ಖಾಸಗಿ ಶಾಲಾ ಶಿಕ್ಷಕರಿಗೂ ಪ್ಯಾಕೇಜ್ ನೀಡಿ: ಸಿಎಂಗೆ ಹೊರಟ್ಟಿ ಪತ್ರ
* ಸಂಕಷ್ಟದಲ್ಲಿರುವ ಶಿಕ್ಷಕರು, ಸಿಬ್ಬಂದಿ
* ಖಾಸಗಿ ಶಾಲಾ ಶಿಕ್ಷಕರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕು
* ಬಹುತೇಕ ಶಿಕ್ಷಕರಿಗೆ ಕಳೆದ ವರ್ಷದ ಮಾರ್ಚ್ ತಿಂಗಳಿನಿಂದ ವೇತನ ಇಲ್ಲ
ಬೆಂಗಳೂರು(ಮೇ.22): ಕೋವಿಡ್ ಸಂಕಷ್ಟ ಸಮಯದಲ್ಲಿ ಅನುದಾನರಹಿತ ಖಾಸಗಿ ಶಾಲಾ-ಕಾಲೇಜುಗಳ ಶಿಕ್ಷಕರಿಗೆ, ಶಿಕ್ಷಕೇತರ ಸಿಬ್ಬಂದಿಗೆ ತಕ್ಷಣವೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಆಗ್ರಹಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಸಂಕಷ್ಟದಲ್ಲಿರುವವರಿಗೆ 1250 ಕೋಟಿ ರು. ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಿರುವುದು ಸ್ವಾಗತಾರ್ಹ. ಸಣ್ಣ ವ್ಯಾಪಾರಸ್ಥರು, ಆಟೋ ಚಾಲಕರು, ಟ್ಯಾಕ್ಸಿ ಚಾಲಕರು, ಕಟ್ಟಡ ಕಾರ್ಮಿಕರು ಮೊದಲಾದವರಿಗೆ ಈ ಪ್ಯಾಕೇಜ್ ಆಶಾಕಿರಣವಾಗಿದೆ. ಆದರೆ, ಸಮಾಜದಲ್ಲಿ ಪವಿತ್ರ ವೃತ್ತಿ ಎಂದು ಪರಿಗಣಿಸಲ್ಪಡುವ ಮತ್ತು ದೇಶ ನಿರ್ಮಾಣ ಕಾರ್ಯಕ್ಕೆ ತಮ್ಮದೇ ಕೊಡುಗೆ ನೀಡುತ್ತಿರುವ, ಪ್ರೀತಿ- ಪಾತ್ರರಾಗಿರುವ ಶಿಕ್ಷಕ ಸಮುದಾಯಕ್ಕೆ ಅಂದರೆ, ಖಾಸಗಿ ಅನುದಾನರಹಿತ ಶಾಲೆ, ಕಾಲೇಜುಗಳಲ್ಲಿನ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗೆ ಮಾತ್ರ ವಿಶೇಷ ಪ್ಯಾಕೇಜ್ ಘೋಷಣೆ ಮಾಡದಿರುವುದು ಖೇದಕರ ಸಂಗತಿಯಾಗಿದೆ ಎಂದು ಹೇಳಿದ್ದಾರೆ.
"
ಕೊರೋನಾದಿಂದ ಅನಾಥರಾದ ಮಕ್ಕಳ ದತ್ತು: ದಿಂಗಾಲೇಶ್ವರ ಶ್ರೀ
ಖಾಸಗಿ ಅನುದಾನರಹಿತ ಶಾಲಾ-ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಯವರಿಗೂ ಮತ್ತು ಕಾರ್ಮಿಕರಿಗೂ ಯಾವುದೇ ವ್ಯತ್ಯಾಸ ಇರುವುದಿಲ್ಲ. ಆದ್ದರಿಂದ ಇವರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕು. ಕಾರ್ಮಿಕ ವರ್ಗಕ್ಕೆ ಬಿಡುಗಡೆ ಮಾಡಿರುವಂತೆಯೇ ಶಿಕ್ಷಕರಿಗೂ ಒಂದು ಪ್ಯಾಕೇಜ್ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಕಳೆದ ವರ್ಷದ ಮಾರ್ಚ್ ತಿಂಗಳಿನಿಂದ ಕೋವಿಡ್‌ನಿಂದಾಗಿ ಎಲ್ಲ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿದ್ದರಿಂದ ವೇತನ ಇಲ್ಲದೆ ಅಭದ್ರತೆಯಲ್ಲಿ ಶಿಕ್ಷಕರು, ಸಿಬ್ಬಂದಿ ನರಳುತ್ತಿದ್ದಾರೆ. ಹಲವರು ಕೆಲಸ ಕಳೆದುಕೊಂಡಿದ್ದಾರೆ. ಬಹುತೇಕ ಶಿಕ್ಷಕರಿಗೆ ಕಳೆದ ವರ್ಷದ ಮಾರ್ಚ್ ತಿಂಗಳಿನಿಂದ ವೇತನ ಇಲ್ಲ. ಇದರಿಂದ ಲಕ್ಷಕ್ಕೂ ಹೆಚ್ಚು ಶಿಕ್ಷಕರು ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿ ಎದುರಿಸುತ್ತಾ ತೀವ್ರ ಸಂಕಷ್ಟದಲ್ಲಿದ್ದಾರೆ. ಈಗ ಸೆಮಿ ಲಾಕ್‌ಡೌನ್‌ನಿಂದ ಶಾಲಾ-ಕಾಲೇಜುಗಳು ಮುಚ್ಚಿದ್ದು, ಮತ್ತೆ ಆ ಶಿಕ್ಷಕರು ಉದ್ಯೋಗವಿಲ್ಲದೆ ಮತ್ತು ಜೀವನ ನಿರ್ವಹಣೆಗೆ ಸಂಬಳವಿಲ್ಲದೆ ಪರದಾಡುವಂತಾಗಿದೆ ಎಂದು ತಿಳಿಸಿದ್ದಾರೆ.