ಬೆಂಗಳೂರು(ಮೇ.29): ಪ್ರೌಢಶಾಲಾ ಸಹ ಶಿಕ್ಷಕರ ಗ್ರೇಡ್‌- ​2 (9 ಮತ್ತು 10ನೇ ತರಗತಿ) ಹುದ್ದೆಗಳಿಗೆ ಬಡ್ತಿ ಪಡೆಯಲು ಪ್ರಾಥಮಿಕ ಶಾಲಾ ಶಿಕ್ಷಕರು (1ರಿಂದ 5ನೇ ತರಗತಿ) ಅರ್ಹರಲ್ಲ ಎಂದು ಆದೇಶಿಸಿರುವ ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ(ಕೆಎಟಿ), ಈಗಾಗಲೇ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢಶಾಲಾ ಸಹ ಶಿಕ್ಷಕ ಗ್ರೇಡ್‌-​2 ಹುದ್ದೆಗಳಿಗೆ ನೀಡಿದ್ದ ಬಡ್ತಿಯನ್ನು ರದ್ದುಪಡಿಸಿ ಆದೇಶಿಸಿದೆ. ನ್ಯಾಯಮಂಡಳಿಯ ಈ ಆದೇಶದಿಂದ ರಾಜ್ಯದಲ್ಲಿ ಬಡ್ತಿ ಪಡೆದಿರುವ 8 ಲಕ್ಷಕ್ಕೂ ಹೆಚ್ಚು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹಿಂಬಡ್ತಿಯಾಗಲಿದೆ.

ರಾಯಬಾಗ ತಾಲೂಕಿನ ಹುಬ್ಬರವಾಡಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ನಾರಾಯಣ ಬಾಲಪ್ಪ ಹುರುಗೇರಿ ಸೇರಿದಂತೆ ಸುಮಾರು 100ಕ್ಕೂ ಹೆಚ್ಚು ಶಿಕ್ಷಕರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯ ಹಂಗಾಮಿ ಅಧ್ಯಕ್ಷ ನ್ಯಾ.ಆರ್‌.ಬಿ.ಬೂದಿಹಾಳ್‌ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುವವರ ನಂತರದ ಶ್ರೇಣಿಯಲ್ಲಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ(6 ರಿಂದ 8 ನೇ ತರಗತಿ ಬೋಧಿಸುವವರು) ಹುದ್ದೆಯಿದೆ. ಹೀಗಾಗಿ ಈ ಹುದ್ದೆಗಳಿಗೆ ಬಡ್ತಿ ಪಡೆಯಲು ಅವಕಾಶವಿದೆ. ಆದರೆ, ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಗಳಿಗೆ ಬಡ್ತಿ ಪಡೆಯಲು ಅವಕಾಶ ಇಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಿಕ್ಷಕರ ಬಡ್ತಿಗೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಅಗತ್ಯ ತಿದ್ದುಪಡಿ ಮಾಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಿದೆ.

ಮೃತ ಶಿಕ್ಷಕ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ

1 ರಿಂದ 5ನೇ ತರಗತಿಗಳಿಗೆ ಬೋಧಿಸುವ ಪ್ರಾಥಮಿಕ ಶಿಕ್ಷಕರು ಮತ್ತು 6ರಿಂದ 8 ನೇ ತರಗತಿ ಬೋಧಿಸುವ ಶಿಕ್ಷಕರ ಹುದ್ದೆಗಳು ವಿಭಿನ್ನ ಶ್ರೇಣಿಗಳಾಗಿವೆ. ಹಾಗಾಗಿ ಸೇವಾ ಹಿರಿತನದ ಆಧಾರದಲ್ಲಿ ಎರಡೂ ಶ್ರೇಣಿಗಳಲ್ಲಿ ಪ್ರತೇಕ ಪಟ್ಟಿಸಿದ್ಧಪಡಿಸಬೇಕು. ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಗಳಿಗೆ ಬಡ್ತಿ ನೀಡುವ ಪ್ರಕ್ರಿಯೆಯಲ್ಲಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಹಿರಿತನ ಪರಿಗಣಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ.

ಅಲ್ಲದೆ, ಈ ಆದೇಶ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರೌಢಶಾಲಾ ಸಹ ಶಿಕ್ಷಕ ಬಡ್ತಿ ವಿಚಾರಕ್ಕೆ ಅನ್ವಯವಾಗಲಿದ್ದು, ಅರ್ಜಿ ಸಲ್ಲಿಸಿರುವ 100ಕ್ಕೂ ಅಧಿಕ ಶಿಕ್ಷಕರನ್ನು ವೃಂದ ಮತ್ತು ನೇಮಕಾತಿ ನಿಯಮಗಳ ಅಡಿಯಲ್ಲಿ ಪ್ರೌಢ ಶಾಲಾ ಸಹ ಶಿಕ್ಷಕರ ಹುದ್ದೆಗಳಿಗೆ ಅರ್ಹರಿದ್ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮುಂದಿನ ಮೂರು ತಿಂಗಳಲ್ಲಿ ಬಡ್ತಿ ನೀಡಬೇಕು ಎಂದು ಪೀಠ ತಿಳಿಸಿದೆ.