ನಟ ದರ್ಶನ್, ಪವಿತ್ರ ಗೌಡ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್ ಮತ್ತು ಪವಿತ್ರಾ ಗೌಡ ಅವರ ಜಾಮೀನು ಅರ್ಜಿಗಳ ವಿಚಾರಣೆಯನ್ನು ಮುಂದೂಡಲಾಗಿದೆ. ದರ್ಶನ್ ಅವರ ಅರ್ಜಿಯನ್ನು ಸೆಪ್ಟೆಂಬರ್ 27ಕ್ಕೆ ಮತ್ತು ಪವಿತ್ರಾ ಗೌಡ ಅವರ ಅರ್ಜಿಯನ್ನು ಸೆಪ್ಟೆಂಬರ್ 25ಕ್ಕೆ ಮುಂದೂಡಲಾಗಿದೆ.
ಬೆಂಗಳೂರು (ಸೆ.23): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ ಮತ್ತು ಆತ್ಮೀಯ ಗೆಳತಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು ಮುಂದೂಡಿಕೆ ಮಾಡಲಾಗಿದೆ.
ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿಟಿ ಸಿವಿಲ್ ನ್ಯಾಯಾಲಯ ಕಾಮಾಕ್ಷಿಪಾಳ್ಯ ಠಾಣೆಯ ತನಿಖಾಧಿಕಾರಿಗಳು ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ಕೋರಿದ್ದರಿಂದ ಮುಂದಿನ ವಿಚಾರಣೆಯನ್ನು ಸೆ.27 ಕ್ಕೆ ಮುಂದೂಡಿಕೆ ಮಾಡಿದೆ.
ಜೊತೆಗೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆ. 25ಕ್ಕೆ ಮುಂದೂಡಿಕೆ ಮಾಡಲಾಗಿದೆ. ಕಾಮಾಕ್ಷಿಪಾಳ್ಯ ಠಾಣೆಯ ತನಿಖಾಧಿಕಾರಿಗಳು ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ಕೋರಿದ ಹಿನ್ನೆಲೆ ನ್ಯಾಯಾಧೀಶ ಜೈಶಂಕರ್ ಅವರಿಂದ ಈ ಆದೇಶ ಹೊರಬಿದ್ದಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಒಳಗೊಂಡಂತೆ 17 ಮಂದಿ ಆರೋಪಿಗಳ ವಿರುದ್ಧ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪವಿತ್ರಾ ಗೌಡ ಎ1 ಆರೋಪಿಯಾಗಿದ್ದು, ದರ್ಶನ್ ಪ್ರಕರಣದ ಎರಡನೇ ಆರೋಪಿಯಾಗಿದ್ದಾನೆ.
ಸೆ.30ರವರೆಗೆ ನ್ಯಾಯಾಂಗ ಬಂಧನ ಅವಧಿ ಇರುವ ಕಾರಣ ಈ ಹಿನ್ನೆಲೆಯಲ್ಲಿ ಕೆಲ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆಯಿದೆ. ಸದ್ಯ ದರ್ಶನ್ ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿದ್ದು, ಕೋರ್ಟ್ ಆದೇಶದ ಮೇರೆಗೆ ಇತ್ತೀಚೆಗೆ ಅವರನ್ನು ಪರಪ್ಪನ ಆಗ್ರಹಾರ ಜೈಲಿನಿಂದ ಬಳ್ಳಾರಿಗೆ ಸ್ಥಳಾಂತರ ಮಾಡಲಾಗಿದೆ.
ನಟ ದರ್ಶನ್ ತಮ್ಮ ಬಂಧನವಾದ 103 ದಿನಗಳ ಬಳಿಕ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ. ಪೊಲೀಸರು 3991 ಪುಟಗಳ ದೋಷಾರೋಪಣ ಪಟ್ಟಿಯನ್ನು ಸೆ. 4ರಂದು 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ 18 ದಿನಗಳ ಬಳಿಕ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿತ್ತು.