ಮುಂಬರುವ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲೂ ಕನ್ನಡದ ಜೊತೆ ಇಂಗ್ಲಿಷ್‌ ಮಾಧ್ಯಮದಲ್ಲಿ ಪಠ್ಯ ಬೋಧನೆ ಆರಂಭಿಸಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಚಿಕ್ಕಮಗಳೂರು (ನ.8) ಮುಂಬರುವ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲೂ ಕನ್ನಡದ ಜೊತೆ ಇಂಗ್ಲಿಷ್‌ ಮಾಧ್ಯಮದಲ್ಲೂ ಪಠ್ಯ ಬೋಧನೆಗೆ ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಎಲ್ಲ ಸರ್ಕಾರಿ ಶಾಲೆಗಳಲ್ಲೂ ಇಂಗ್ಲಿಷ್ ಮಾಧ್ಯಮ ಬೋಧನೆ

ಚಿಕ್ಕಮಗಳೂರಿನ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾಮಟ್ಟದ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ರಾಜ್ಯದ ಸುಮಾರು 15 ಜಿಲ್ಲೆಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಕನ್ನಡದ ಜೊತೆ ಇಂಗ್ಲಿಷ್‌ ಮಾಧ್ಯಮದ ಬೋಧನೆ ಆರಂಭಿಸಲಾಗಿದೆ. ಉಳಿದ ಜಿಲ್ಲೆಗಳಲ್ಲೂ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮದ ಬೋಧನೆಗೆ ಅನುಮೋದನೆ ನೀಡಲಾಗುವುದು. ಮುಂಬರುವ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ದ್ವಿಭಾಷಾ ಮಾಧ್ಯಮದ ಮೂಲಕ ಬೋಧನೆ ಜಾರಿ ಮಾಡಲಾಗುವುದು ಎಂದರು.

ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಹೆಚ್ಚಳ

ಮೂಲಭೂತ ಸೌಕರ್ಯಗಳ ಕೊರತೆಯಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೆಲವು ಶಾಲೆಗಳಿಗೆ ಇನ್ನೂ ಇಂಗ್ಲಿಷ್‌ ಬೋಧನೆಗೆ ಅನುಮತಿ ದೊರೆತಿಲ್ಲ. ಇದರಿಂದ ಸಮಸ್ಯೆಗಳು ಉಂಟಾಗುತ್ತಿವೆ. ದ್ವಿಭಾಷಾ ಬೋಧನೆ ಇರುವ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳವಾಗಿದೆ. ಹೀಗಾಗಿ, ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ದ್ವಿಭಾಷಾ ಮಾಧ್ಯಮದ ಬೋಧನೆ ಆರಂಭಿಸಬೇಕೆಂಬ ಬೇಡಿಕೆ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲೂ ದ್ವಿಭಾಷಾ ಬೋಧನೆಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಕೆಲವು ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಬೋಧನೆಗೆ ಅಧಿಕೃತ ಅನುಮತಿ ಇಲ್ಲದಿದ್ದರೂ ದ್ವಿಭಾಷಾ ಮಾಧ್ಯಮದ ಬೋಧನೆ ನಡೆಸಲಾಗುತ್ತಿದೆ. ಅಂತಹ ಶಾಲೆಗಳ ಶಿಕ್ಷಕರು ಆತಂಕಪಡುವ ಅಗತ್ಯವಿಲ್ಲ. ಅನುಮತಿ ಇಲ್ಲದೆ ಬೋಧನೆ ನಡೆಸುತ್ತಿರುವ ಶಾಲೆಗಳ ಬಗ್ಗೆ ಮಾಹಿತಿ ನೀಡಿದರೆ ಕೂಡಲೇ ಅನುಮತಿ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.

ಶಾಲೆಗಳಲ್ಲಿ ಶಿಕ್ಷಕರು ಸ್ವಯಂ ಆಸಕ್ತಿಯಿಂದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸಬೇಕು. ಇದರಿಂದ ಮಕ್ಕಳ ಕಲಿಕಾ ಸಾಮರ್ಥ್ಯ ಮತ್ತು ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಲಿದೆ ಎಂದು ಅವರು ಸಲಹೆ ನೀಡಿದರು.

ಸರ್ಕಾರಿ ಶಾಲೆಗಳಲ್ಲೂ ಪೋಷಕರ ಸಭೆ ಕಡ್ಡಾಯ

ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸಿದರೆ ತಮ್ಮ ಜವಾಬ್ದಾರಿ ಮುಗಿಯಿತು ಎಂಬ ಭಾವನೆ ಬಹುತೇಕ ಪೋಷಕರಲ್ಲಿದೆ. ಆದರೆ, ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಶಿಕ್ಷಕರ ಶ್ರಮದ ಜತೆಗೆ ಪೋಷಕರ ಪ್ರಯತ್ನವೂ ಅಗತ್ಯ. ಈ ನಿಟ್ಟಿನಲ್ಲಿ ಪ್ರತಿ ಶಾಲೆಯಲ್ಲೂ ಕಡ್ಡಾಯವಾಗಿ ಪೋಷಕರ ಸಭೆ ನಡೆಸಬೇಕು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ನಿರಂತರವಾಗಿ ಸಭೆಗಳನ್ನು ಆಯೋಜಿಸುವಂತೆ ಶಿಕ್ಷಣ ಸಚಿವರು ಸೂಚಿಸಿದರು.