ದಾವಣಗೆರೆಯ ಜೈನ್ ಕಾಲೇಜು ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಬಂದಿದ್ದ ಬಸ್ ಉತ್ತರ ಕನ್ನಡದ ಶಿರಸಿ ಬಳಿಯ ಮತ್ತಿಘಟ್ಟ ತಿರುವಿನಲ್ಲಿ ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ಸುಮಾರು 10-12 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಕಾರವಾರ, ಉತ್ತರಕನ್ನಡ (ಡಿ.30): ವೈಕುಂಠ ಏಕಾದಶಿ ದಿನದಂದೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಪ್ರವಾಸಕ್ಕೆಂದು ಬಂದಿದ್ದ ಕಾಲೇಜು ವಿದ್ಯಾರ್ಥಿಗಳ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.

ದಾವಣಗೆರೆಯ ಜೈನ್ ಕಾಲೇಜಿನಿಂದ ಪ್ರವಾಸಕ್ಕೆ ಬಂದಿದ್ದ ಬಸ್

ದಾವಣಗೆರೆಯ ಜೈನ್ ಪಿಯು ಕಾಲೇಜಿನ ಸುಮಾರು 50 ವಿದ್ಯಾರ್ಥಿಗಳು ಡಿಸೆಂಬರ್ 28 ರಂದು ಶೈಕ್ಷಣಿಕ ಪ್ರವಾಸಕ್ಕೆಂದು ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ್ದರು. ಇಂದು ಮುಂಜಾನೆ ಶಿರಸಿ ಮಾರಿಕಾಂಬಾ ದೇವಾಲಯದ ದರ್ಶನ ಪಡೆದಿದ್ದ ವಿದ್ಯಾರ್ಥಿಗಳು, ಅಲ್ಲಿಂದ ಯಾಣ ಹಾಗೂ ವಿಭೂತಿ ಫಾಲ್ಸ್ ವೀಕ್ಷಣೆಗೆ ತೆರಳುತ್ತಿದ್ದರು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮತ್ತಿಘಟ್ಟ ಹಸೆಮನೆ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಬಸ್

ಶಿರಸಿ ತಾಲೂಕಿನ ಹಸೆಮನೆ ಗ್ರಾಮದ ಮತ್ತಿಘಟ್ಟ ಸಮೀಪದ ಅಪಾಯಕಾರಿ ತಿರುವಿನಲ್ಲಿ ಬಸ್ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆಯಲ್ಲೇ ಬಸ್ ಪಲ್ಟಿಯಾಗಿದ್ದು, ಅಪಘಾತದ ರಭಸಕ್ಕೆ ಬಸ್ಸಿನ ಗಾಜು ಸೇರಿದಂತೆ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಒಂದು ಬಸ್ ಹಾಗೂ ಒಂದು ಟಿಟಿ ವಾಹನದಲ್ಲಿ ವಿದ್ಯಾರ್ಥಿಗಳು ಪ್ರವಾಸ ಬೆಳೆಸಿದ್ದರು.

10 ರಿಂದ 12 ವಿದ್ಯಾರ್ಥಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

ಬಸ್ ಪಲ್ಟಿಯಾದ ಪರಿಣಾಮ ಸುಮಾರು 10 ರಿಂದ 12 ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಎಲ್ಲರೂ ಪಾರಾಗಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣವೇ ಚಿಕಿತ್ಸೆಗಾಗಿ ಅಂಕೋಲಾ ಹಾಗೂ ಶಿರಸಿಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತೀ ವೇಗ ಅಥವಾ ತಿರುವಿನಲ್ಲಿ ಚಾಲಕನ ಅಜಾಗರೂಕತೆ ಅಪಘಾತಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.