20000 ಕೇಂದ್ರ ನೌಕರಿ: ಕನ್ನಡ ನಿರ್ಲಕ್ಷ್ಯ ವಿವಾದ
ಕೇಂದ್ರ ಸಿಬ್ಬಂದಿ ನೇಮಕ ಆಯೋಗ (ಎಸ್‌ಎಸ್‌ಸಿ) ಪರೀಕ್ಷೆ ಸೇರಿ ತಾನು ನಡೆಸುವ ಕೆಲವು ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ನೀಡಿದ ಭರವಸೆ ಹುಸಿಯಾಗಿದೆ.
ಬೆಂಗಳೂರು (ಅ.08): ಕೇಂದ್ರ ಸಿಬ್ಬಂದಿ ನೇಮಕ ಆಯೋಗ (ಎಸ್‌ಎಸ್‌ಸಿ) ಪರೀಕ್ಷೆ ಸೇರಿ ತಾನು ನಡೆಸುವ ಕೆಲವು ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ನೀಡಿದ ಭರವಸೆ ಹುಸಿಯಾಗಿದೆ. ಎಸ್‌ಎಸ್‌ಸಿಯ 20 ಸಾವಿರ ಹುದ್ದೆಗಳ ನೇಮಕಕ್ಕೆ ಹಿಂದಿ-ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಆಹ್ವಾನಿಸಿರುವುದಕ್ಕೆ ಕನ್ನಡಪರ ಸಂಘಟನೆಗಳು ಹಾಗೂ ಕೆಲವು ಪಕ್ಷಗಳಿಂದ ವಿರೋಧ ವ್ಯಕ್ತವಾಗಿದೆ.
‘ಈ ಹಿಂದೆ ಪ್ರಾದೇಶಿಕ ಭಾಷೆಗಳಿಗೆ ಪರೀಕ್ಷೆಯಲ್ಲಿ ಆದ್ಯತೆ ನೀಡುವುದಾಗಿ ಕೇಂದ್ರ ಭರವಸೆ ನೀಡಿತ್ತು. ಆದರೆ, ಕನ್ನಡ ಸೇರಿದಂತೆ ಯಾವುದೇ ಪ್ರಾದೇಶಿಕ ಭಾಷೆಗೆ ಅವಕಾಶ ಕಲ್ಪಿಸಿಲ್ಲ’ ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಹ ತೀವ್ರವಾಗಿ ಖಂಡಿಸಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.
ತ್ರಿಭಾಷಾ ಸೂತ್ರಕ್ಕೆ ಸಮಾಧಿ- ಎಚ್‌ಡಿಕೆ: ಈ ಸಂಬಂಧ ಟ್ವೀಟರ್‌ನಲ್ಲಿ ಕಿಡಿಕಾರಿರುವ ಕುಮಾರಸ್ವಾಮಿ, ‘ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ (ಎಸ್‌ಎಸ್‌ಸಿ) 20 ಸಾವಿರ ಹುದ್ದೆ ಆಯ್ಕೆಗೆ ಹಿಂದಿ-ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ. ಆದರೆ, ಕನ್ನಡ ಸೇರಿದಂತೆ ಯಾವುದೇ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶ ಇಲ್ಲ. ಹಿಂದಿ ಹೇರಿಕೆ, ಭಾಷಾ ತಾರತಮ್ಯಕ್ಕೆ ಇದಕ್ಕಿಂತ ಸಾಕ್ಷಿ ಬೇಕೇ?’ ಎಂದು ಟೀಕಾಪ್ರಹಾರ ನಡೆಸಿದ್ದಾರೆ.
ಚನ್ನಪಟ್ಟಣ ಹೈಡ್ರಾಮಾ ಬಗ್ಗೆ ಸಿಎಂ ಬೊಮ್ಮಾಯಿಗೆ ಎಚ್‌ಡಿಕೆ ದೂರು
‘ಕೇಂದ್ರ ಸರ್ಕಾರದಿಂದ 20 ಸಾವಿರ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಇನ್ನೆರಡು ದಿನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆಯಲಾಗುವುದು. ಕೇವಲ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಪರೀಕ್ಷೆಗೆ ಅವಕಾಶ ನೀಡಲಾಗುತ್ತಿದೆ. ಇದು ಸರಿಯಲ್ಲ. ಎಸ್‌ಎಸ್‌ಸಿಯಲ್ಲಿ ಆಯ್ಕೆಯಾದ ಅಭ್ಯರ್ಥಿಯನ್ನು ಯಾವ ರಾಜ್ಯಕ್ಕಾದರೂ ಕಳುಹಿಸಬಹುದು. ಕೇಂದ್ರ ಸರ್ಕಾರಕ್ಕೆ ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕಲೇಬೇಕು ಎನ್ನುವ ಕೆಟ್ಟ ಹಟವಿದ್ದಂತೆ ಇದೆ. ಕನ್ನಡವೂ ಸೇರಿ ದಕ್ಷಿಣದ ಪ್ರಾದೇಶಿಕ ಭಾಷೆಗಳ ಬಗ್ಗೆ ಇನ್ನಿಲ್ಲದ ಅಸಹನೆ, ದ್ವೇಷ ಮೈಗೂಡಿಸಿಕೊಂಡಿದೆ ಎನಿಸುತ್ತಿದೆ. ತ್ರಿಭಾಷಾ ಸೂತ್ರಕ್ಕೆ ಹೇಗಾದರೂ ಸಮಾಧಿ ಕಟ್ಟಲೇಬೇಕು ಎಂದು ಹೊರಟಂತಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
‘ಒಕ್ಕೂಟ ತತ್ವದಲ್ಲಿ ಆಡಳಿತ ನಡೆಸುವ ಪಕ್ಷಕ್ಕೆ ಒಪ್ಪಿಗೆ ಇಲ್ಲ ಎನ್ನುವುದನ್ನು ಇದು ತೋರಿಸುತ್ತಿದೆ. ಹಿಂದಿ ಭಾಷಿಕರನ್ನು ಕರ್ನಾಟಕ ಮತ್ತು ದಕ್ಷಿಣ ಭಾರತದಲ್ಲಿ ತುಂಬುವ ದುಸ್ಸಾಹಸವಷ್ಟೇ ಇದು. ಈ ವಿಷಯದಲ್ಲಿ ನಮ್ಮ ಎರಡು ಬೇಡಿಕೆಗಳಿವೆ. ಕನ್ನಡದಲ್ಲಿಯೂ ಪರೀಕ್ಷೆ ನಡೆಸಬೇಕು. ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಿಸಬೇಕು. ಈ ಬದಲಾವಣೆ ನಂತರವಷ್ಟೇ ಸಿಬ್ಬಂದಿ ಆಯ್ಕೆ ಆಯೋಗ ಪರೀಕ್ಷೆ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.
‘ಕನ್ನಡದಲ್ಲಿಯೇ ಪರೀಕ್ಷೆ ನಡೆಸಿದರೆ ಕರ್ನಾಟಕದ ಅನೇಕ ಪ್ರತಿಭಾವಂತ ಯುವಜನರು ಆಯ್ಕೆಯಾಗಲು ಅನುಕೂಲವಾಗುತ್ತದೆ. ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರ ನೇಮಕವಾದರೆ, ಕರ್ನಾಟಕದ ಜನರಿಗೆ ಕನ್ನಡದಲ್ಲಿ ಸೇವೆ ದೊರೆಯುತ್ತದೆ. ತಪ್ಪಿದರೆ, ಕೇಂದ್ರವು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ’ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಏನಿದು ಪರೀಕ್ಷೆ?
- ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಹಾಗೂ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ನಡೆವ ಪರೀಕ್ಷೆ
- ಗ್ರೂಪ್ ಬಿ ಮತ್ತು ಸಿ ದರ್ಜೆಯ ಹುದ್ದೆಗಳ ನೇಮಕಕ್ಕೆ ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ಈ ಪರೀಕ್ಷೆ ನಡೆಸುತ್ತದೆ
- 20000 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಪದವೀಧರರು ಸಲ್ಲಿಸಬಹುದು. ಶನಿವಾರವೇ ಅರ್ಜಿ ಸಲ್ಲಿಕೆಗೆ ಕೊನೆಯ ದಿನ
- ಡಿಸೆಂಬರ್‌ನಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆ ಇದೆ. ಆದರೆ ಈ ಪರೀಕ್ಷೆಗಳನ್ನು ಇಂಗ್ಲಿಷ್- ಹಿಂದಿಯಲ್ಲಿ ಮಾತ್ರವೇ ನಡೆಸಲಾಗುತ್ತದೆ
- ಪ್ರಾದೇಶಿಕ ಭಾಷೆಗಳಲ್ಲೂ ಪರೀಕ್ಷೆ ನಡೆಸಲಾಗುವುದು ಎಂದಿದ್ದ ಕೇಂದ್ರ ಈಗ 2 ಭಾಷೆಗಷ್ಟೇ ಮನ್ನಣೆ ನೀಡುತ್ತಿದೆ ಎಂಬುದು ವಿವಾದ
ಅಭಿವೃದ್ಧಿ ಸಹಿಸಿಕೊಳ್ಳಲಾಗದೆ ತಿಕ್ಕಾಟಕ್ಕಿಳಿದಿದ್ದಾರೆ: ಸಚಿವ ಅಶ್ವತ್ಥ್ ನಾರಾಯಣ
ಹಿಂದಿ ಹೇರಿಕೆ, ಭಾಷಾ ತಾರತಮ್ಯಕ್ಕೆ ಇದಕ್ಕಿಂತ ಸಾಕ್ಷಿ ಬೇಕೇ? ಕೇಂದ್ರ ಸರ್ಕಾರಕ್ಕೆ ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕಲೇಬೇಕು ಎನ್ನುವ ಕೆಟ್ಟಹಟವಿದ್ದಂತೆ ಇದೆ. ತ್ರಿಭಾಷಾ ಸೂತ್ರಕ್ಕೆ ಹೇಗಾದರೂ ಸಮಾಧಿ ಕಟ್ಟಲೇಬೇಕು ಎಂದು ಹೊರಟಂತಿದೆ. ಹಿಂದಿ ಭಾಷಿಕರನ್ನು ಕರ್ನಾಟಕ ಮತ್ತು ದಕ್ಷಿಣ ಭಾರತದಲ್ಲಿ ತುಂಬುವ ದುಸ್ಸಾಹಸವಷ್ಟೇ ಇದು. ಕನ್ನಡದಲ್ಲೂ ಪರೀಕೆ ಕೋರಿ 2 ದಿನದಲ್ಲಿ ಪ್ರಧಾನಿ, ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯುವೆ.
-ಎಚ್.ಡಿ. ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ