ಬೆಂಗಳೂರು(ಜು.14): ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಕ್ರೈಸ್ಟ್‌ ವಿಶ್ವವಿದ್ಯಾಲಯ ಪದವಿ ತರಗತಿಗಳಿಗೆ ಆನ್‌ಲೈನ್‌ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಸೋಮವಾರ ಎನ್‌ಎಸ್‌ಯುಐ ವಿದ್ಯಾರ್ಥಿ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಡೈರಿ ವೃತ್ತದಿಂದ ಕಾಲೇಜಿನವರೆಗೂ ಜಾಥಾ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.

ಈಗಾಗಲೇ ಅಂತಿಮ ವರ್ಷದ ಪದವಿ ಹೊರತುಪಡಿಸಿ ಉಳಿದ ವಿದ್ಯಾರ್ಥಿಗಳಿಗೆ ಯುಜಿಸಿ ಮತ್ತು ರಾಜ್ಯ ಸರ್ಕಾರ ಪರೀಕ್ಷೆಗಳನ್ನು ರದ್ದುಗೊಳಿಸಿದೆ. ಸ್ವಾಯತ್ತ ಸಂಸ್ಥೆಯಾಗಿರುವ ಕ್ರೈಸ್ಟ್‌ ವಿಶ್ವವಿದ್ಯಾಲಯ ಕೇಂದ್ರ ಮತ್ತು ರಾಜ್ಯ ಸರ್ಕಾರ ಆದೇಶಗಳನ್ನು ಗಾಳಿಗೆ ತೂರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

'ಆನ್‌ಲೈನ್‌ ಶಿಕ್ಷಣಕ್ಕಾಗಿ ಲ್ಯಾಪ್‌ಟಾಪ್‌, ಟ್ಯಾಬ್‌ ನೀಡಿ'

ಲಾಕ್‌ಡೌನ್‌ ಸಮಯದಲ್ಲಿ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಿಲ್ಲ. ಆನ್‌ಲೈನ್‌ ಮೂಲಕ ತರಗತಿಗಳನ್ನು ಸರಿಯಾಗಿ ಮಾಡಿಲ್ಲ. ಹೀಗಿದ್ದರೂ ಪರೀಕ್ಷೆಗಳನ್ನು ನಡೆಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ. ಆನ್‌ಲೈನ್‌ ತರಗತಿಗಳಲ್ಲಿ ವಿದ್ಯಾರ್ಥಿಗಳ ಸಂಶಯಗಳು, ಗೊಂದಲವನ್ನು ಬಗೆಹರಿಸಲು ಸಾಧ್ಯವಾಗಿಲ್ಲ. ಅದೇ ರೀತಿ ವಿದ್ಯಾರ್ಥಿಗಳಿಗೂ ಆನ್‌ಲೈನ್‌ ಪಾಠ ಸಂಪೂರ್ಣವಾಗಿ ತಲುಪಿಲ್ಲ. ಪರಿಸ್ಥಿತಿ ಹೀಗಿರುವಾಗ ಯಾವ ಆಧಾರದಲ್ಲಿ ಪರೀಕ್ಷೆಗಳನ್ನು ನಡೆಸುತ್ತಾರೆ ಎಂಬುದೇ ತಿಳಿಯುತ್ತಿಲ್ಲ. ಆದ್ದರಿಂದ ಕೂಡಲೇ ಪರೀಕ್ಷೆಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸದ ಕುಲಪತಿಗಳು

ಪರೀಕ್ಷೆ ರದ್ದುಗೊಳಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನೀಡಿದ ಮನವಿಯನ್ನು ಸ್ವೀಕರಿಸಲು ಕುಲಪತಿಗಳು ನಿರಾಕರಿಸಿದ ಘಟನೆ ಜರುಗಿತು. ಈ ವೇಳೆ ವಿದ್ಯಾರ್ಥಿಗಳು ಕಾಲೇಜಿನ ಗೇಟ್‌ಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದರು. ಕೆಲಕಾಲ ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು. ನಂತರ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದರು.