8ನೇ ತರಗತಿ ಮಕ್ಕಳಿಗೆ ಮತ್ತೆ ಸೈಕಲ್ ಭಾಗ್ಯ: ಸಚಿವ ಮಧು ಬಂಗಾರಪ್ಪ
ಸ್ಥಗಿತಗೊಂಡಿರುವ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸುವ ಯೋಜನೆ ಮರು ಚಾಲನೆಯನ್ನು ಮುಂದಿನ ಬಜೆಟ್‌ನಲ್ಲಿ ಘೋಷಿಸುವ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಅವಶ್ಯಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿಧಾನಸಭೆ (ಡಿ.08): ಸ್ಥಗಿತಗೊಂಡಿರುವ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸುವ ಯೋಜನೆ ಮರು ಚಾಲನೆಯನ್ನು ಮುಂದಿನ ಬಜೆಟ್‌ನಲ್ಲಿ ಘೋಷಿಸುವ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಅವಶ್ಯಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಪ್ರದೀಪ್ ಈಶ್ವರ್ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, 8ನೇ ತರಗತಿ ಮಕ್ಕಳಿಗೆ ಸೈಕಲ್ ನೀಡುವ ಯೋಜನೆಯನ್ನು ಹಿಂದಿನ ಸರ್ಕಾರ ಸ್ಥಗಿತಗೊಳಿಸಿತ್ತು. ನಮ್ಮ ಸರ್ಕಾರ ಬಂದ ಮೇಲೆ ಆರಂಭಿಸಲು ಸಾಧ್ಯವಾಗಿಲ್ಲ. ಆದರೆ, ನಾನು ಹೋದ ಕಡೆಯಲ್ಲೆಲ್ಲಾ ಮಕ್ಕಳು, ಪೋಷಕರಿಂದ ಸೈಕಲ್ ಕೊಡುವಂತೆ ಮನವಿ ಬರುತ್ತಿದೆ.
ಮಕ್ಕಳ ಹಿತದೃಷ್ಟಿಯಿಂದ ಇದೊಂದು ಒಳ್ಳೆಯ ಯೋಜನೆ. ಹಾಗಾಗಿ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಯೋಜನೆ ಪುನಾರಂಭಿಸುವ ಬಗ್ಗೆ ಮುಂದಿನ ಬಜೆಟ್‌ನಲ್ಲಿ ಘೋಷಿಸುವ ಉತ್ತಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಇದಕ್ಕೂ ಮುನ್ನ ಮಾತನಾಡಿದ ಪ್ರದೀಪ್ ಈಶ್ವರ್, ಮಕ್ಕಳಿಗೆ ಸೈಕಲ್ ನೀಡುವುದು ಉತ್ತಮ ಯೋಜನೆ. ಇದನ್ನು ಪುನಾರಂಭಿಸುವುದರಿಂದ ಶಾಲೆ ತೊರೆಯುವ ಮಕ್ಕಳ ಸಂಖ್ಯೆ ಕಡಿಮೆ ಮಾಡಬಹುದು. ಸೈಕಲ್ ಯೋಜನೆ ಜೊತೆಗೆ ಈಗಿರುವ ಒಂದು ಜೊತೆ ಶೂ, ಎರಡು ಜೊತೆ ಸಾಕ್ಸ್ ಬದಲು ಎರಡು ಜೊತೆ ಶೂ ಮತ್ತು ನಾಲ್ಕು ಜೊತೆ ಸಾಕ್ಸ್ ನೀಡಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.
ಶಾಲೆಗಳಲ್ಲಿ 2320 ದೈಹಿಕ ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ: ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 2320 ದೈಹಿಕ ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಪರಿಷತ್‌ನಲ್ಲಿ ಸದಸ್ಯರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಧು ಬಂಗಾರಪ್ಪ, ರಾಜ್ಯದ 41,913 ಪ್ರಾಥಮಿಕ ಶಾಲೆಗಳಲ್ಲಿ 6,772 ದೈಹಿಕ ಶಿಕ್ಷಕ ಹುದ್ದೆ ಮಂಜೂರಾಗಿದ್ದು, 4,127 ಹುದ್ದೆಗಳು ಭರ್ತಿಯಾಗಿವೆ. ಅದೇ ರೀತಿ 4,844 ಪ್ರೌಢಶಾಲೆಗಳಲ್ಲಿ 5,210 ದೈಹಿಕ ಶಿಕ್ಷಕರ ಹುದ್ದೆ ಮಂಜೂರಾಗಿದ್ದು, 3,589 ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಮುಸ್ಲಿಮರನ್ನು ಸಂತೈಸುತ್ತಿರುವ ಸಿಎಂ ಸಿದ್ದರಾಮಯ್ಯ: ಯಡಿಯೂರಪ್ಪ ಟೀಕೆ
ಹೀಗೆ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ದೈಹಿಕ ಶಿಕ್ಷಕರ ಹುದ್ದೆ ಖಾಲಿಯಿಂದ ಮಕ್ಕಳಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪ್ರಾಥಮಿಕ ಶಾಲೆಯಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 2,120 ದೈಹಿಕ ಶಿಕ್ಷಕರ ಹುದ್ದೆಗಳು ಹಾಗೂ ಪ್ರೌಢಶಾಲೆಗೆ 200 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು. ಈ ಕುರಿತು ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಲಾಗುತ್ತಿದ್ದು, ಅನುಮತಿ ದೊರೆತ ಕೂಡಲೆ ಖಾಲಿ ಹುದ್ದೆ ನೇಮಕಾತಿ ಆರಂಭಿಸಲಾಗುವುದು ಎಂದರು.