ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ 'ಅಜ್ಜಿ ಹಬ್ಬ'ದ ವೇಳೆ ದೇವಸ್ಥಾನ ಪ್ರವೇಶಿಸಿದ ದಲಿತ ಯುವಕರ ಮೇಲೆ ಹಲ್ಲೆ ನಡೆದಿದೆ. ಘಟನೆಯ ನಂತರ ಜಿಲ್ಲಾಡಳಿತ ಮಧ್ಯಪ್ರವೇಶಿಸಿ, ದಲಿತರಿಗೆ ದೇವಸ್ಥಾನ ಪ್ರವೇಶ ಕಲ್ಪಿಸಿದ್ದು, 42 ಜನರ ವಿರುದ್ಧ ಪ್ರಕರಣ ದಾಖಲಿಸಿದೆ.

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ದೇವಸ್ಥಾನ ಪ್ರವೇಶದ ಹಿನ್ನೆಲೆಯಲ್ಲಿ ದಲಿತ ಯುವಕರ ಮೇಲೆ ಹಲ್ಲೆ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಖಡಕ್ ಕ್ರಮಕ್ಕೆ ಮುಂದಾಗಿದೆ. 40ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಹೌದು ದಾವಣಗೆರೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಲಗೆರೆ ಗ್ರಾಮದಲ್ಲಿ ನಿನ್ನೆ ರಾತ್ರಿ ಈ ಅಹಿತಕರ ಘಟನೆ ನಡೆದಿದೆ. ಗ್ರಾಮದಲ್ಲಿ 'ಅಜ್ಜಿ ಹಬ್ಬ'ದ ಸಂಭ್ರಮ ಮನೆ ಮಾಡಿತ್ತು. ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ತೆರಳಿದ್ದ ದಲಿತ ಯುವಕರ ಮೇಲೆ ಗ್ರಾಮದ ಕೆಲವು ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ದೇವಸ್ಥಾನದ ಮುಂಭಾಗ ನಡೆದ ಈ ಗಲಾಟೆಯ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಜಿಲ್ಲಾಡಳಿತದ ನಡೆ

ಘಟನೆ ತಿಳಿಯುತ್ತಿದ್ದಂತೆಯೇ ಅಲರ್ಟ್ ಆದ ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹಾಗೂ ಎಸ್‌ಪಿ ಶೇಖರ್ ಹೆಚ್.ಟಿ ಅವರು ಇಂದು ಖುದ್ದಾಗಿ ಬೆಳಲಗೆರೆ ಗ್ರಾಮಕ್ಕೆ ಭೇಟಿ ನೀಡಿದರು. ಪರಿಸ್ಥಿತಿಯನ್ನು ಪರಿಶೀಲಿಸಿದ ಅಧಿಕಾರಿಗಳು, ಎರಡೂ ಸಮುದಾಯದ ಮುಖಂಡರನ್ನು ಕರೆಸಿ ಶಾಂತಿ ಸಭೆ ನಡೆಸಿದರು.

ದೇವಸ್ಥಾನ ಪ್ರವೇಶಿಸಿ ಪೂಜೆ ಸಲ್ಲಿಸಿದ ದಲಿತರು

ಜಿಲ್ಲಾಧಿಕಾರಿಗಳ ಸಮ್ಮುಖದಲ್ಲೇ ದಲಿತ ಸಮುದಾಯದ ಮಹಿಳೆಯರು ಮತ್ತು ಯುವಕರಿಗೆ ದೇವಸ್ಥಾನದ ಒಳಗೆ ಹೋಗಲು ಜಿಲ್ಲಾಡಳಿತ ಅವಕಾಶ ಮಾಡಿಕೊಟ್ಟಿತು. ಎಲ್ಲರೂ ಒಟ್ಟಾಗಿ ದೇವಸ್ಥಾನಕ್ಕೆ ಪ್ರವೇಶಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಮೂಲಕ ಗ್ರಾಮದಲ್ಲಿನ ಅಸಮಾನತೆಯ ಗೋಡೆಯನ್ನು ಒಡೆಯುವ ಪ್ರಯತ್ನ ಮಾಡಲಾಯಿತು.

42 ಜನರ ವಿರುದ್ಧ FIR

ಇನ್ನು ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಸವಾಪಟ್ಟಣ ಪೊಲೀಸರು, ಒಟ್ಟು 42 ಜನರ ವಿರುದ್ಧ ಎಫ್‌ಐಆರ್ (FIR) ದಾಖಲಿಸಿಕೊಂಡಿದ್ದಾರೆ. ಮುಂದೆ ಈ ರೀತಿಯ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂದು ಗ್ರಾಮದ ಮುಖಂಡರಿಗೆ ಜಿಲ್ಲಾಧಿಕಾರಿಗಳು ಮತ್ತು ಎಸ್‌ಪಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಸದ್ಯ ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಪಡೆ ನಿಯೋಜಿಸಲಾಗಿದೆ. ಅಧಿಕಾರಿಗಳು ಗ್ರಾಮಸ್ಥರಿಗೆ ಸೌಹಾರ್ದತೆಯಿಂದ ಬಾಳುವಂತೆ ಕಿವಿಮಾತು ಹೇಳಿದ್ದಾರೆ.