ಯಾದಗಿರಿ: ಸರ್ಕಾರಿ ಶಾಲೆ ದುರಸ್ತಿಗೆ ಸಿಎಂ ಸಿದ್ದರಾಮಯ್ಯ ಆದೇಶ
ಯಾದಗಿರಿ ಜಿಲ್ಲೆ ಶಹಪುರ ತಾಲೂಕಿನ ಗಂಗನಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಒಳಚರಂಡಿ ವ್ಯವಸ್ಥೆ, ಮಧ್ಯಾಹ್ನದ ಬಿಸಿಯೂಟ ಹಾಗೂ ಕುಡಿಯುವ ನೀರಿನ ಪೂರೈಕೆ ಇಲ್ಲದ ಕಾರಣಕ್ಕಾಗಿ ಬೇಸರ ವ್ಯಕ್ತಪಡಿಸಿ ಗ್ರಾಮಸ್ಥರು ಮತ್ತು ಪೋಷಕರು ಶಾಲೆಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು.
ಬೆಂಗಳೂರು(ಫೆ.13): ಯಾದಗಿರಿ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಯೊಂದರ ಅವ್ಯವಸ್ಥೆ ಕುರಿತಂತೆ ಮುಖ್ಯಮಂತ್ರಿಗಳ ಎಕ್ಸ್ (ಟ್ವಿಟ್ಟರ್) ಖಾತೆಗೆ ಟ್ಯಾಗ್ ಮಾಡಿ ಮಾಹಿತಿ ನೀಡಿದ ಕೆಲವೇ ದಿನಗಳಲ್ಲಿ ಪ್ರೌಢಶಾಲೆಯಲ್ಲಿ ತುರ್ತು ಕಾಮಗಾರಿ ಕೈಗೊಂಡು ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ.
ಯಾದಗಿರಿ ಜಿಲ್ಲೆ ಶಹಪುರ ತಾಲೂಕಿನ ಗಂಗನಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಒಳಚರಂಡಿ ವ್ಯವಸ್ಥೆ, ಮಧ್ಯಾಹ್ನದ ಬಿಸಿಯೂಟ ಹಾಗೂ ಕುಡಿಯುವ ನೀರಿನ ಪೂರೈಕೆ ಇಲ್ಲದ ಕಾರಣಕ್ಕಾಗಿ ಬೇಸರ ವ್ಯಕ್ತಪಡಿಸಿ ಗ್ರಾಮಸ್ಥರು ಮತ್ತು ಪೋಷಕರು ಶಾಲೆಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತಂತೆ ಶಾಲಾ ಮುಖ್ಯಸ್ಥರು ‘ಹೆಣ್ಣುಮಕ್ಕಳಿಗೆ ಶೌಚಾಲಯವಿಲ್ಲದಿದ್ದರೆ ಹೇಗೆ?’ ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಅದನ್ನು ಮುಖ್ಯಮಂತ್ರಿಗಳ ಎಕ್ಸ್ ಖಾತೆಗೆ ಟ್ಯಾಗ್ ಮಾಡಿದ್ದರು.
ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು: ಮಾಜಿ ಸಚಿವ ರಾಜೂಗೌಡ ಆಕ್ರೋಶ
ಇದು ಮುಖ್ಯಮಂತ್ರಿಗಳ ಕಚೇರಿ ಗಮನಕ್ಕೆ ಬಂದಿದ್ದು, ಕೂಡಲೆ ಯಾದಗಿರಿ ಜಿಲ್ಲಾಧಿಕಾರಿಗಳಿಗೆ ಶಾಲೆಯ ದುರವಸ್ಥೆ ಸರಿಪಡಿಸುವಂತೆ ದೂರವಾಣಿ ಮೂಲಕ ಸೂಚನೆ ನೀಡಿದ್ದರು. ಅದರಲ್ಲೂ ಕುಡಿಯುವ ನೀರು, ಬಿಸಿಯೂಟ, ಶೌಚಾಲಯ ಮತ್ತು ಒಳಚರಂಡಿ ವ್ಯವಸ್ಥೆ ಮಾಡುವಂತೆ ತಿಳಿಸಿದ್ದರು.
ಆ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ತುರ್ತು ಕಾಮಗಾರಿಗಳನ್ನು ಕೈಗೊಂಡು ಶಾಲೆಗೆ ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮವಹಿಸಲಾಗಿದೆ. ಮುಖ್ಯಮಂತ್ರಿಗಳ ಕಾರ್ಯಾಲಯದ ಈ ತ್ವರಿತ ಪ್ರತಿಕ್ರಿಯೆಗೆ ಗ್ರಾಮಸ್ಥರು ಮತ್ತು ಪೋಷಕರು ಅಭಿನಂದಿಸಿದ್ದಾರೆ. ಇದೇ ಮಾದರಿಯಲ್ಲಿ ರಾಜ್ಯದ ಎಲ್ಲ ಶಾಲೆಗಳಲ್ಲಿ ಮೂಲಸೌಕರ್ಯವನ್ನು ಆದ್ಯತೆ ಮೇರೆಗೆ ಕಲ್ಪಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಕಾರ್ಯಾಲಯದಿಂದ ಸೂಚಿಸಲಾಗಿದೆ.