ಬೆಂಗಳೂರು (ಜೂ. 16):  ಪ್ರತಿ 200 ವಿದ್ಯಾರ್ಥಿಗಳಿಗೆ ಒಂದರಂತೆ ಆರೋಗ್ಯ ಕೇಂದ್ರ ಸ್ಥಾಪನೆ, ಜ್ವರ, ನೆಗಡಿ, ಕೆಮ್ಮು ಇದ್ದಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ವ್ಯವಸ್ಥೆ, ಗಡಿ ರಾಜ್ಯದಿಂದ ನಮ್ಮ ರಾಜ್ಯಕ್ಕೆ ಬಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳ ಸಹಾಯದಿಂದ ಇ-ಪಾಸ್‌ ವ್ಯವಸ್ಥೆ ಮಾಡಿಸುವಂತೆ ಪಿಯು ಇಲಾಖೆ ನಿರ್ದೇಶಕಿ ಎಂ. ಕನಗವಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜೂ.18ರಂದು ನಡೆಯಲಿರುವ ದ್ವಿತೀಯ ಪಿಯು ಆಂಗ್ಲ ಭಾಷಾ ಪರೀಕ್ಷೆ ವೇಳೆ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ರಾಜ್ಯದಲ್ಲಿರುವ 1016 ಪರೀಕ್ಷಾ ಕೇಂದ್ರಗಳನ್ನು ಜೂ.15 ರ ಸಂಜೆ ವೇಳೆಗೆ ಸ್ಯಾನಿಟೈಸ್‌ ಮಾಡಬೇಕು. 200 ವಿದ್ಯಾರ್ಥಿಗಳಿಗೆ ಒಂದರಂತೆ ಆರೋಗ್ಯ ತಪಾಸಣಾ ಕೇಂದ್ರ ತೆರೆಯಬೇಕು. ವಿದ್ಯಾರ್ಥಿಗಳು ಮಾಸ್ಕ್‌ ಧರಿಸಿರುವುದನ್ನು ಖಾತ್ರಿ ಮಾಡಿಕೊಂಡು ಪ್ರವೇಶ ಕಲ್ಪಿಸಬೇಕು.

ಪಿಯುಸಿ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್....!

ಜ್ವರ, ನೆಗಡಿ, ಕೆಮ್ಮು ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ಗಡಿ ರಾಜ್ಯದಿಂದ ನಮ್ಮ ರಾಜ್ಯಕ್ಕೆ ಬಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳ ಸಹಾಯದಿಂದ ಇ-ಪಾಸ್‌ ವ್ಯವಸ್ಥೆ ಮಾಡಬೇಕು. ಗಡಿ ಪ್ರವೇಶಿಸಲು ವಿದ್ಯಾರ್ಥಿಗಳಿಗೆ ಅನುಮತಿ ನೀಡುವಂತೆ ಪೊಲೀಸರ ಬಳಿ ಮನವಿ ಮಾಡಬೇಕು ಎಂದು ಪಿಯು ಇಲಾಖೆ ನಿರ್ದೇಶಕಿ ಎಂ.ಕನಗವಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಯಾ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಸಮಿತಿ ಸಾರಿಗೆ ಸಂಚಾರದಲ್ಲಿ ಅವ್ಯವಸ್ಥೆ ಆಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದೆ.

ಗೈರು ಹಾಜರಾದರೇನು ಏನು ಮಾಡಬೇಕು:

ಪಿಯು ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಬಂದರೆ ಅಥವಾ ಗೈರು ಹಾಜರಾಗುವ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯಲ್ಲಿ ಪ್ರಥಮ ಅವಕಾಶ ಎಂದು ನಮೂದಿಸಿ ಪರೀಕ್ಷೆ ನೀಡುವ ಬಗ್ಗೆ ಮಾರ್ಗಸೂಚಿಯಲ್ಲಿ ಪ್ರಸ್ತಾಪಿಸಲಾಗಿಲ್ಲ. ಸದ್ಯ ಪರೀಕ್ಷೆ ಮಾಡುವ ಆತುರದಲ್ಲಿರುವ ಇಲಾಖೆ ಪರೀಕ್ಷೆ ನಂತರ ಗೈರು ಹಾಜರಾದವರ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.