ ಅಹಮದ್‌ಗೆ ವಿಕೆಟ್ ಒಪ್ಪಿಸಿದರು. 

ಇನ್ನು 9ನೇ ವಿಕೆಟ್‌ಗೆ ರವಿಚಂದ್ರನ್ ಅಶ್ವಿನ್ ಹಾಗೂ ಜಸ್ಪ್ರೀತ್ ಬುಮ್ರಾ ಅಮೂಲ್ಯ 26 ರನ್‌ಗಳ ಜತೆಯಾಟ ನಿಭಾಯಿಸುವ ಮೂಲಕ ತಂಡದ ಮೊತ್ತವನ್ನು 250ರ ಗಡಿ ದಾಟಿಸಿದರು. ಅಶ್ವಿನ್ 29 ರನ್ ಬಾರಿಸಿ ಕೊನೆಯವರಾಗಿ ವಿಕೆಟ್ ಒಪ್ಪಿಸಿದರು.
 

Latest Videos
Follow Us:
Download App:
  • android
  • ios