ಮಹಿಳಾ ಏಷ್ಯಾಕಪ್ ಟೂರ್ನಿಯಲ್ಲಿ ಭಾರತಕ್ಕೆ ಭರ್ಜರಿ ಜಯಥಾಯ್ಲೆಂಡ್ ಎದುರು 9 ವಿಕೆಟ್‌ಗಳ ಜಯ ಸಾಧಿಸಿದ ಭಾರತಮಹಿಳಾ ಏಷ್ಯಾಕಪ್ ಟೂರ್ನಿಯಲ್ಲಿ ಸೆಮೀಸ್ ಪ್ರವೇಶಿಸಿದ ಭಾರತ
ಸೈಲೆಟ್(ಅ.10): ಭಾರತ ಹಾಗೂ ಥಾಯ್ಲೆಂಡ್ ತಂಡಗಳ ನಡುವಿನ ಮಹಿಳಾ ಏಷ್ಯಾಕಪ್ ಟೂರ್ನಿಯ ಗ್ರೂಪ್ ಹಂತದ ಕೊನೆಯ ಪಂದ್ಯದಲ್ಲಿ ಸ್ಮೃತಿ ಮಂಧನಾ ನೇತೃತ್ವದ ಭಾರತ ಕ್ರಿಕೆಟ್ ತಂಡವು 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಥಾಯ್ಲೆಂಡ್ ನೀಡಿದ್ದ 38 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಟೀಂ ಇಂಡಿಯಾ, ಕೇವಲ 36 ಎಸೆತಗಳಲ್ಲಿ ಗೆಲುವಿನ ನಗೆ ಬೀರುವ ಮೂಲಕ ಅಧಿಕೃತವಾಗಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದೆ
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಥಾಯ್ಲೆಂಡ್ ತಂಡವು, ಭಾರತದ ಸಂಘಟಿತ ಬೌಲಿಂಗ್ ಎದುರು ತತ್ತರಿಸಿ ಹೋಯಿತು. ಕೊಚೊರಿಯನ್‌ಕೈ(12) ಹೊರತುಪಡಿಸಿ ಥಾಯ್ಲೆಂಡ್‌ನ ಯಾವೊಬ್ಬ ಬ್ಯಾಟರ್ ಕೂಡಾ ಎರಡಂಕಿ ಮೊತ್ತ ದಾಖಲಿಸಲು ಯಶಸ್ವಿಯಾಗಲಿಲ್ಲ. ಭಾರತದ ಪರ ಸ್ಪಿನ್ನರ್ ಸ್ನೆಹ್ ರಾಣಾ 4 ಓವರ್ ಬೌಲಿಂಗ್ ಮಾಡಿ ಕೇವಲ 9 ರನ್ ನೀಡಿ 3 ವಿಕೆಟ್ ಪಡೆದರೆ, ದೀಪ್ತಿ ಶರ್ಮಾ 10 ರನ್ ನೀಡಿ 2 ವಿಕೆಟ್ ಉರುಳಿಸಿದರು. ಇನ್ನು ಕನ್ನಡತಿ ರಾಜೇಶ್ವರಿ ಗಾಯಕ್ವಾಡ್ 3 ಓವರ್ ಬೌಲಿಂಗ್ ಮಾಡಿ ಕೇವಲ 8 ರನ್ ನೀಡಿ 2 ವಿಕೆಟ್ ಉರುಳಿಸಿದರೆ, ವೇಗಿ ಮೆಘನಾ ಸಿಂಗ್ 6 ರನ್ ನೀಡಿ ಒಂದು ವಿಕೆಟ್ ಉರುಳಿಸಿದರು.
ಇನ್ನು ಥಾಯ್ಲೆಂಡ್ ನೀಡಿದ್ದ ಸಾಧಾರಣ ಗುರಿ ಬೆನ್ನತ್ತಿದ ಭಾರತ ತಂಡವು ಕೇವಲ ಒಂದು ವಿಕೆಟ್ ಕಳೆದುಕೊಂಡು ಸುಲಭ ಗೆಲುವು ದಾಖಲಿಸಿತು. ಕಳೆದ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಚಚ್ಚಿದ್ದ ಶಫಾಲಿ ವರ್ಮಾ 8 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಮತ್ತೋರ್ವ ಆರಂಭಿಕ ಬ್ಯಾಟರ್ ಶಬ್ಬಿನೇನಿ ಮೆಘನಾ 18 ಎಸೆತಗಳನ್ನು ಎದುರಿಸಿ ಮೂರು ಬೌಂಡರಿ ಸಹಿತ 20 ರನ್ ಗಳಿಸಿದರೆ, ಪೂಜಾ ವಸ್ತ್ರಾಕರ್ ಅಜೇಯ 12 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಭಾರತ ಸೆಮಿಫೈನಲ್‌ಗೆ ಲಗ್ಗೆ: ಮಹಿಳಾ ಏಷ್ಯಾಕಪ್ ಟೂರ್ನಿಯಲ್ಲಿ ಏಷ್ಯಾದ 7 ತಂಡಗಳು ಟೂರ್ನಿಯಲ್ಲಿ ಪಾಲ್ಗೊಂಡಿದ್ದು, ಭಾರತ ಇದೀಗ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದೆ. ಭಾರತ ತಂಡವು ಆಡಿದ 6 ಪಂದ್ಯಗಳ ಪೈಕಿ 5 ಪಂದ್ಯಗಳಲ್ಲಿ ಗೆಲುವು ದಾಖಲಿಸುವ ಮೂಲಕ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದೆ. ಭಾರತ ಜತೆಗೆ ಪಾಕಿಸ್ತಾನ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ಅಥವಾ ಥಾಯ್ಲೆಂಡ್ ಈ ಎರಡು ತಂಡಗಳಲ್ಲೊಂದು ಸೆಮಿಫೈನಲ್ ಪ್ರವೇಶಿಸುವ ಸಾಧ್ಯತೆಯಿದೆ.
Women's Asia Cup 2022: ಭಾರತಕ್ಕಿಂದು ಥಾಯ್ಲೆಂಡ್ ಸವಾಲು
ಸ್ಮೃತಿ ಮಂಧನಾ 100ನೇ ಟಿ20 ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಜಯ:
ಥಾಯ್ಲೆಂಡ್ ಎದುರಿನ ಟಿ20 ಪಂದ್ಯವು ಹಂಗಾಮಿ ನಾಯಕ ಸ್ಮೃತಿ ಮಂಧನಾ ಪಾಲಿಗೆ 100ನೇ ಅಂತಾರಾಷ್ಟ್ರೀಯ ಟಿ20 ಪಂದ್ಯವಾಗಿದ್ದು, ಈ ಸಾಧನೆ ಮಾಡಿದ ಭಾರತ ಎರಡನೇ ಆಟಗಾರ್ತಿ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ. ಈ ಮೊದಲು ನಾಯಕಿ ಹರ್ಮನ್‌ಪ್ರೀತ್ ಕೌರ್, ಭಾರತ ಪರ 100 ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ ಮೊದಲ ಆಟಗಾರ್ತಿ ಎನಿಸಿಕೊಂಡಿದ್ದರು. ಹರ್ಮನ್‌ಪ್ರೀತ್ ಕೌರ್ ಅನುಪಸ್ಥಿತಿಯಲ್ಲಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ ಮಂಧನಾ, ತಂಡಕ್ಕೆ ಸುಲಭ ಗೆಲುವು ತಂದುಕೊಟ್ಟಿದ್ದಾರೆ.
