ಬೆಂಗಳೂರು(ಜೂ.12): ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳು ನಡೆಸುತ್ತಿರುವ ದೂರ ಶಿಕ್ಷಣ ಕೋರ್ಸ್‌ಗಳನ್ನು ರದ್ದುಗೊಳಿಸಿ ಇನ್ನು ಮುಂದೆ ರಾಜ್ಯದಲ್ಲಿ ಒಂದೇ ಮುಕ್ತ ವಿಶ್ವವಿದ್ಯಾಲಯದಡಿ ದೂರಶಿಕ್ಷಣ ನೀಡುವ ವ್ಯವಸ್ಥೆಯನ್ನು ಜಾರಿಗೊಳಿಸಲು ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ.

ದೂರಶಿಕ್ಷಣ ಕೋರ್ಸ್‌ಗಳನ್ನು ನೀಡಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮಾತ್ರ ಇನ್ನುಮುಂದೆ ಕಾರ್ಯ ನಿರ್ವಹಿಸಲಿದ್ದು, ಅದರಡಿಯಲ್ಲಿಯೇ ದೂರಶಿಕ್ಷಣ ವ್ಯವಸ್ಥೆ ಅನುಷ್ಠಾನಗೊಳಿಸಲು ತೀರ್ಮಾನಿಸಿದೆ. ಅಲ್ಲದೆ, ಮಂಡ್ಯ ಮತ್ತು ಮಹಾರಾಣಿ ಕ್ಲಸ್ಟರ್‌ ವಿಶ್ವವಿದ್ಯಾಲಯಕ್ಕೆ ಆಡಳಿತಾಧಿಕಾರಿ ನೇಮಕ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಮುಕ್ತ ವಿವಿ ಶಿಕ್ಷಣ ಪ್ರವೇಶ ಪ್ರಮಾಣ ಹೆಚ್ಚಳಕ್ಕೆ ಸೂಚನೆ

ವಿಧಾನಸೌಧದಲ್ಲಿ ಗುರುವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಒಂದೇ ಮುಕ್ತ ವಿಶ್ವವಿದ್ಯಾಲಯ ಕಾರ್ಯನಿರ್ವಹಿಸಬೇಕು ಎಂಬ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಬೇರೆ ಬೇರೆ ವಿಶ್ವವಿದ್ಯಾಲಯಗಳು ದೂರ ಶಿಕ್ಷಣವನ್ನು ನಡೆಸುತ್ತಿದ್ದು, ಅವುಗಳನ್ನು ರದ್ದುಗೊಳಿಸಲಾಗುವುದು. ದೂರ ಶಿಕ್ಷಣವೆಂದರೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮಾತ್ರ ಕಾರ್ಯನಿರ್ವಹಿಸಬೇಕು ಎಂಬ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.