ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ತೀರ್ಮಾನ: ಶಾಲಾ ಮಕ್ಕಳಿಗೆ ಸಿಕ್ತು ಗುಡ್ ನ್ಯೂಸ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ತೀರ್ಮಾನಗಳನ್ನ ಕೈಗೊಳ್ಳಲಾಗಿದ್ದು, ಸಭೆ ಬಳಿಕ ಸಚಿವ ಮಾಧುಸ್ವಾಮಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಬೆಂಗಳೂರು, (ಜುಲೈ.22): ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ತೀರ್ಮಾನಗಳನ್ನ ಸರ್ಕಾರ ಕೈಗೊಂಡಿದೆ. ಇಂದು (ಜುಲೈ 22) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಶಾಲಾ ಮಕ್ಕಳಿಗೆ ಶೂ, ಮೈಸೂರಿನ ವಿಮಾನ ನಿಲ್ದಾಣದಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡಲು ಸೇರಿದಂತೆ ಹಲವು ನಿರ್ಧಾರಕ್ಕೆ ಒಪ್ಪಿಗೆ ನೀಡಲಾಗಿದೆ.
ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಸಚಿವ ಜೆ ಸಿ ಮಾಧುಸ್ವಾಮಿ, ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಗಳನ್ನು ಒದಗಿಸಲು 132 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪ್ರತಿ ಶಾಲಾ ಮಕ್ಕಳಿಗೆ ಒಂದು ಜೊತೆ ಕಪ್ಪು ಶೂ ಮತ್ತು ಎರಡು ಬಿಳಿ ಸಾಕ್ಸ್ ಗಳನ್ನು ನೀಡಲಾಗುವುದು ಎಂದರು.
ಮಕ್ಕಳಿಗೆ ಈ ವರ್ಷವೇ ಶೂ, ಸೈಕಲ್ ವಿತರಣೆ: Basavaraj Bommai ಸ್ಪಷ್ಟನೆ
ರಾಜ್ಯದ ವಿವಿಧ ಕೈಗಾರಿಕೆಗಳು ಮತ್ತು ಉದ್ಯಮಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ಒದಗಿಸುವ ಹೊಸ ಉದ್ಯೋಗ ನೀತಿಗೆ ಸಂಪುಟ ಅನುಮೋದನೆ ನೀಡಿದೆ. ಕೈಗಾರಿಕೆಗಳ ಬಂಡವಾಳ ಹೂಡಿಕೆ ಆಧಾರದ ಮೇಲೆ ಕನ್ನಡಿಗರಿಗೆ ಇಂತಿಷ್ಟೇ ಹುದ್ದೆಗಳನ್ನು ನೀಡಬೇಕು ಎಂಬ ಅಂಶಗಳನ್ನು ಹೊಸ ಉದ್ಯೋಗ ನೀತಿಯಲ್ಲಿ ಅಳವಡಿಸಲಾಗಿದೆ. ಇದರಿಂದ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಸಿಗುತ್ತವೆ. ಉದ್ಯಮಗಳಿಗೆ ಸ್ಥಳೀಯರಿಗೆ ಉದ್ಯೋಗ ಸಿಕ್ಕಿದೆಯೇ ಇಲ್ಲವೇ ಎಂಬ ಬಗ್ಗೆಯೂ ಕೈಗಾರಿಕಾ ಇಲಾಖೆ ನಿಗಾ ವಹಿಸಲಿದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಸನ್ನಡತೆ ಕೈದಿಗಳ ಬಿಡುಗಡೆಗೆ ಇದ್ದ ನಿಯಮಗಳಲ್ಲಿ ತಿದ್ದುಪಡಿ ಮಾಡಲಾಗಿದ್ದು, ಮಕ್ಕಳು, ಶಿಶುಗಳು, ಮಹಿಳೆಯರ ಮೇಲೆ ಅಪರಾಧ ಪ್ರಕರಣ ಎಸಗಿರುವವರನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡದಂತೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ಸಂಪುಟ ತೀರ್ಮಾನಿಸಿದೆ. ಹಾಗೆಯೇ ಒದಕ್ಕಿಂತ ಹೆಚ್ಚು ಕೊಲೆ ಪ್ರಕರಣದ ಅಪರಾಧಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡದಂತೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿರುವುದಾಗಿ ಸಚಿವರು ತಿಳಿಸಿದರು.
ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಬಹು ಮಹಡಿ ಕಟ್ಟಡ ಯೋಜನೆಯಡಿ ವಸತಿ ಇಲಾಖೆ ನಿರ್ಮಿಸಿರುವ 2 ಬೆಡ್ ರೂಂಗಳ ಅಪಾರ್ಟ್ ಮೆಂಟ್ ಗಳಿಗೆ ನಿಗದಿಪಡಿಸಲಾಗಿದ್ದ 15 ಲಕ್ಷ ರೂ. ಮೊತ್ತವನ್ನು 14 ಲಕ್ಷಕ್ಕೆ ನಿಗದಿ ಮಾಡಲಾಗಿದೆ. ಇದರಿಂದ ಈ ಮನೆಗಳಿಗೆ ಹೆಚ್ಚಿನ ಬೇಡಿಕೆ ಬರುವ ನಿರೀಕ್ಷೆಯಿದೆ. ಮೈಸೂರಿನ ವಿಮಾನ ನಿಲ್ದಾಣದಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.