ಆರೋಪಿಗಳಿಂದ 15 ಲಕ್ಷ ಮೌಲ್ಯದ 20 ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ. ತಪ್ಪಿಸಿಕೊಂಡಿರುವ ಮತ್ತೊಬ್ಬ ಆರೋಪಿ ಪತ್ತೆಗೆ ತನಿಖೆ ಮುಂದುವರೆದಿದೆ. 

ಬೆಂಗಳೂರು(ನ.02): ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸುತ್ತಿದ್ದ ಬೈಕ್‌ಗಳ ಹ್ಯಾಂಡಲ್‌ ಲಾಕ್‌ ಮುರಿದು ಕಳ್ಳವು ಮಾಡುತ್ತಿದ್ದ ಇಬ್ಬರು ಕುಖ್ಯಾತ ಖದೀಮರು ವರ್ತೂರು ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆ ಹೊಸೂರು ತಾಲೂಕಿನ ಪೆರಮಾಪಲ್ಲಿ ಗ್ರಾಮದ ಬಾಬು ಹಾಗೂ ಮುದುಗಾನಪಲ್ಲಿಯ ನಿತಿನ್‌ ಬಂಧಿತರಾಗಿದ್ದು, ಆರೋಪಿಗಳಿಂದ .15 ಲಕ್ಷ ಮೌಲ್ಯದ 20 ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ. ತಪ್ಪಿಸಿಕೊಂಡಿರುವ ಮತ್ತೊಬ್ಬ ಆರೋಪಿ ಪತ್ತೆಗೆ ತನಿಖೆ ಮುಂದುವರೆದಿದೆ.

ಇತ್ತೀಚೆಗೆ ಕುರ್ತಿ ಸಮೀಪ ಸಬ್‌ ಇನ್‌ಸ್ಪೆಕ್ಟರ್‌ ತಿಮ್ಮರಾಯಪ್ಪ ನೇತೃತ್ವದ ವಾಹನ ತಪಾಸಣೆ ನಡೆಸುತ್ತಿತ್ತು. ಆ ವೇಳೆ ಆ ಮಾರ್ಗದಲ್ಲಿ ಬಂದ ಆರೋಪಿಗಳು ಪೊಲೀಸರನ್ನು ಕಂಡ ಕೂಡಲೇ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ನಡವಳಿಕೆಯಿಂದ ಅನುಮಾನಗೊಂಡ ಪೊಲೀಸರು, ಕೂಡಲೇ ಅವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಬೈಕ್‌ ಕಳ್ಳತನ ಕೃತ್ಯವು ಬಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೊಡಗಿನ ದೇವಸ್ಥಾನಗಳಲ್ಲಿ ಮಾಯವಾಗುತ್ತಿವೆ ಗಂಟೆಗಳು

ತಮಿಳುನಾಡಿನ ಬಾಬು ಹಾಗೂ ನಿತಿನ್‌ ವೃತ್ತಿಪರ ಕಳ್ಳರಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ ವಿವಿಧೆಡೆ ಅವರ ಮೇಲೆ ಪ್ರಕರಣಗಳು ದಾಖಲಾಗಿವೆ. ಇದೇ ಮೊದಲ ಬಾರಿಗೆ ನಗರದಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಮನೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸುತ್ತಿದ್ದ ಬೈಕ್‌ಗಳ ಹ್ಯಾಂಡಲ್‌ ಲಾಕ್‌ ಮುರಿದು ಆರೋಪಿಗಳು ಕಳವು ಮಾಡುತ್ತಿದ್ದರು. ಬಳಿಕ ನಕಲಿ ದಾಖಲೆ ಸೃಷ್ಟಿಸಿ ಅವುಗಳನ್ನು ಕಡಿಮೆ ಬೆಲೆಗೆ ತಮಿಳುನಾಡು ರಾಜ್ಯದಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.