ಉಪನ್ಯಾಸಕರಿಗೆ ಕಾಲಮಿತಿ ಬಡ್ತಿಗೆ ಸರ್ಕಾರ ಸಮ್ಮತಿ
ಕಾಲಮಿತಿ ಬಡ್ತಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಸಮ್ಮತಿ ಸೂಚಿಸಿದ್ದಾರೆ. ಪ್ರೌಢಶಾಲೆಯಿಂದ ಪದೋನ್ನತಿ ಹೊಂದಿ ಪಿಯು ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ 10 ರಿಂದ 25 ವರ್ಷಗಳ ಕಾಲಮಿತಿ ಬಡ್ತಿ ಮಂಜೂರು ಮಾಡಲಾಗುವುದು. 1-8-2008 ರ ನಂತರ ನೇಮಕವಾಗಿರುವ ಉಪನ್ಯಾಸಕರಿಗೆ ಒಂದು ವಿಶೇಷ ವೇತನ ಬಡ್ತಿ ಮಂಜೂರು ಮಾಡಲಾಗುವುದು. ಇನ್ನುಳಿದ ಬೇಡಿಕೆಗಳ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ
ಬೆಂಗಳೂರು(ಆ.24): ಪ್ರೌಢಶಾಲೆಯಿಂದ ಪದೋನ್ನತಿ ಹೊಂದಿ ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ 10, 15, 20, 25 ವರ್ಷಗಳ ಕಾಲಮಿತಿ ಬಡ್ತಿಯನ್ನು ಮಂಜೂರು ಮಾಡಲು ಸರ್ಕಾರ ಸಮ್ಮತಿ ಸೂಚಿಸಿದೆ.
ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಮತ್ತು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಜೊತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬುಧವಾರ ಸಭೆ ನಡೆಸಿ ಚರ್ಚಿಸಿದ ಬಳಿಕ ಕಾಲಮಿತಿ ಬಡ್ತಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಸಮ್ಮತಿ ಸೂಚಿಸಿದ್ದಾರೆ. ಪ್ರೌಢಶಾಲೆಯಿಂದ ಪದೋನ್ನತಿ ಹೊಂದಿ ಪಿಯು ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ 10 ರಿಂದ 25 ವರ್ಷಗಳ ಕಾಲಮಿತಿ ಬಡ್ತಿ ಮಂಜೂರು ಮಾಡಲಾಗುವುದು. 1-8-2008 ರ ನಂತರ ನೇಮಕವಾಗಿರುವ ಉಪನ್ಯಾಸಕರಿಗೆ ಒಂದು ವಿಶೇಷ ವೇತನ ಬಡ್ತಿ ಮಂಜೂರು ಮಾಡಲಾಗುವುದು. ಇನ್ನುಳಿದ ಬೇಡಿಕೆಗಳ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ ಎಂದು ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್.ನಿಂಗೇಗೌಡ ತಿಳಿಸಿದ್ದಾರೆ.
ಮುಂದಿನ ವರ್ಷ ಪಠ್ಯ ಸಂಪೂರ್ಣ ಬದಲು: ಸಚಿವ ಮಧು ಬಂಗಾರಪ್ಪ
ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದು ನೆಟ್, ಸ್ಲೆಟ್, ಪಿಎಚ್‌ಡಿಯಂತಹ ಹೆಚ್ಚಿನ ವಿದ್ಯಾರ್ಹತೆ ಹೊಂದಿದ್ದರೆ ಅಂತಹವರಿಗೆ ಪದವಿ ಕಾಲೇಜುಗಳಿಗೆ ಬಡ್ತಿ ನೀಡಬೇಕು ಎಂಬುದು ಸೇರಿ ಇನ್ನುಳಿದ ಬೇಡಿಕೆಗಳನ್ನು ಕಾಲಮಿತಿಯಲ್ಲಿ ಬಗೆಹರಿಸುವುದಾಗಿ ಸಚಿವರು ತಿಳಿಸಿದ್ದಾಗಿ ಅವರು ವಿವರಿಸಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ ಕಾರ್ಯದರ್ಶಿ ರಿತೇಶ್‌ಕುಮಾರ್ ಸಿಂಗ್, ಪ್ರಾಥಮಿಕ ಶಿಕ್ಷಣ ಇಲಾಖೆ ಆಯುಕ್ತೆ ಬಿ.ವಿ.ಕಾವೇರಿ, ಸಾಹಿತಿ ಬರಗೂರು ರಾಮಚಂದ್ರಪ್ಪ, ಸಂಘಗಳ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.