ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಪೊಲೀಸರ ಮೇಲೆ ದಾಳಿ ನಡೆಸಿದ ಆರೋಪಿ ರಮೇಶ ಕಿಲ್ಲಾರನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಆರೋಪಿ ಮತ್ತು ಪೊಲೀಸ್ ಪೇದೆ ಗಾಯಗೊಂಡಿದ್ದಾರೆ.
ಬೆಳಗಾವಿ, (ಆ.30): ಬೆಳಗಾವಿ ಜಿಲ್ಲೆಯ ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು (ಶನಿವಾರ) ಬೆಳಗಿನ ಜಾವ 6 ಗಂಟೆ ಸುಮಾರಿಗೆ ಗಂಭೀರ ಅಪರಾಧಗಳಲ್ಲಿ ಭಾಗಿಯಾಗಿದ್ದ ಆರೋಪಿ ರಮೇಶ ಕಿಲ್ಲಾರನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ ಘಟನೆ ವರದಿಯಾಗಿದೆ.
ಪ್ರಕರಣವೊಂದರಲ್ಲಿ ಆರೋಪಿ ರಮೇಶ ಕಿಲ್ಲಾರನನ್ನು ಬಂಧಿಸಲು ತೆರಳಿದ್ದ ಪೊಲೀಸರು. ಈ ವೇಳೆ ಪೊಲೀಸರ ಮೇಲೆ ಚಾಕುವಿನಿಂದ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಪೊಲೀಸ್ ಪೇದೆ ಷರೀಫ್ ದಫೇದಾರ್‌ಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾನೆ. ಮೊದಲಿಗೆ ಆರೋಪಿಯನ್ನು ಎಚ್ಚರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರೂ ಆತ ಜಗ್ಗದ ಕಾರಣ, ಕಿತ್ತೂರು ಪಿಎಸ್‌ಐ ಪ್ರವೀಣ ಗಂಗೋಳ್ಳಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಬಳಿಕ ಗಾಯಗೊಂಡ ರಮೇಶ ಕಿಲ್ಲಾರನನ್ನು ತಕ್ಷಣವೇ ಬೆಳಗಾವಿಯ ಬೀಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡ ಪೊಲೀಸ್ ಪೇದೆ ಷರೀಫ್ ದಫೇದಾರ್‌ಗೂ ಚಿಕಿತ್ಸೆ ನೀಡಲಾಗುತ್ತಿದೆ.
ರಮೇಶ ಕಿಲ್ಲಾರ ವಿರುದ್ಧ ಡಕಾಯಿತಿ, ದರೋಡೆ, ಸಾಮೂಹಿಕ ಅತ್ಯಾ೧ಚಾರ, ಮತ್ತು ಅಕ್ರಮ ಶಸ್ತ್ರಾಸ್ತ್ರ ಒಳಗೊಂಡಂತೆ ಒಟ್ಟು ಏಳಕ್ಕೂ ಹೆಚ್ಚು ಗಂಭೀರ ಪ್ರಕರಣಗಳು ದಾಖಲಾಗಿವೆ. ಈ ಘಟನೆಯಿಂದ ಕಿತ್ತೂರು ಪ್ರದೇಶದಲ್ಲಿ ಭೀತಿಯ ವಾತಾವರಣ ಸೃಷ್ಟಿಯಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
