ಬೆಂಗಳೂರು, (ಮೇ.25): ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರದ 'ದೀಕ್ಷಾ'-ಆಪ್ ನ್ನು (DIKSHA-app) ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಚಾಲನೆ ನೀಡಿದರು.

ಮಂಗಳವಾರ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ರಾಜ್ಯದ ದ್ವಿತೀಯ ಪಿಯು ವಿದ್ಯಾರ್ಥಿಗಳಿಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ 'ಪರೀಕ್ಷಾ ಅಭ್ಯಾಸ' ಎಂಬ ವಿನೂತನ ಕಾರ್ಯಕ್ರಮವನ್ನು ಅಳವಡಿಸಿ ದೀಕ್ಷಾ ವೇದಿಕೆಯ ಮೂಲಕ ಲೋಕಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್, ಪಿಯುಸಿ ವಿದ್ಯಾರ್ಥಿಗಳಿಗೆ ಮುಂಬರಲಿರುವ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಉತ್ತಮ ರೀತಿಯಲ್ಲಿ ಆತ್ಮವಿಶ್ವಾಸದಿಂದ ಸಿದ್ಧರಾಗುವುದಕ್ಕೆ ಈ ಆಪ್ ಸಹಕಾರಿಯಾಗಲಿದೆ ಎಂದರು.

ಪಿಯು ಪರೀಕ್ಷಾ ಗೊಂದಲಕ್ಕೆ ತೆರೆ, ಶೀಘ್ರದಲ್ಲಿ ಪರೀಕ್ಷಾ ದಿನಾಂಕ ನಿಗದಿ 

ಅದೇ ರೀತಿಯಾಗಿ ಡಿಎಸ್‌ಇಆರ್ ಟಿ ಯು 10ನೇ ತರಗತಿ ಪರೀಕ್ಷೆ ಬರೆಯುವ ಮಕ್ಕಳಿಗೆ ಸಿದ್ಧತೆ ಮಾಡುವುದಕ್ಕಾಗಿ "ಫೋಕಸ್" ಎಂಬ ಪುನರ್ಮನನ ಕಾರ್ಯಕ್ರಮವನ್ನು ದೀಕ್ಷಾದಲ್ಲಿ ಪ್ರಸ್ತುತಪಡಿಸಿದೆ. ಪ್ರತಿಯೊಂದು ವಿಷಯಕ್ಕೆ ಇ- ಪಠ್ಯಪುಸ್ತಕ, ಕನಿಷ್ಠ 2 ಮಾಡೆಲ್ ಪ್ರಶ್ನೆಪತ್ರಿಕೆಗಳು, ವಿವರಾಣಾತ್ಮಕ ವಿಡಿಯೋಗಳು, ಅಧ್ಯಾಯವಾರು ಅಭ್ಯಾಸ ಪ್ರಶ್ನೋತ್ತರಗಳು ಅದರಲ್ಲಿ ದೊರೆಯಲಿವೆ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಮಂಬರಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುವುದಕ್ಕೆ ಸಹಾಯ ಮಾಡಲು ಪಿಸಿಎಂಬಿ (PCMB) ವಿಷಯಕ್ಕೆ ಸುಮಾರು 9000 ಬಹು ಆಯ್ಕೆ ಪ್ರಶ್ನೆಗಳನ್ನು (ಎಂಸಿಕ್ಯು) ಅಧ್ಯಾಯವಾರು ಒದಗಿಸಲಾಗಿದೆ. ದೇಶದಲ್ಲಿಯೇ ಇದೊಂದು ವಿನೂತನ ಪ್ರಯೋಗವಾಗಿದ್ದು, ನಮ್ಮ ಕರ್ನಾಟಕದ ಪದವಿ ಪೂರ್ವ ಶಿಕ್ಷಣ ಇಲಾಖೆಯು ಇದನ್ನು ಪ್ರಥಮವಾಗಿ ಜಾರಿಗೊಳಿಸುತ್ತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಈ ಎಲ್ಲ ಪಠ್ಯಾಂಶಗಳನ್ನು 'DIKSHA-app'ದಲ್ಲಿ ಪಡೆದುಕೊಳ್ಳಬಹುದಾಗಿದ್ದು, ಎಲ್ಲ ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಸಚಿವರು ಕೋರಿದರು.

ಏನಿದು ದೀಕ್ಷಾ-ಆಪ್ ಪ್ರೋಗ್ರಾಂ: DIKSHA ಪೋರ್ಟಲ್ ಅನ್ನು https://diksha.gov.in/ ಇಲ್ಲಿ ನೋಡಬಹುದಾಗಿದೆ. ಆಂಡ್ರಾಯಿಡ್ ಫೋನ್ ಗಳಲ್ಲಿ DIKSHA ಆಪ್ ಅನ್ನು ಗೂಗಲ್ ಪ್ಲೇಸ್ಟೋರ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. DIKSHA ಆಪ್ ಅಥವಾ ಪೋರ್ಟಲ್ ನಲ್ಲಿ ನಿಮಗೆ ಬೇಕಿರುವ ಬೋರ್ಡ್, ಮಾಧ್ಯಮ, ಭಾಷೆ ಮತ್ತು ತರಗತಿಗಳನ್ನು ಆಯ್ಕೆ ಮಾಡಿಕೊಂಡು, ವಿವಿಧ ಬಗೆಯ ಪಠ್ಯಾಂಶಗಳನ್ನು ಪಡೆದುಕೊಳ್ಳಬಹುದು.