Karnataka Universities: ರಾಜ್ಯದ 6 ವಿವಿ `ಯೂನಿವರ್ಸಿಟಿ ಆಫ್ ಎಮಿನೆನ್ಸ್’ ದರ್ಜೆಗೆ, ಅಶ್ವತ್ಥನಾರಾಯಣ
* ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ಸಿಗೆ ಭೂಮಿ ಪೂಜೆ
* ಭೂಮಿ ಪೂಜೆ ನೆರವೇರಿಸಿದ ಸಚಿವ ಅಶ್ವತ್ಥ್ ನಾರಾಯಣ
* 6 ಸರಕಾರಿ ವಿವಿ `ಯೂನಿವರ್ಸಿಟಿ ಆಫ್ ಎಮಿನೆನ್ಸ್’ ಮಟ್ಟಕ್ಕೆ
ಬೆಳಗಾವಿ, (ಡಿ.22): ರಾಜ್ಯದ ಆಯ್ದ 6 ಸರಕಾರಿ ವಿಶ್ವವಿದ್ಯಾಲಯಗಳನ್ನು(University) `ಯೂನಿವರ್ಸಿಟಿ ಆಫ್ ಎಮಿನೆನ್ಸ್’ ಮಟ್ಟಕ್ಕೆ ಸುಧಾರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ(Dr CN Ashwath Narayan) ಹೇಳಿದ್ದಾರೆ.
ಬೆಳಗಾವಿಯ(Belagavi) ಹಿರೇಬಾಗೇವಾಡಿಯಲ್ಲಿ ಇಂದು(ಬುಧವಾರ) ಮೈದಾಳಲಿರುವ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ (Rani Channamma University) ನೂತನ ಕ್ಯಾಂಪಸ್ಸಿನ ಭೂಮಿ ಪೂಜೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದ ಅವರು, ರಾಣಿ ಚೆನ್ನಮ್ಮ ವಿ.ವಿ.ಯಿಂದಾಗಿ ಬೆಳಗಾವಿ, ಬಾಗಲಕೋಟೆ ಮತ್ತು ಚಿಕ್ಕೋಡಿ ಭಾಗಗಳ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಸಿಗಲಿದ್ದು, ಈ ವಿಶ್ವವಿದ್ಯಾಲಯವು ಕಿತ್ತೂರು ರಾಣಿ ಚೆನ್ನಮ್ಮನಂತೆಯೇ ಈ ಭಾಗಕ್ಕೆ ನಾಯಕತ್ವವನ್ನು ಒದಗಿಸಬೇಕು ಎಂದರು.
Karnataka Higher Education: ಎಲ್ಲ ಜಿಲ್ಲೆಗೂ ವಿವಿ ಭಾಗ್ಯ, ಐಐಟಿ ಮಟ್ಟಕ್ಕೆ ವಿಟಿಯು
ಸರಕಾರವು ಶಿಕ್ಷಣ ಕ್ರಾಂತಿಯ ಮೂಲಕ ಸಮಾಜದಲ್ಲಿ ಸಮಗ್ರ ಬದಲಾವಣೆಯನ್ನು ತರಲು ಸಂಕಲ್ಪ ಮಾಡಿದ್ದು, ಈಗಾಗಲೇ 2,500 ತರಗತಿಗಳನ್ನು ಸ್ಮಾರ್ಟ್ ಕ್ಲಾಸ್ ರೂಂಗಳನ್ನಾಗಿ ಮಾಡಲಾಗಿದೆ. ಉಳಿದಿರುವ 6 ಸಾವಿರ ತರಗತಿಗಳನ್ನು ಕೂಡ ಇನ್ನು ಕೆಲವೇ ತಿಂಗಳುಗಳಲ್ಲಿ ಸ್ಮಾರ್ಟ್ ಕ್ಲಾಸ್ ರೂಮುಗಳನ್ನಾಗಿ ಮೇಲ್ದರ್ಜೆಗೆ ಏರಿಸಲಾಗುವುದು. ಈ ಮೂಲಕ ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನದ ಮೂಲಕ ನಿರಂತರ ಕಲಿಕೆಯನ್ನು ತಮ್ಮದನ್ನಾಗಿಸಿಕೊಳ್ಳುವಂತೆ ಮಾಡಲಾಗುವುದು ಎಂದು ಅವರು ಹೇಳಿದರು.
ಇಷ್ಟೇ ಅಲ್ಲದೆ, ಎಂಜಿನಿಯರಿಂಗ್ ಶಿಕ್ಷಣದಲ್ಲಿ ಜಾಗತಿಕ ಗುಣಮಟ್ಟವನ್ನು ಕಾಪಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಇದರಂತೆ, ರಾಜ್ಯದಲ್ಲಿ 7 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ಯೋಜನೆಯನ್ನು ರೂಪಿಸಲಾಗಿದೆ ಎಂದು ಅವರು ತಿಳಿಸಿದರು.
ಶಿಕ್ಷಣ ರಂಗದ ಸುಧಾರಣೆಗಾಗಿ ಸರಕಾರವು ಹಲವು ಅತ್ಯುಪಯುಕ್ತ ಕ್ರಮಗಳನ್ನು ಕೈಗೊಂಡಿವೆ. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು ಕಿತ್ತೂರು ಕರ್ನಾಟಕ ಭಾಗದ ಮುಂಚೂಣಿ ಸಂಸ್ಥೆಯಾಗಿ ಬೆಳೆಯಬೇಕು. ಜತೆಗೆ ಸ್ಥಳಿಯ ಪರಿಸರಸ ಬೆಳವಣಿಗೆ, ಅಭಿವೃದ್ಧಿ ಮತ್ತು ಸುಧಾರಣೆಗೆ ಅಗತ್ಯವಾಗಿರುವ ಕಾರ್ಯಕ್ರಮ ಹಾಗೂ ಪರಿಕಲ್ಪನೆಗಳೊಂದಿಗೆ ಮುಂದಡಿ ಇಡಬೇಕು ಎಂದು ಅವರು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಎಂಎಲ್ಸಿ ಅರುಣ್ ಶಹಾಪುರ, ಕುಲಪತಿ ರಾಮಚಂದ್ರ ಗೌಡ ಮುಂತಾದವರು ಭಾಗವಹಿಸಿದ್ದರು.
ಬೆಳಗಾವಿ: ರಾಜ್ಯದಲ್ಲಿ (Karnataka) ವಿಶ್ವವಿದ್ಯಾಲಯಗಳು ಇಲ್ಲದ ಜಿಲ್ಲೆಗಳಲ್ಲಿ ಆದಷ್ಟು ತ್ವರಿತವಾಗಿ ವಿವಿ (university)ಗಳನ್ನು ಸ್ಥಾಪಿಸಲಾಗುವುದು. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ತಲೆ ಎತ್ತಲಿರುವ ಈ ವಿ.ವಿ.ಗಳಲ್ಲಿ ಕುಲಪತಿಯೂ ಸೇರಿದಂತೆ ಗರಿಷ್ಠ 25 ಸಿಬ್ಬಂದಿ ಮಾತ್ರ ಇರಲಿದ್ದಾರೆ ಎಂದು ಉನ್ನತ ಶಿಕ್ಷಣ (Karnataka Higher Education Minister) ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ( Dr CN Ashwath Narayan)ಹೇಳಿದ್ದಾರೆ.
ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಆವರಣದಲ್ಲಿ ಬುಧವಾರ ನಡೆದ `ಜ್ಞಾನಯಜ್ಞ ಫೆಲೋಶಿಪ್ ವಿತರಣೆ ಮತ್ತು ವಿದ್ಯುನ್ಮಾನ ಪ್ರಮಾಣ ಪತ್ರಗಳ ಸೇವಾ ವ್ಯವಸ್ಥೆ’ (ಎಲೆಕ್ಟ್ರಾನಿಕ್ ಡಾಕ್ಯುಮೆಂಟರಿ ಡೆಲಿವರಿ) ಹಾಗೂ ಟ್ರ್ಯಾಕಿಂಗ್ ವ್ಯವಸ್ಥೆಯ ಉದ್ಘಾಟನೆ ನೆರವೇರಿಸಿ ಅವರು ಬುಧವಾರ ಮಾತನಾಡಿದರು.
`ನೂರಾರು ಎಕರೆ ವಿಶಾಲವಾದ ಕ್ಯಾಂಪಸ್ಸುಗಳು ಈಗ ಅಪ್ರಸ್ತುತವಾಗುತ್ತಿವೆ. ಆಧುನಿಕ ತಂತ್ರಜ್ಞಾನವು ಸಮರ್ಥವಾಗಿದ್ದು, ತುಂಬಾ ಕಡಿಮೆ ಜಾಗದಲ್ಲಿ ವಿ.ವಿ.ಗಳನ್ನು ಸ್ಥಾಪಿಸಲು ಈಗ ಸಾಧ್ಯವಿದೆ. ದೊಡ್ಡದೊಡ್ಡ ವಿ.ವಿ.ಗಳನ್ನು ಆರಂಭಿಸುವ ಬದಲು ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲೂ ವಿಶ್ವವಿದ್ಯಾಲಯಗಳು ಇರುವಂತೆ ನೋಡಿಕೊಳ್ಳುವುದಕ್ಕೆ ಸರಕಾರದ ಆದ್ಯತೆ ಕೊಟ್ಟಿದೆ’ ಎಂದರು.
ಇದರ ಜತೆಗೆ ಬೆಂಗಳೂರಿನಲ್ಲಿರುವ ಯೂನಿವರ್ಸಿಟಿ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜನ್ನು (ಯುವಿಸಿಇ) ಐಐಟಿ (IIT)ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ 10 ವರ್ಷಗಳ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.