ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮಶಿ ಕಾಲಿಮಣಿ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ವಿವಾಹವಾದ ಆರೋಪದ ಮೇಲೆ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.
ಬೆಳಗಾವಿ(ಆ.31): ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ತವರು ಜಿಲ್ಲೆ ಬೆಳಗಾವಿಯಲ್ಲಿ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ, ಸಚಿವ ಸತೀಶ್ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯಲ್ಲಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮಶಿ ಕಾಲಿಮಣಿ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ವಿವಾಹವಾದ ಆರೋಪದ ಮೇಲೆ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.
2023ರ ನವೆಂಬರ್ 5ರಂದು ಭೀಮಶಿ ಕಾಲಿಮಣಿ ಈ ಕೃತ್ಯವೆಸಗಿದ್ದು, ವಿವಾಹದ ವೇಳೆ ಬಾಲಕಿಯ ವಯಸ್ಸು ಕೇವಲ 15 ವರ್ಷವಾಗಿತ್ತು. ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಯಮಕನಮರಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ದೂರು ಸ್ವೀಕರಿಸಿದ ತಕ್ಷಣ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ. ಪರ್ವಿನ್ ನೇತೃತ್ವದ ರಕ್ಷಣಾ ತಂಡವು ಬಸ್ಸಾಪುರಕ್ಕೆ ನಾಲ್ಕು ಬಾರಿ ಭೇಟಿ ನೀಡಿತ್ತು. ಆದರೆ, ಬಾಲಕಿಯನ್ನು ಪತ್ತೆಹಚ್ಚಲು ತಂಡ ವಿಫಲವಾಗಿತ್ತು.ಈ ಮಧ್ಯೆ, ಭೀಮಶಿ ಕಾಲಿಮಣಿ ಬಂಧನದ ಭೀತಿಯಿಂದ ತಪ್ಪಿಸಿಕೊಳ್ಳಲು ಬಾಲಕಿಯ ನಕಲಿ ಜನನ ಪ್ರಮಾಣ ಪತ್ರವನ್ನು ಬಿಡುಗಡೆ ಮಾಡಿ, ಆಕೆ ಪ್ರಾಪ್ತ ವಯಸ್ಸಿನವಳೆಂದು ದಾಖಲೆ ಸೃಷ್ಟಿಸಿದ್ದ ಎನ್ನಲಾಗಿದೆ. ಆದರೆ ಅಧಿಕಾರಿಗಳು ಶಾಲಾ ಟ್ರಾನ್ಸಫರ್ ಸರ್ಟಿಫಿಕೇಟ್‌ನೊಂದಿಗೆ ಈ ದಾಖಲೆಯನ್ನು ಹೋಲಿಕೆ ಮಾಡಿದಾಗ, ಭೀಮಶಿ ಕಾಲಿಮಣಿ ಬಾಲ್ಯ ವಿವಾಹ ಮಾಡಿಕೊಂಡಿರುವುದು ದೃಢವಾಗಿದೆ.
ಕೃತ್ಯ ದೃಢಪಟ್ಟ ಹಿನ್ನೆಲೆಯಲ್ಲಿ, ಗ್ರಾಮ ಪಂಚಾಯಿತಿ ಅಧ್ಯಕ್ಷನ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯು ಐದು ತಿಂಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ವರದಿಯಾಗಿದೆ. ಈ ಘಟನೆಯು ಸ್ಥಳೀಯ ಆಡಳಿತದ ವೈಫಲ್ಯವನ್ನು ಎತ್ತಿ ತೋರಿಸಿದೆ. ಭೀಮಶಿ ಕಾಲಿಮಣಿ ಇದೀಗ ತಲೆಮರೆಸಿಕೊಂಡಿದ್ದು, ಪೊಲೀಸರು ಆತನ ಹುಡುಕಾಟದಲ್ಲಿ ತೊಡಗಿದ್ದಾರೆ. ಈ ಘಟನೆಯು ಜಿಲ್ಲೆಯಲ್ಲಿ ಬಾಲ್ಯ ವಿವಾಹದಂತಹ ಸಾಮಾಜಿಕ ಕಳಂಕದ ವಿರುದ್ಧ ಕಠಿಣ ಕ್ರಮದ ಅಗತ್ಯವನ್ನು ತೋರಿಸಿದೆ.
