ಶಿಕ್ಷಣ ನೀತಿ ಪ್ರಾಯೋಗಿಕ ಜಾರಿಗೆ ಸಿಎಂ ಸೂಚನೆ
* ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ
* ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುತ್ತಿರುವ ಮೊದಲ ರಾಜ್ಯ ಕರ್ನಾಟಕ
* ಜಿಲ್ಲೆಗೊಂದು ತಾಂತ್ರಿಕ ಶಿಕ್ಷಣ ಶಾಲೆಯನ್ನು ಪಾರಂಭಿಸಬೇಕು
ಬೆಂಗಳೂರು(ಆ.18): ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿನ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುತ್ತಿರುವ ಮೊದಲ ರಾಜ್ಯ ಕರ್ನಾಟಕ ಆಗಿದೆ. ಹೀಗಾಗಿ ಶಿಕ್ಷಣ ನೀತಿ ಅನುಷ್ಠಾನದ ಕುರಿತು ರಾಜ್ಯಾದ್ಯಂತ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸಬೇಕು ಎಂದರು.
ದೇಶದಲ್ಲೇ ಮೊದಲು: ರಾಷ್ಟ್ರೀಯ ಶಿಕ್ಷಣ ನೀತಿ ಕರ್ನಾಟಕದಲ್ಲಿ ಜಾರಿ, ಅಶ್ವತ್ಥ್
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಕರ್ನಾಟಕ ರಾಜ್ಯ ಶಿಕ್ಷಣ ಆಯೋಗ ಮತ್ತು ಇತರೆ ಸಾಂಸ್ಥಿಕ ವ್ಯವಸ್ಥೆಯನ್ನು ಸ್ಥಾಪಿಸುವ ಕುರಿತು ಸಹ ರೂಪುರೇಷೆಗಳನ್ನು ಸಿದ್ಧಪಡಿಸಬೇಕು. ಖಾಸಗಿಯವರ ಸಹಯೋಗ ಪಡೆದುಕೊಳ್ಳಬೇಕು. ರಾಜ್ಯದ ಜಿಇಆರ್ ಶೇ.32ರಷ್ಟು ಇದ್ದು, ಮುಂದಿನ ದಿನದಲ್ಲಿ ಇದನ್ನು ಶೇ.50ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಪೂರಕವಾಗಿ ಬಿ.ಎಡ್, ಡಿ.ಎಡ್ ಪಠ್ಯ ವಿಷಯವನ್ನು ಮತ್ತಷ್ಟು ಪರಿಣಾಮಕಾರಿಯಾಗುವಂತೆ ಪರಿಷ್ಕರಿಸಬೇಕು. ಯುವಕರು ಉದ್ಯೋಗ ಪಡೆದುಕೊಳ್ಳಲು ಅನುವಾಗುವಂತೆ ಜಿಲ್ಲೆಗೊಂದು ತಾಂತ್ರಿಕ ಶಿಕ್ಷಣ ಶಾಲೆಯನ್ನು ಪಾರಂಭಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ ನಾಯ್‌್ಕ ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.