Dakshina Kannada News: ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದ ಅವಳಿ ಮಕ್ಕಳು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮುರುಳ್ಯದ ಕಡೀರದಲ್ಲಿ ನಡೆದಿದೆ.

ಸುಳ್ಯ (ಜೂ.20): ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದ ಅವಳಿ ಮಕ್ಕಳು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮುರುಳ್ಯದ ಕಡೀರದಲ್ಲಿ ನಡೆದಿದೆ. ಮೃತ ಮಕ್ಕಳನ್ನು ಕಡೀರ ನಿವಾಸಿ ವಸಂತ ಅವರ ಐದೂವರೆ ವರ್ಷದ ಅವಳಿ ಮಕ್ಕಳಾದ ಜಶ್ವಿನ್ ಮತ್ತು ಜಸ್ವಿತ್ ಎಂದು ಗುರುತಿಸಲಾಗಿದೆ. ಇಬ್ಬರೂ ಮುರುಳ್ಯ ಶಾಂತಿನಗರ ಶಾಲೆಯ ಯುಕೆಜಿ ವಿದ್ಯಾರ್ಥಿಗಳಾಗಿದ್ದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಂಜೆ ವೇಳೆ ವಸಂತ ಹಾಗೂ ಅವರ ಪತ್ನಿ ಮಕ್ಕಳನ್ನು ಮನೆಯಲ್ಲಿ ಬಿಟ್ಟು ತೋಟದ ಕೆಲಸಕ್ಕೆ ತೆರಳಿದ್ದರು. ಬಳಿಕ ಕೆಲಸ ಮುಗಿಸಿ ತಾಯಿ ಮನೆಗೆ ವಾಪಸ್ಸಾದಾಗ ಮಕ್ಕಳು ಮನೆಯಲ್ಲಿ ಕಾಣಿಸದ ಹಿನ್ನೆಲೆಯಲ್ಲಿ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ಆರಂಭಿಸಿದರು. ಈ ವೇಳೆ ಮನೆ ಸಮೀಪದ ಕೆರೆಯಲ್ಲಿ ಇಬ್ಬರು ಮಕ್ಕಳ ಮೃತದೇಹಗಳು ಪತ್ತೆಯಾಗಿವೆ. ಆಟವಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಶೋಕದ ವಾತಾವರಣ

ಮಾಹಿತಿ ತಿಳಿಯುತ್ತಿದ್ದಂತೆ ಸುಳ್ಯ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕೆರೆಯಿಂದ ಮಕ್ಕಳ ಮೃತದೇಹಗಳನ್ನು ಮೇಲಕ್ಕೆತ್ತಿದರು. ಘಟನೆಯಿಂದ ಕುಟುಂಬದಲ್ಲಿ ಆಕ್ರಂದನ ಮುಗಿಲುಮುಟ್ಟಿದ್ದು, ಇಡೀ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.