ಬೆಂಗಳೂರು(ಡಿ.13):  ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್‌ನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಸರಾಯಿಪಾಳ್ಯ ನಿವಾಸಿ ತನ್ವೀರ್‌ ಅಲಿಯಾಸ್‌ ತನ್ನು (26) ಕೊಲೆಯಾದ ದುರ್ದೈವಿ.

ತನ್ವೀರ್‌ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ರೌಡಿಶೀಟರ್‌ ಆಗಿದ್ದು, ಈತನ ವಿರುದ್ಧ ಹೆಣ್ಣೂರು, ದೊಡ್ಡಬಳ್ಳಾಪುರ, ಕೆ.ಜಿ.ಹಳ್ಳಿ ಸೇರಿದಂತೆ ಹಲವು ಠಾಣಾ ವ್ಯಾಪ್ತಿಯಲ್ಲಿ ಸುಲಿಗೆ, ಕೊಲೆ ಯತ್ನ ಹಾಗೂ ಕೊಲೆ ಪ್ರಕರಣಗಳು ದಾಖಲಾಗಿವೆ. ಹಲವು ಬಾರಿ ಜೈಲಿಗೆ ಹೋಗಿ ಬಂದಿದ್ದರೂ ತನ್ವೀರ್‌ ಅಪರಾಧ ಚಟುವಟಿಕೆಗಳನ್ನು ಮುಂದುವರೆಸಿದ್ದ.

ಆರು ವರ್ಷದ ಮಗನ ಕತ್ತು ಹಿಸುಕಿ ಕೊಲೆ ಮಾಡಿದ ತಾಯಿ..!

ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ತನ್ವೀರ್‌ ಹತ್ತು ದಿನಗಳ ಹಿಂದೆಯಷ್ಟೇ ಜೈಲಿನಿಂದ ಬಿಡುಗಡೆ ಹೊಂದಿದ್ದ. ಶುಕ್ರವಾರ ರಾತ್ರಿ ಏಳು ಗಂಟೆ ಸುಮಾರಿಗೆ ಮನೆ ಸಮೀಪ ನಡೆದುಕೊಂಡು ಹೋಗುತ್ತಿದ್ದ. ಈ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ತೀವ್ರ ರಕ್ತಸ್ರಾವವಾಗಿ ಆರೋಪಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೃತ್ಯ ನಡೆದಿರುವ ಸಾಧ್ಯತೆ ಇದೆ. ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.