ಪಾಕಿಸ್ತಾನ ಎದುರು ಭರ್ಜರಿ ಗೆಲುವು ಸಾಧಿಸಿದ ಇಂಗ್ಲೆಂಡ್ ಕ್ರಿಕೆಟ್ ತಂಡಪಾಕ್ ಸೋಲಿನ ಬೆನ್ನಲ್ಲೇ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಹಾದಿ ಸುಗಮಸದ್ಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಟೀಂ ಇಂಡಿಯಾ

ರಾವಲ್ಪಿಂಡಿ(ಡಿ.06): ಬೆನ್‌ಸ್ಟೋಕ್ಸ್‌ ನೇತೃತ್ವದ ಇಂಗ್ಲೆಂಡ್ ಕ್ರಿಕೆಟ್ ತಂಡವು ರಾವಲ್ಪಿಂಡಿ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ಎದುರು 74 ರನ್‌ಗಳ ರೋಚಕ ಜಯ ಸಾಧಿಸುವ ಮೂಲಕ ಸರಣಿಯಲ್ಲಿ ಶುಭಾರಂಭ ಮಾಡಿದೆ. ಅಕ್ಷರಶಃ ರನ್ ಮಳೆಯೇ ಹರಿದ ಪಂದ್ಯದಲ್ಲಿ 1500ಕ್ಕೂ ಅಧಿಕ ರನ್ ದಾಖಲಾದ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ನೇತೃತ್ವದ ಇಂಗ್ಲೆಂಡ್ ತಂಡವು ಕೊನೆಯ ದಿನ ಗೆಲುವಿನ ಕೇಕೆ ಹಾಕುವಲ್ಲಿ ಯಶಸ್ವಿಯಾಗಿದೆ. ಪಾಕಿಸ್ತಾನ ಎದುರು ಇಂಗ್ಲೆಂಡ್ ಗೆಲುವು ದಾಖಲಿಸಿದ್ದು ಕೇವಲ ಬೆನ್ ಸ್ಟೋಕ್ಸ್ ಪಡೆಗೆ ಮಾತ್ರ ಅನುಕೂಲವಾಗಲಿಲ್ಲ, ಬದಲಾಗಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಪ್ರವೇಶಿಸುವ ದೃಷ್ಟಿಯಿಂದ ಭಾರತಕ್ಕೂ ಅನುಕೂಲವಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತವರಿನಲ್ಲಿ ಇಂಗ್ಲೆಂಡ್ ವಿರುದ್ದ ನಡೆಯುತ್ತಿರುವ ಟೆಸ್ಟ್ ಸರಣಿಯು ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ತಂಡದ ಪಾಲಿಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಟೂರ್ನಿಯ ಅಂಕಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಉತ್ತಮ ಪಡಿಸಿಕೊಳ್ಳಲು ಒಳ್ಳೆಯ ಅವಕಾಶವೆನಿಸಿಕೊಂಡಿತ್ತು. ಆದರೆ ಪಾಕಿಸ್ತಾನ ತಂಡವು ಮೊದಲ ಪಂದ್ಯದಲ್ಲಿ ಆಘಾತಕಾರಿ ಸೋಲು ಅನುಭವಿಸುವ ಮೂಲಕ ತನ್ನ ಹಾದಿಯನ್ನು ಮತ್ತಷ್ಟು ದುರ್ಗಮಗೊಳಿಸಿಕೊಂಡಿದೆ. ಸದ್ಯ ಪಾಕಿಸ್ತಾನ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲೇ ಉಳಿದಿದೆ. ಒಂದು ವೇಳೆ ಭಾರತ ಅಥವಾ ಆಸ್ಟ್ರೇಲಿಯಾ ತಂಡಗಳು ಮುಂಬರುವ ಟೆಸ್ಟ್ ಸರಣಿಯನ್ನು ಕೈವಶ ಮಾಡಿಕೊಂಡರೆ ಪಾಕಿಸ್ತಾನ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ಗೇರುವ ಕನಸು ಭಗ್ನವಾಗಲಿದೆ.

ಪಾಕ್‌ ಎದುರು ಇಂಗ್ಲೆಂಡ್ ಗೆಲುವು, ಟೀಂ ಇಂಡಿಯಾಗೇನು ಲಾಭ?

ಭಾರತ ತಂಡವು ಇದೇ ತಿಂಗಳಿನಲ್ಲಿ ಬಾಂಗ್ಲಾದೇಶ ಪ್ರವಾಸದಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದ್ದು, ಒಂದು ವೇಳೆ ಭಾರತ ಆ ಸರಣಿಯನ್ನು 2-0 ಅಂತರದಲ್ಲಿ ಜಯಿಸಿದರೆ, ಆಸ್ಟ್ರೇಲಿಯಾ ಎದುರು ತವರಿನಲ್ಲಿ ನಡೆಯಲಿರುವ ಟೆಸ್ಟ್ ಸರಣಿಯಲ್ಲಿ ಒಂದಕ್ಕಿಂತ ಹೆಚ್ಚು ಪಂದ್ಯವನ್ನು ಸೋಲದೇ ಹೋದರೆ ಟೀಂ ಇಂಡಿಯಾ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂಕಪಟ್ಟಿಯಲ್ಲಿ ಅಗ್ರ 2ರೊಳಗೆ ಸ್ಥಾನ ಪಡೆಯಲಿದೆ.

Eng vs Pak: ಇಂಗ್ಲೆಂಡ್‌ ಬಾಜ್‌ಬಾಲ್‌ಗೆ ಒಲಿದ ಜಯ, ಪಾಕಿಸ್ತಾನಕ್ಕೆ ಮುಖಭಂಗ..!

ಸದ್ಯ ಪ್ಯಾಟ್ ಕಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ತಂಡವು 12 ಟೆಸ್ಟ್ ಪಂದ್ಯಗಳನ್ನಾಡಿ 96 ಅಂಕಗಳೊಂದಿಗೆ ಮೊದಲ ಸ್ಥಾನ ಪಡೆದಿದ್ದರೇ, ದಕ್ಷಿಣ ಆಫ್ರಿಕಾ, ಶ್ರೀಲಂಕಾ ಹಾಗೂ ಭಾರತ ತಂಡಗಳು ಟಾಪ್ 4 ಪಟ್ಟಿಯೊಳಗೆ ಸ್ಥಾನ ಪಡೆದಿವೆ. ಸತತ ಎರಡನೇ ಬಾರಿಗೆ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೇರಲು ಭಾರತ ತಂಡವು ಎದುರು ನೋಡುತ್ತಿದೆ. ಚೊಚ್ಚಲ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಟೀಂ ಇಂಡಿಯಾ ಫೈನಲ್‌ ಪ್ರವೇಶಿಸಿತ್ತು. ಇಂಗ್ಲೆಂಡ್‌ನ ಸೌಥಾಂಪ್ಟನ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತವನ್ನು ಮಣಿಸಿದ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ತಂಡವು ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು.