Udupi: ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿದ್ದಾರೆ.
ಉಡುಪಿ (ಜು.06): ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಮಹಿಳಾ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಹಿಂದೆಯೂ ಹಲವು ಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಏನಿದು ಘಟನೆ?
ಮೂಕಾಂಬಿಕಾ ದೇವಿಯ ದರ್ಶನಕ್ಕೆ ಬಂದಿದ್ದ ನಿಮಿಶಾ ಎಂಬ ಭಕ್ತೆಯ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ₹80 ಸಾವಿರ ನಗದು ದೇವಸ್ಥಾನದ ಆವರಣದಲ್ಲೇ ಕಳ್ಳತನವಾಗಿತ್ತು. ಹಣ ಕಾಣೆಯಾಗಿರುವುದು ತಿಳಿದ ಬಳಿಕ ಅವರು ದೇವಸ್ಥಾನದ ಸುತ್ತಮುತ್ತ ಸಾಕಷ್ಟು ಹುಡುಕಾಡಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಬಳಿಕ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.
ಬಂಧಿಸುವಲ್ಲಿ ಯಶಸ್ವಿ
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ದೇವಸ್ಥಾನದ ಸಿಸಿಟಿವಿ ದೃಶ್ಯಾವಳಿ ಹಾಗೂ ಘಟನೆ ನಡೆದ ಸ್ಥಳದಲ್ಲಿ ಸಾರ್ವಜನಿಕರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದ ಫೋಟೋಗಳನ್ನು ಪರಿಶೀಲಿಸಿ ತನಿಖೆ ಆರಂಭಿಸಿದರು. ತಾಂತ್ರಿಕ ಮಾಹಿತಿ ಹಾಗೂ ದೃಶ್ಯ ಸಾಕ್ಷ್ಯಗಳ ಆಧಾರದಲ್ಲಿ ಆರೋಪಿಗಳನ್ನು ಕೇವಲ 24 ಗಂಟೆಗಳಲ್ಲೇ ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾದರು.
ಪೊಲೀಸ್ ತನಿಖೆಯಲ್ಲಿ ಬಹಿರಂಗ
ಬಂಧಿತ ಆರೋಪಿಗಳನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ನಿವಾಸಿಗಳಾದ ನೇತ್ರಾವತಿ, ಶಾರದಾ ಹಾಗೂ ದುರ್ಗಮ್ಮ ಎಂದು ಗುರುತಿಸಲಾಗಿದೆ. ಇವರ ವಿರುದ್ಧ ಈಗಾಗಲೇ ಹಲವು ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ದುರ್ಗಮ್ಮ ವಿರುದ್ಧ ಎರಡು ಹಾಗೂ ಶಾರದಾ ವಿರುದ್ಧ ಮೂರು ಪ್ರಕರಣಗಳಿರುವುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ.
ಸುಳಿವು ಸಿಗುವ ಸಾಧ್ಯತೆ
ಪ್ರಸಿದ್ಧ ಯಾತ್ರಾ ಕ್ಷೇತ್ರಗಳಲ್ಲಿ ಭಕ್ತರನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸುತ್ತಿದ್ದ ಈ ಮಹಿಳಾ ತಂಡದ ಬಂಧನದಿಂದ ಮತ್ತಷ್ಟು ಪ್ರಕರಣಗಳ ಸುಳಿವು ಸಿಗುವ ಸಾಧ್ಯತೆ ಇದೆ. ಬಂಧಿತರಿಂದ ಹೆಚ್ಚಿನ ವಿಚಾರಣೆ ನಡೆಸುತ್ತಿರುವ ಕೊಲ್ಲೂರು ಪೊಲೀಸರು, ಇತರ ಜಿಲ್ಲೆಗಳಲ್ಲೂ ಇದೇ ತಂಡದ ಕೈವಾಡವಿದೆಯೇ ಎಂಬ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.


