Asianet Suvarna News Asianet Suvarna News

WTC Final: ಟೆಸ್ಟ್ ವಿಶ್ವಕಪ್ ಗೆಲ್ಲುವ ಭಾರತದ ಕನಸು ಭಗ್ನ, ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್‌ಗೆ ಒಡೆಯ

ಟೆಸ್ಟ್ ವಿಶ್ವಕಪ್‌ ಫೈನಲ್‌ನಲ್ಲಿ ಮುಗ್ಗರಿಸಿದ ಟೀಂ ಇಂಡಿಯಾ
ಆಸ್ಟ್ರೇಲಿಯಾ ಎದುರು ಭಾರೀ ಅಂತರದ ಸೋಲು ಕಂಡ ಭಾರತ
ಆಸ್ಟ್ರೇಲಿಯಾ ನೂತನ ವಿಶ್ವ ಟೆಸ್ಟ್ ಚಾಂಪಿಯನ್‌

WTC Final Australia thrash India by 209 runs Clinch World Test Champion title kvn
Author
First Published Jun 11, 2023, 5:09 PM IST

ಲಂಡನ್‌(ಜೂ.11): ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗದೆ ಎತ್ತಿ ಹಿಡಿಯುವ ಟೀಂ ಇಂಡಿಯಾ ಕನಸು ಮತ್ತೊಮ್ಮೆ ಗಗನ ಕುಸುಮವಾಗಿಯೇ ಉಳಿದಿದೆ. ಬ್ಯಾಟರ್‌ಗಳ ವೈಫಲ್ಯದಿಂದಾಗಿ ಟೆಸ್ಟ್ ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಎದುರು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 209 ರನ್‌ಗಳ ಹೀನಾಯ ಸೋಲು ಕಂಡಿದೆ. 444 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಟೀಂ ಇಂಡಿಯಾ, 5ನೇ ದಿನದಾಟದ ಲಂಚ್ ಬ್ರೇಕ್‌ಗೂ ಮುನ್ನ 234 ರನ್‌ಗಳಿಗೆ ಸರ್ವಪತನ ಕಾಣುವ ಮೂಲಕ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಇಲ್ಲಿನ ದಿ ಓವಲ್‌ ಮೈದಾನದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 164/3 ರನ್‌ಗಳೊಂದಿಗೆ ಐದನೇ ದಿನದಾಟವನ್ನುಆರಂಭಿಸಿತು. ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಅಜಿಂಕ್ಯ ರಹಾನೆ ಮೇಲೆ ಸಾಕಷ್ಟು ನಿರೀಕ್ಷೆಯ ಭಾರವಿತ್ತು. ಈ ಇಬ್ಬರು ಬ್ಯಾಟರ್‌ಗಳನ್ನು ತಮ್ಮ ಮೇಲಿಟ್ಟ ನಿರೀಕ್ಷೆಯನ್ನು ಉಳಿಸಿಕೊಳ್ಳಲು ವಿಫಲರಾದರು. 5ನೇ ದಿನದಾಟದಲ್ಲಿ ವಿರಾಟ್ ಕೊಹ್ಲಿ ತಮ್ಮ ಖಾತೆಗೆ ಕೇವಲ 5 ರನ್ ಸೇರಿಸಿ ಸ್ಕಾಟ್ ಬೋಲೆಂಡ್ ಬೌಲಿಂಗ್‌ನಲ್ಲಿ ಸ್ಟೀವ್ ಸ್ಮಿತ್ ಹಿಡಿದ ಅದ್ಭುತ ಕ್ಯಾಚ್‌ಗೆ ಪೆವಿಲಿಯನ್ ಸೇರಿದರು. ವಿರಾಟ್ 78 ಎಸೆತಗಳಲ್ಲಿ 7 ಬೌಂಡರಿ ಸಹಿತ 49 ರನ್ ಸಿಡಿಸಿದರು. ಇನ್ನು ಅದೇ ಓವರ್‌ನಲ್ಲಿ 5ನೇ ಕ್ರಮಾಂಕದ ಬ್ಯಾಟರ್‌ ಆಗಿ ಬಡ್ತಿ ಪಡೆದು ಕ್ರೀಸ್‌ಗಿಳಿದ ರವೀಂದ್ರ ಜಡೇಜಾ ಕೇವಲ 2 ಎಸೆತಗಳನ್ನು ಎದುರಿಸಿ ವಿಕೆಟ್ ಕೀಪರ್ ಅಲೆಕ್ಸ್ ಕ್ಯಾರಿಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. 

ಶುಭ್‌ಮನ್ ಗಿಲ್‌ ವಿವಾದಾತ್ಮಕ ಔಟ್..! ಥರ್ಡ್‌ ಅಂಪೈರ್‌ನನ್ನು ಹಿಗ್ಗಾಮುಗ್ಗ ಟ್ರೋಲ್ ಮಾಡಿದ ಫ್ಯಾನ್ಸ್..!

ಇನ್ನು ಮಧ್ಯಮ ಕ್ರಮಾಂಕದಲ್ಲಿ ಮೊದಲ ಇನಿಂಗ್ಸ್‌ನಲ್ಲಿ ಅರ್ಧಶತಕ ಸಿಡಿಸಿದ್ದ ಅಜಿಂಕ್ಯ ರಹಾನೆ, ಆಸೀಸ್ ಬೌಲರ್‌ಗಳ ಎದುರು ಮತ್ತೊಮ್ಮೆ ಪ್ರತಿರೋಧ ತೋರಿದರಾದರೂ, ಹೆಚ್ಚುಹೊತ್ತು ಕ್ರೀಸ್‌ನಲ್ಲಿರಲು ಮಿಚೆಲ್ ಸ್ಟಾರ್ಕ್ ಅವಕಾಶ ನೀಡಲಿಲ್ಲ. ವಿಕೆಟ್‌ನಿಂದ ಹೊರಹೋಗುತ್ತಿದ್ದ ಚೆಂಡನ್ನು ಕೆಣಕಲು ಹೋಗಿ ರಹಾನೆ ಕೂಡಾ ಕ್ಯಾರಿಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಅಜಿಂಕ್ಯ ರಹಾನೆ 108 ಎಸೆತಗಳನ್ನು ಎದುರಿಸಿ 7 ಬೌಂಡರಿ ಸಹಿತ 46 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮೊದಲ ಇನಿಂಗ್ಸ್‌ನಲ್ಲಿ ಸಮಯೋಚಿತ ಅರ್ಧಶತಕ ಸಿಡಿಸಿದ್ದ ಶಾರ್ದೂಲ್ ಠಾಕೂರ್ 5 ಎಸೆತಗಳನ್ನು ಎದುರಿಸಿ ಖಾತೆ ತೆರೆಯುವ  ಮುನ್ನವೇ ನೇಥನ್‌ ಲಯನ್ ಬೌಲಿಂಗ್‌ನಲ್ಲಿ ಎಲ್‌ಬಿ ಬಲೆಗೆ ಬಿದ್ದರು. 

ವಿಕೆಟ್ ಕೀಪರ್‌ ಬ್ಯಾಟರ್ ಕೆ ಎಸ್ ಭರತ್ 41 ಎಸೆತಗಳನ್ನು ಎದುರಿಸಿ 2 ಬೌಂಡರಿ ಸಹಿತ 23 ರನ್ ಬಾರಿಸಿ ನೇಥನ್ ಲಯನ್‌ಗೆ ಮೂರನೇ ಬಲಿಯಾದರು. ಇನ್ನು ಉಮೇಶ್ ಯಾದವ್ ಒಂದು ರನ್ ಗಳಿಸಿ ಪೆವಿಲಿಯನ್ ಹಾದಿ ಹಿಡಿದರು. ಇನ್ನು ಕೊನೆಯಲ್ಲಿ ಮೊಹಮ್ಮದ್ ಶಮಿ 13 ರನ್‌ ಸಿಡಿಸಿ ಅಜೇಯರಾಗುಳಿದರೆ, ಸಿರಾಜ್ 1 ರನ್ ಬಾರಿಸಿ ನೇಥನ್ ಲಯನ್‌ಗೆ ವಿಕೆಟ್ ಒಪ್ಪಿಸುವುದರೊಂದಿಗೆ ಭಾರತದ ಹೋರಾಟ ಅಂತ್ಯವಾಯಿತು.

ಹೇಗಿತ್ತು ಟೆಸ್ಟ್ ವಿಶ್ವಕಪ್?

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ, ಟ್ರಾವಿಸ್ ಹೆಡ್ ಹಾಗೂ ಸ್ಟೀವ್ ಸ್ಮಿತ್ ಬಾರಿಸಿದ ಆಕರ್ಷಕ ಶತಕಗಳ ನೆರವಿನಿಂದ ಮೊದಲ ಇನಿಂಗ್ಸ್‌ನಲ್ಲಿ 169 ರನ್ ಬಾರಿಸಿ ಸರ್ವಪತನ ಕಂಡಿತು. ಇನ್ನು ಮೊದಲ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾ, ರಹಾನೆ ಹಾಗೂ ಶಾರ್ದೂಲ್ ಠಾಕೂರ್ ಸಮಯೋಚಿತ ಅರ್ಧಶತಕದ ನೆರವಿನಿಂದ 296 ರನ್‌ಗಳಿಗೆ ಸರ್ವಪತನ ಕಂಡಿತು. ಇನ್ನು ಭಾರೀ ಮುನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ, ಅಲೆಕ್ಸ್ ಕ್ಯಾರಿ ಬಾರಿಸಿದ ಅರ್ಧಶತಕದ ನೆರವಿನಿಂದ 270 ರನ್ ಬಾರಿಸಿ ಇನಿಂಗ್ಸ್ ಡಿಕ್ಲೇರ್ ಮಾಡಿಕೊಳ್ಳುವ ಮೂಲಕ ಭಾರತಕ್ಕೆ 444 ರನ್ ಗುರಿ ನೀಡಿತ್ತು.

Follow Us:
Download App:
  • android
  • ios