ಕಲ್ಕಡ್ಕ ಪ್ರಭಾಕರ್ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಕೋರ್ಟ್ ಸೂಚನೆ, ಪ್ರಚೋದನಕಾರಿ ಭಾಷಣ ಆರೋಪದಡಿ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದರ ವಿರುದ್ಧ ಪ್ರಭಾಕರ್ ಭಟ್ ಕೋರ್ಟ್ ಮೆಟ್ಟಿಲೇರಿದ್ದರು.

ಪುತ್ತೂರು (ಅ.27) ಪ್ರಚೋದನಕಾರಿ ಭಾಷಣ ಆರೋಪದಡಿ ದಾಖಲಾಗಿದ್ದ ಎಫ್ಐಆರ್‌ನಿಂದ ಪೊಲೀಸ್ ನೋಟಿಸ್ ಪಡೆದಿದ್ದ ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ನಿರಾಳರಾಗಿದ್ದಾರೆ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ ನೀಡಿದೆ. ದ‌.ಕ ಜಿಲ್ಲೆಯ ಪುತ್ತೂರು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆದೇಶ ನೀಡಿದೆ. ಮುಂದಿನ ವಿಚಾರಣೆವರೆಗೆ ಬಂಧನ ಸಹಿತ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ.

ಏನಿದು ಪ್ರಕರಣ?

ಪ್ರಚೋದನಕಾರಿ ಭಾಷಣ ಆರೋಪದಡಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಎಫ್ಐಆರ್ ದಾಖಲಾಗಿತ್ತು. ಅ.20ರಂದು ಪುತ್ತೂರು ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಭಾಷಣ ಮಾಡಿದ್ದರು. ಭಾಷಣದ ವೇಳೆ ಧಾರ್ಮಿಕ ಬಾವನೆಗಳ ಪ್ರಚೋಜನೆ, ಮಹಿಳೆಯರಿಗೆ ಅವಮಾನ ಮಾಡಿದ್ದಾರೆ ಎಂದು ಈಶ್ವರಿ ಪದ್ಮುಂಜ ಎಂಬವರು ನೀಡಿದ ದೂರಿನ ಅನ್ವಯ ಎಫ್ಐಆರ್ ದಾಖಲಾಗಿತ್ತು. BNS 79, 196, 299, 302 ಹಾಗೂ 3(5) ಕಲಂಗಳ ಅಡಿಯಲ್ಲಿ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಪುತ್ತೂರು ಗ್ರಾಮಂತರ ಪೊಲೀಸರು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು.

ಕೋರ್ಟ್ ಮೆಟ್ಟಿಲೇರಿದ್ದ ಕಲ್ಲಡ್ಕ ಪ್ರಭಾಕರ ಭಟ್

ಎಫ್ಐಆರ್ ದಾಖಲಾದ ಬೆನ್ನಲ್ಲೇ ಪೊಲೀಸರು ಕಲ್ಲಡ್ಕ ಪ್ರಭಾಕರ ಭಟ್‌ಗೆ ವಿಚಾರಣೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದರು. ಹೀಗಾಗಿ ಕಲ್ಲಡ್ಕ ಪ್ರಭಾಕರ ಭಟ್ ಪೊಲೀಸರ ಎಫ್ಐಆರ್ ವಿರುದ್ದ ಕೋರ್ಟ್ ಮೆಟ್ಟಿಲೇರಿದ್ದರು. ತನ್ನ ವಿರುದ್ಧ ದಾಖಲಾಗಿರುವ ಎಫ್ಐಆರ್ ದ್ವೇಷಪೂರಿತ ಎಂದು ವಾದಿಸಿದ್ದರು. ಇದೀಗ ಕೋರ್ಟ್ ಪೊಲೀಸರಿಗೆ ಮಹತ್ವದ ಸೂಚನೆ ನೀಡಿದೆ. ಮುಂದಿನ ವಿಚಾರಣೆ ವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚಿಸಿದೆ.

ಅಕ್ಟೋಬರ್ 29ಕ್ಕೆ ಮುಂದಿನ ವಿಚಾರಣೆ

ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಬಲವಂತದ ಕ್ರಮ ಕೈಗೊಳ್ಳಬೇಡಿ ಎಂದಿರುವ ಕೋರ್ಟ್, ಮುಂದಿನ ವಿಚಾರಣೆಯನ್ನು ಅಕ್ಟೋಬರ್ 29ಕ್ಕೆ ಮುಂದೂಡಿದೆ. ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್, ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಅಕ್ಟೋಬರ್ 29ರ ವರೆಗೆ ಕಲ್ಲಡ್ಕ ಪ್ರಭಾಕರ ಭಟ್ ನಿರಾಳರಾಗಿದ್ದಾರೆ.