ನಟಿ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಕ್ರೈಂ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಬೆಂಗಳೂರು(ಆ.4): ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಪ್ರಕರಣದಲ್ಲಿ ಸೈಬರ್ ಕ್ರೈಂ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೊದಲು ಇದೇ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು. ಒಟ್ಟಾರೆ, ಈ ಕೇಸಿನಲ್ಲಿ ಈಗಾಗಲೇ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳಿಸಿದನೆಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಅಪಹರಿಸಿ ದರ್ಶನ್ ಅಂಡ್ ಗ್ಯಾಂಗ್ ಕೊಲೆ ಮಾಡಿದ್ದರು. ಈ ಘಟನೆ ಸಂಬಂಧ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ನಟಿ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಇತ್ತೀಚೆಗೆ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು.
ಆದರೆ, ಈ ಪೋಸ್ಟ್‌ಗೆ ದರ್ಶನ್ ಅವರ 46 ಅಭಿಮಾನಿಗಳು ಅಶ್ಲೀಲ ಕಾಮೆಂಟ್‌ಗಳನ್ನು ಮಾಡಿದ್ದರು. ದರ್ಶನ್ ಫ್ಯಾನ್ಸ್ ಕೆಟ್ಟ ಕೊಳ್ಳಕು ಮೆಸೇಜ್‌ಗಳಿಂದ ಕೋಪಗೊಂಡ ರಮ್ಯಾ, ಸೈಬರ್ ಕ್ರೈಂ ಪೊಲೀಸರಿಗೆ ದೂರು ಸಲ್ಲಿಸಿದ್ದರು. ದರ್ಶನ ಪ್ರಕರಣ ನಡೆದಂದಿನಿಂದಲೂ ಫ್ಯಾನ್ಸ್ ಅನಾಗರಿಕರಂತೆ ವರ್ತಿಸುತ್ತಿರುವುದು ಮುಂದುವರಿಸಿದ್ದರು. ಇದೀಗ ರಮ್ಯಾ ದೂರು ಕೊಟ್ಟ ಹಿನ್ನೆಲೆ ಗಂಭೀರವಾಗಿ ಪರಿಗಣಿಸಿದ ಸಿಸಿಬಿ ಪೊಲೀಸರು, ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಇದೀಗ ಮತ್ತಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಈ ಆರೋಪಿಗಳು ಅಶ್ಲೀಲ ಸಂದೇಶಗಳ ಜೊತೆಗೆ ಅಶ್ಲೀಲ ವಿಡಿಯೋಗಳನ್ನೂ ಕಳುಹಿಸಿದ್ದಾರೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಆರೋಪಿಗಳ ವಿರುದ್ಧ ಕಠಿಣಕ್ರಮ:
ಇನ್ನುಳಿದ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಶೀಘ್ರದಲ್ಲೇ ಅವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯರ ವಿರುದ್ಧ ನಡೆಯುವ ಸೈಬರ್ ಕಿರುಕುಳವನ್ನು ತಡೆಗಟ್ಟಲು ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಉಳಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.
