ಹಿಂದುಳಿದ ವರ್ಗಗಳಲ್ಲಿ ಒಂದಾದ ಮಡಿವಾಳ ಜನಾಂಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೈಸೂರು ಜಿಲ್ಲಾ ಮಡಿವಾಳ ಸಂಘದ ವತಿಯಿಂದ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಮೈಸೂರು (ಅ.31): ಹಿಂದುಳಿದ ವರ್ಗಗಳಲ್ಲಿ ಒಂದಾದ ಮಡಿವಾಳ ಜನಾಂಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೈಸೂರು ಜಿಲ್ಲಾ ಮಡಿವಾಳ ಸಂಘದ ವತಿಯಿಂದ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಆರಂಭವಾದ ಮೆರವಣಿಗೆಯಲ್ಲಿ ಮಾಜಿ ಸಂಸದ ಎಚ್. ವಿಶ್ವನಾಥ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಿ. ಶ್ಯಾಮಸುಂದರ್, ಸಂಘದ ಅಧ್ಯಕ್ಷ ಚಂದ್ರಶೇಖರ(ಬೈರಿ) ನೇತೃತ್ವದಲ್ಲಿ ಸಾವಿರಾರು ಜನರು ಭಾಗವಹಿಸಿ ಜಿಲ್ಲಾಕಾರಿ ಕಚೇರಿ ತಲುಪಿದರು. ಪ್ರೊ. ಅನ್ನಪೂರ್ಣಮ್ಮನವರ ವರದಿ ಆಧಾರದ ಮೇಲೆ ನಮ್ಮ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸುವುದಕ್ಕೆ ಕ್ರಮಕೈಗೊಳ್ಳಬೇಕು. ಮೈಸೂರು ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗ ಅಭಿವೃದ್ಧಿ ನಿಗಮದಲ್ಲಿ ನಮ್ಮ ಜನಾಂಗಕ್ಕೆ ಉಂಟಾಗುತ್ತಿರುವ ಅನ್ಯಾಯದ ಬಗ್ಗೆ ನ್ಯಾಯ ದೊರಕಿಸಿಕೊಡುವುದು.ಎಲ್ಲಾ ತಾಲೂಕು ಕೇಂದ್ರಗಳಲ್ಲಿಯೂ ಮಡಿವಾಳ ಜನಾಂಗದ ಅಭಿವೃದ್ಧಿಗಾಗಿ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯವನ್ನು ಸರ್ಕಾರದಿಂದ ಸ್ಥಾಪಿಸುವುದು. ಮೈಸೂರು ಮಹಾನಗರ ಪಾಲಿಕೆ ಮತ್ತು ಎಲ್ಲಾ ಕೇಂದ್ರ ಮತ್ತು ಗ್ರಾಮಗಳಲ್ಲಿ ಶತಮಾನಗಳಿಂದ ಉಪಯೋಗಿಸುತ್ತಿದ್ದ ಮಡಿಕಟ್ಟೆ ಜಾಗಗಳನ್ನು ಮಡಿವಾಳರಿಗೆ ಮೀಸಲಿಡಬೇಕೆಂದು ಒತ್ತಾಯಿಸಿದರು.
ರಾಷ್ಟ್ರದ 18 ರಾಜ್ಯಗಳಲ್ಲಿ ಮತ್ತು 5 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಡಿವಾಳ (ಅಗಸ, ದೋಭಿ, ರಜಕ,ಪರಿಟ) ಜನಾಂಗವನ್ನು ಪರಿಶಿಷ್ಟ ಜಾತಿಗೆ ಆಯಾಯ ರಾಜ್ಯ ಸರ್ಕಾರಗಳ ಶಿಫಾರಸ್ಸಿನೊಂದಿಗೆ ಕೇಂದ್ರ ಸರ್ಕಾರ ಸೇರ್ಪಡೆ ಮಾಡಿದೆ. ಅದೇ ರೀತಿ ಕರ್ನಾಟಕ ರಾಜ್ಯದಲ್ಲೂ ಕೂಡ ಮಡಿವಾಳ ಜನಾಂಗವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು. ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಸಮುದಾಯ ಭವನ, ವಿದ್ಯಾರ್ಥಿ ನಿಲಯ ಸ್ಥಾಪಿಸಬೇಕು. ಮಡಿಕಟ್ಟೆ ಜಾಗಗಳನ್ನು ಮಡಿವಾಳವರಿಗೆ ಮೀಸಲಿಡಬೇಕು ಎಂದು ಇದೇ ವೇಳೆ ಆಗ್ರಹಿಸಲಾಯಿತು.
