Education: 6ನೇ ವಯಸ್ಸಿಗೆ 1ನೇ ಕ್ಲಾಸ್ ಪ್ರವೇಶ: ಹೈಕೋರ್ಟ್ ಅಸ್ತು
ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 2025-26ನೇ ಸಾಲಿನಿಂದ ಮೊದಲನೇ ತರಗತಿಗೆ ಪ್ರವೇಶ ಪಡೆಯಲು 5 ವರ್ಷ 5 ತಿಂಗಳು ಬದಲು ಮಗುವಿಗೆ 6 ವರ್ಷ ತುಂಬಿರಬೇಕು ಎಂದು ರಾಜ್ಯ ಸರ್ಕಾರ 2022ರಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಚ್ ಪುರಸ್ಕರಿಸಿದೆ.
ಬೆಂಗಳೂರು (ಆ.10) : ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 2025-26ನೇ ಸಾಲಿನಿಂದ ಮೊದಲನೇ ತರಗತಿಗೆ ಪ್ರವೇಶ ಪಡೆಯಲು 5 ವರ್ಷ 5 ತಿಂಗಳು ಬದಲು ಮಗುವಿಗೆ 6 ವರ್ಷ ತುಂಬಿರಬೇಕು ಎಂದು ರಾಜ್ಯ ಸರ್ಕಾರ 2022ರಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ಪುರಸ್ಕರಿಸಿದೆ.
ಈ ಕುರಿಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ(Department of Primary and Secondary Education) ನಿರ್ದೇಶಕರು 2022ರ ಜು.26ರಂದು ಹೊರಡಿಸಿದ್ದ ಅಧಿಸೂಚನೆ ರದ್ದು ಕೋರಿ ಬೆಂಗಳೂರಿನ ಅನಿಕೇತ್ ಎಂಬುವರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರ ನ್ಯಾಯಪೀಠ ಈ ಆದೇಶ ಮಾಡಿದೆ.
ಎಸ್ಸಿ-ಎಸ್ಟಿ ಕಾಯ್ದೆಯಡಿ ಸುಳ್ಳು ಕೇಸು: ಹೈಕೋರ್ಟ್ ಕಿಡಿ
ಪ್ರಕರಣ ಏನು?:
ಬೆಂಗಳೂರಿನ ಥಣಿಸಂದ್ರದಲ್ಲಿರುವ ರಾಷ್ಟೊ್ರೕತ್ಥಾನ ವಿದ್ಯಾಕೇಂದ್ರದಲ್ಲಿ(Rashtrothana Vidyakendra) ತಮ್ಮ ಪುತ್ರಿ ತಿಷಿಕಾಳನ್ನು ಪ್ರಸಕ್ತ ವರ್ಷ ಎಲ್‌ಕೆಜಿಗೆ ಸೇರ್ಪಡೆ ಮಾಡಿಕೊಳ್ಳುವಂತೆ ಅರ್ಜಿದಾರರು ಕೋರಿದ್ದರು. ಇದಕ್ಕೆ ಪೂರಕವಾಗಿ ಅರ್ಜಿದಾರರಿಂದ ಶಾಲೆಯು ನಿಗದಿತ ಶುಲ್ಕ ಸಹ ಪಡೆದಿತ್ತು. ಆದರೆ, 2023ರ ಜೂ.1ಕ್ಕೆ ತಿಷಿಕಾಗೆ ನಾಲ್ಕು ವರ್ಷ ಪೂರ್ಣಗೊಂಡಿರಲಿಲ್ಲ. ಇದರಿಂದ ಆಕೆ ಎಲ್‌ಕೆಜಿಗೆ ಪ್ರವೇಶ ಪಡೆಯಲು ಅನರ್ಹಳಾಗಿದ್ದಾಳೆ ಎಂದುತಿಳಿಸಿ ಶಾಲೆಯು ಅರ್ಜಿದಾರರಿಗೆ ಇ-ಮೇಲ್ ಮಾಡಿತ್ತು. ಒಂದನೇ ತರಗತಿ ಪ್ರವೇಶಕ್ಕೆ 2025-26ನೇ ಸಾಲಿನಲ್ಲಿ ಆರು ವರ್ಷ ತುಂಬಿರಬೇಕು ಎಂಬುದಾಗಿ ತಿಳಿಸಿ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕರು 2018ರ ಮೇ 23ರಂದು ಹೊರಡಿಸಿದ ಅಧಿಸೂಚನೆಯನ್ನೂ ಇ-ಮೇಲ್‌ನಲ್ಲಿ ಲಗತ್ತಿಸಿದ್ದ ಶಾಲೆ, ಸರ್ಕಾರದ ಅಧಿಸೂಚನೆ ಪ್ರಕಾರ ತಿಷಿಕಾಳನ್ನು ನರ್ಸರಿಯಲ್ಲೇ ಉಳಿಸಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿತ್ತು.
ಸರ್ಕಾರದ ಈ ಅಧಿಸೂಚನೆ ರದ್ದು ಕೋರಿ ಹೈಕೋರ್ಚ್ ಮೆಟ್ಟಿಲೇರಿದ್ದ ಅರ್ಜಿದಾರರು, 2020ರ ಮೇ 11ರಂದು ಸರ್ಕಾರ ಹೊರಡಿಸಿದ್ದ ಅಧಿಸೂಚನೆ ಪ್ರಕಾರ ಒಂದನೇ ತರಗತಿಗೆ ಪ್ರವೇಶ ಪಡೆಯಲು ಕನಿಷ್ಠ 5.5 ವರ್ಷ ಆಗಿರಬೇಕು. ಎಲ್‌ಜಿಗೆ ಮಗು ಸೇರಿಸಲು 3.5 ವರ್ಷ ಆಗಿರಬೇಕು. ಈ ಅಧಿಸೂಚನೆಯು ತಮಗೆ ಅನ್ವಯವಾಗುತ್ತದೆ ಹೊರತು 2018ರ ಮೇ 23ರ ಅಧಿಸೂಚನೆಯಲ್ಲ ಎಂದು ತಿಳಿಸಿದ್ದರು.
ಹೈಕೋರ್ಟ್ ಹೇಳಿದ್ದೇನು?:
ಅರ್ಜಿದಾರರ ಈ ವಾದ ಒಪ್ಪದ ಹೈಕೋರ್ಟ್, ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿ ಕೇಂದ್ರಿತವಾಗಿ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)-2020ರಲ್ಲಿ ಒಂದನೇ ತರಗತಿ ಪ್ರವೇಶಕ್ಕೆ ಕನಿಷ್ಠ ಮತ್ತು ಗರಿಷ್ಠ ಅರ್ಹತಾ ಮಾನದಂಡ ಸರಿಯಾಗಿ ಮಾರ್ಪಾಡು ಮಾಡಲಾಗಿದೆ. ಜಾಗತಿಕ ಶೈಕ್ಷಣಿಕ ಮಾರ್ಗಸೂಚಿ ಆಧರಿಸಿ ಶಾಲಾ ಪ್ರವೇಶಾತಿ ವಯಸ್ಸನ್ನು ಎನ್‌ಇಪಿ ಮಾನದಂಡಗಳಲ್ಲಿ ಸೇರಿಸಲಾಗಿದೆ ಎಂದು ಅಭಿಪ್ರಾಯಪಟ್ಟಿದೆ.
ಬೆಂಗ್ಳೂರಲ್ಲಿ ಅಸಮರ್ಪಕ ಟಾಯ್ಲೆಟ್: ಬಿಬಿಎಂಪಿಗೆ ಹೈಕೋರ್ಟ್ ಚಾಟಿ
ಅಲ್ಲದೆ, ರಾಷ್ಟೊ್ರೕತ್ಥಾನ ವಿದ್ಯಾಕೇಂದ್ರ ಎನ್‌ಇಪಿ ಮಾರ್ಗಸೂಚಿಗಳನ್ನು ಪಾಲಿಸಬೇಕಿದೆ. ರಾಜ್ಯ ಸರ್ಕಾರ ಹೊರಡಿಸಿರುವ ಪ್ರವೇಶಾತಿ ಮಾರ್ಗಸೂಚಿಗಳು ಎನ್‌ಇಪಿಗೆ ಅನುಗುಣವಾಗಿವೆ. ಆದ್ದರಿಂದ ವಿದ್ಯಾರ್ಥಿನಿ ಅದೇ ತರಗತಿಯಲ್ಲಿ ಉಳಿಯಬೇಕಾಗುತ್ತದೆ ಎಂಬ ಕಾರಣಕ್ಕೆ ಮಾರ್ಗಸೂಚಿಯಲ್ಲಿ ಹಸ್ತಕ್ಷೇಪ ಮಾಡಲಾಗದು ಎಂದು ತಿಳಿಸಿದ ಹೈಕೋರ್ಚ್, ಅರ್ಜಿ ವಜಾಗೊಳಿಸಿ ಆದೇಶಿಸಿದೆ.