ಕುಡಿದ ನಶೆಯಲ್ಲಿ ಜಗಳ: ಸ್ನೇಹಿತನ ಬರ್ಬರ ಹತ್ಯೆ
ಕ್ಷುಲ್ಲಕ ಕಾರಣಕ್ಕೆ ನಡೆದ ಸ್ನೇಹಿತರಿಬ್ಬರ ನಡುವೆ ನಡೆದ ಗಲಾಟೆ ಕೊಲೆಯೊಂದಿಗೆ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಬೆಂಗಳೂರು(ಜ.11): ಕುಡಿದ ನಶೆಯಲ್ಲಿ ಇಬ್ಬರು ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹಲಸೂರು ಗೇಟ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ.
ಅಜಿತ್ ಅಲಿಯಾಸ್ ಚೋಟು (27) ಕೊಲೆಯಾದ ಯುವಕ. ಘಟನೆ ಸಂಬಂಧ ಈತನ ಸ್ನೇಹಿತ ಚಂದ್ರಕುಮಾರ್(25) ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಬೈಕ್ ಟ್ಯಾಂಕ್ ಸ್ಫೋಟ: ನಾಲ್ವರಿಗೆ ಗಂಭೀರ ಗಾಯ
ಚಂದ್ರಕುಮಾರ್ ಮೂಲತಃ ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನವನಾಗಿದ್ದು, ಅಜಿತ್ ಮೂಲತಃ ಬಿಹಾರ ರಾಜ್ಯದವನಾಗಿದ್ದಾನೆ. ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ಅಜಿತ್ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಇಬ್ಬರು ಬಸ್ ನಿಲ್ದಾಣ ಹಾಗೂ ಇನ್ನಿತರ ಪ್ರದೇಶಗಳಲ್ಲಿ ಮಲಗಿಕೊಳ್ಳುತ್ತಿದ್ದರು. ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಕುಡಿದ ನಶೆಯಲ್ಲಿದ್ದ ಸ್ನೇಹಿತರ ನಡುವೆ ಕಬ್ಬನ್‌ಪೇಟೆ ಮುಖ್ಯರಸ್ತೆಯ ಸೊಪ್ಪಿನ ಮಾರ್ಕೆಟ್ ಬಳಿ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ಹೋಗಿದ್ದು, ಚಂದ್ರಕುಮಾರ್, ಅಜಿತ್ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದಾನೆ. ಘಟನೆ ಸಂಬಂಧ ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.