ಚೆನ್ನಸಂದ್ರ ನಿವಾಸಿ ಎನ್‌.ಎ. ಭರತೇಶ್‌ (20) ಬಂಧಿತ ಆರೋಪಿ. ಈತ ರೇವಾ ವಿಶ್ವವಿದ್ಯಾಲಯದಲ್ಲಿ 2ನೇ ವರ್ಷದ ಸಿವಿಲ್‌ ಎಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿದ್ದಾನೆ.

ಬೆಂಗಳೂರು (ಮೇ 1, 2023): ಕ್ಷುಲ್ಲಕ ಕಾರಣಕ್ಕೆ ನಗರದ ರೇವಾ ವಿಶ್ವವಿದ್ಯಾಲಯದಲ್ಲಿ ನಡೆದಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಕೊಲೆ ಪ್ರಕರಣ ಸಂಬಂಧ ಆರೋಪಿಯೊಬ್ಬನನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಚೆನ್ನಸಂದ್ರ ನಿವಾಸಿ ಎನ್‌.ಎ. ಭರತೇಶ್‌ (20) ಬಂಧಿತ ಆರೋಪಿ. ಈತ ರೇವಾ ವಿಶ್ವವಿದ್ಯಾಲಯದಲ್ಲಿ 2ನೇ ವರ್ಷದ ಸಿವಿಲ್‌ ಎಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿದ್ದಾನೆ.

ಏಪ್ರಿಲ್ 28ರ ರಾತ್ರಿ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ‘ರೇವೋತ್ಸವ’ ಹೆಸರಿನ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಗಲಾಟೆಯಾಗಿ 4ನೇ ವರ್ಷ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ವಿದ್ಯಾರ್ಥಿ ಭಾಸ್ಕರ್‌ ಜಟ್ಟಿ (22) ಎಂಬಾತನ ಎದೆಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಮತ್ತೊಬ್ಬ ವಿದ್ಯಾರ್ಥಿ ಶರತ್‌ ಎಂಬಾತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ: ಬೆಂಗಳೂರು: ರೇವಾ ಕಾಲೇಜಿನಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿಯ ಭೀಕರ ಕೊಲೆ!

ಭಾಸ್ಕರ್‌ ಜಟ್ಟಿ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಕರಣದ ಇನ್ನೂ ಕೆಲ ಆರೋಪಿಗಳು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ. ಬಂಧಿತ ಆರೋಪಿ ಭರತೇಶ್‌ನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಉಳಿದ ಆರೋಪಿಗಳ ಬಂಧನದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಬೀದರ್‌ನಲ್ಲಿ ಭಾರಿ ಮಳೆ: ಹಳ್ಳ ದಾಟಲು ಹೋಗಿ ಮಕ್ಕಳು ಸೇರಿ ಕುಟುಂಬದ ಮೂವರು ನೀರುಪಾಲು