stray dog attack in Maski ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಬೀದಿನಾಯಿಗಳು ಒಂದೇ ದಿನದಲ್ಲಿ ಇಬ್ಬರು ಮಕ್ಕಳು ಸೇರಿದಂತೆ 10 ಜನರ ಮೇಲೆ ದಾಳಿ ಮಾಡಿ ಗಾಯಗೊಳಿಸಿವೆ. ಈ ಘಟನೆಯಿಂದಾಗಿ ಸ್ಥಳೀಯರಲ್ಲಿ ಆತಂಕ ಮನೆಮಾಡಿದ್ದು, ಪುರಸಭೆಯ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ರಾಯಚೂರು (ಜ.25): ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಬೀದಿನಾಯಿಗಳ ಅಟ್ಟಹಾಸ ಮಿತಿಮೀರಿದೆ. ಭಾನುವಾರ ಒಂದೇ ದಿನ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 10 ಜನರ ಮೇಲೆ ನಾಯಿಗಳು ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿವೆ. ಪಟ್ಟಣದ ಪಿಂಜಾರ್ ಓಣಿ ಹಾಗೂ ಸೋಮನಾಥ ನಗರದಲ್ಲಿ ಈ ಘಟನೆ ನಡೆದಿದ್ದು, ಏಕಾಏಕಿ ದಾಳಿ ಮಾಡಿದ ನಾಯಿಯಿಂದಾಗಿ ಜನರು ದಿಕ್ಕಾಪಾಲಾಗಿ ಓಡುವಂತಾಯಿತು.

ಪಾದಚಾರಿಗಳು ಹಾಗೂ ಬೈಕ್ ಸವಾರರೇ ಟಾರ್ಗೆಟ್

ರಸ್ತೆಯಲ್ಲಿ ನಡೆದು ಹೋಗುತ್ತಿದ್ದವರು ಹಾಗೂ ಬೈಕ್ ಮೇಲೆ ಸಂಚರಿಸುತ್ತಿದ್ದವರನ್ನು ಗುರಿಯಾಗಿಸಿಕೊಂಡ ನಾಯಿಗಳು ಅಟ್ಟಾಡಿಸಿಕೊಂಡು ಹೋಗಿ ಕಚ್ಚಿವೆ. ಕೆಲವರ ಕಾಲು ಹಿಡಿದು ಎಳೆದಿದ್ದರೆ, ಇನ್ನು ಕೆಲವರ ಮೈ ಮೇಲೆ ಎರಗಿ ಮೈಮೇಲೆಲ್ಲ ಕಚ್ಚಿ ಗಾಯಗೊಳಿಸಿವೆ. ಹುಚ್ಚು ನಾಯಿಗಳೆಂದು ಸ್ಥಳೀಯರು ಶಂಕಿಸಿದ್ದಾರೆ.

ಆಸ್ಪತ್ರೆಗೆ ದಾಖಲಾದ ಗಾಯಾಳುಗಳು

ನಾಯಿ ಕಡಿತಕ್ಕೊಳಗಾದ ಹತ್ತು ಜನರನ್ನು ತಕ್ಷಣವೇ ಮಸ್ಕಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ರೇಬಿಸ್ ರೋಗ ನಿರೋಧಕ ಲಸಿಕೆ (Anti-Rabies Vaccine) ನೀಡಿ ಚಿಕಿತ್ಸೆ ಮುಂದುವರಿಸಲಾಗಿದೆ. ಸದ್ಯ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಪುರಸಭೆ ವಿರುದ್ಧ ಸಾರ್ವಜನಿಕರ ಆಕ್ರೋಶ

ಪಟ್ಟಣದಲ್ಲಿ ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೂ ಮಸ್ಕಿ ಪುರಸಭೆ ಯಾವುದೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ಸಾರ್ವಜನಿಕರು, ಶಾಲಾ ಮಕ್ಕಳ ಮೇಲೆ ದಾಳಿ ಮಾಡುತ್ತಿರುವ ಬೀದಿ ನಾಯಿಗಳನ್ನು ಹಿಡಿಯುವ ಕಾರ್ಯಾಚರಣೆ ನಡೆಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನೂ ವಿಕೋಪಕ್ಕೆ ಹೋಗಲಿದೆ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.