ಬೆಂಗಳೂರು(ಜೂ.02): ಕೋವಿಡ್‌ ಕಾರಣದಿಂದ ಶಾಲೆಗಳನ್ನು ತೆರೆಯಲು ಸಾಧ್ಯವಾಗದಿದ್ದರೆ ಮಕ್ಕಳು ವಿದ್ಯಾಭ್ಯಾಸದಿಂದ ದೂರ ಉಳಿಯದಂತೆ ಮಾಡಲು ಸರ್ಕಾರ ನೀಲನಕ್ಷೆ ಸಿದ್ಧಪಡಿಸಬೇಕು ಎಂದು ನಿರ್ದೇಶಿಸಿರುವ ಹೈಕೋರ್ಟ್‌, ಪಠ್ಯ ಮತ್ತು ನೋಟ್‌ ಪುಸ್ತಕಗಳ ಜೊತೆ ತಾಂತ್ರಿಕ ಉಪಕರಣಗಳನ್ನು ವಿತರಿಸಲು ಕ್ರಿಯಾ ಯೋಜನೆ ರೂಪಿಸಬೇಕು ಎಂದು ಸೂಚಿಸಿದೆ.

ಕೋವಿಡ್‌ ಹಿನ್ನೆಲೆಯಲ್ಲಿ ಶಾಲೆಗಳನ್ನು ಸ್ಥಗಿತಗೊಳಿಸಿರುವುದರಿಂದ ಆನ್‌ಲೈನ್‌ ಶಿಕ್ಷಣ ಪಡೆಯಲು ಬಡ ವಿದ್ಯಾರ್ಥಿಗಳಿಗೆ ಅಗತ್ಯ ಉಪಕರಣಗಳನ್ನು ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಎ.ಎ.ಸಂಜೀವ್‌ ನರೇನ್‌ ಸೇರಿದಂತೆ ಮೂವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರ ನೇತೃತ್ವದ ವಿಭಾಗೀಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಆನ್‌ಲೈನ್‌ ತರಗತಿಗಳನ್ನು ನಡೆಸಿದರೂ ಪಠ್ಯ ಮತ್ತು ನೋಟು ಪುಸ್ತಕಗಳು ಇಲ್ಲದಿದ್ದರೆ ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾಗಿರುವುದಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ಶಾಲೆಗಳನ್ನು ಮರು ಆರಂಭಿಸುವ ಬಗ್ಗೆ ತಜ್ಞರ ಅಭಿಪ್ರಾಯ ಪಡೆದುಕೊಳ್ಳಬೇಕು. ಪಠ್ಯ ಮತ್ತು ನೋಟು ಪುಸ್ತಕಗಳ ಜೊತೆಗೆ ತಾಂತ್ರಿಕ ಉಪಕರಣಗಳನ್ನು ವಿತರಣೆ ಮಾಡಲು ಸರ್ಕಾರ ಕ್ರಿಯಾ ಯೋಜನೆ ರೂಪಿಸಬೇಕು. ಪ್ರಮುಖವಾಗಿ ಆರ್‌ಟಿಇ ವ್ಯಾಪ್ತಿಯಲ್ಲಿರುವ ಮಕ್ಕಳಿಗೆ ಅಗತ್ಯ ಶಿಕ್ಷಣ ಪರಿಕರಗಳನ್ನು ಒದಗಿಸಲು ಕ್ರಮ ಜರುಗಿಸಬೇಕು ಎಂದು ಸೂಚಿಸಿತು.

ಎಸ್ಸೆಸ್ಸೆಲ್ಸಿ, ಪಿಯು ಪರೀಕ್ಷೆ ರದ್ಧತಿ ಅನಿವಾರ್ಯ

ಮತ್ತೊಂದು ಶೈಕ್ಷಣಿಕ ವರ್ಷ ವ್ಯರ್ಥ ಆಗದಂತೆ ಸರ್ಕಾರ ನೋಡಿಕೊಳ್ಳಬೇಕು. ಸಾಂಕ್ರಾಮಿಕ ಇರಲಿ ಅಥವಾ ಇರದಿರಲಿ ಶಿಕ್ಷಣ ಮುಂದುವರಿಯಲೇಬೇಕು. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಾಂಕ್ರಾಮಿಕ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟಿತು.

ಶಾಲೆಗಳನ್ನು ಮುಚ್ಚಿರುವುದರಿಂದ ಆನ್‌ಲೈನ್‌ ಮೂಲಕ ಮಕ್ಕಳ ವಿದ್ಯಾಭ್ಯಾಸ ನೀಡಲು ಯಾವ ನೀತಿ ರೂಪಿಸಲಾಗಿದೆ? ವಿದ್ಯಾಗಮ ಯೋಜನೆ ನಿಜಕ್ಕೂ ಉತ್ತಮವಾದ ಕಾರ್ಯಕ್ರಮ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಆ ಕಾರ್ಯಕ್ರಮವನ್ನು ಮುಂದುವರಿಸಲು ಸಾಧ್ಯವಿಲ್ಲ. ಸರಿಯಾದ ರೀತಿಯಲ್ಲಿ ವಿದ್ಯಾಭ್ಯಾಸ ನೀಡದೆ ಹೋದರೆ ಬಾಲಕಾರ್ಮಿಕ, ಬಾಲ್ಯ ವಿವಾಹ ಮತ್ತು ಮಕ್ಕಳ ಕಳ್ಳ ಸಾಗಣೆ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದೆ.ಅಂತಹ ಘಟನೆಗಳು ತಲೆದೋರದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಅಭಿಪ್ರಾಯಪಟ್ಟಿತು.

ಶಿಕ್ಷಣ ಇಲಾಖೆಯು ಶಾಲಾ ಮಕ್ಕಳು ಶಿಕ್ಷಣ ವ್ಯವಸ್ಥೆಯಲ್ಲೇ ಉಳಿದು ವಿದ್ಯಾಭ್ಯಾಸ ಮುಂದುವರಿಸುವಂತೆ ನೋಡಿಕೊಳ್ಳಬೇಕು. ಹೀಗಾಗಿ, ವಿದ್ಯಾರ್ಥಿಗಳಿಗೆ ಯಾವಾಗ ಪಠ್ಯ ಮತ್ತು ನೋಟು ಪುಸ್ತಕಗಳನ್ನು ಕಲ್ಪಿಸಲಾಗುತ್ತದೆ ಎಂಬ ಬಗ್ಗೆ ಜೂನ್‌ 8ರೊಳಗೆ ವರದಿ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಮಕ್ಕಳಿಗೆ ಬಿಸಿಯೂಟ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಮತ್ತೊಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಮಕ್ಕಳ ಕಲಿಕೆಗೆ ತೊಂದರೆಯಾಗದಂತೆ ಶಾಲೆಗಳನ್ನು ಪುನಾರಂಭಿಸಲು ಸರ್ಕಾರ ತಾತ್ಕಾಲಿಕ ದಿನಾಂಕವನ್ನು ನಿಗದಿ ಮಾಡುವಂತೆ ನ್ಯಾಯಾಲಯ ನಿರ್ದೇಶಿಸಲು ಸಾಧ್ಯವಿಲ್ಲ. ಶಾಲಾ ಮಕ್ಕಳ ಕಲಿಕೆಗೆ ತೊಂದರೆಯಾಗದಂತೆ ತರಗತಿಗಳನ್ನು ನಡೆಸಲು ಸರ್ಕಾರವು ಸೂಕ್ತ ಯೋಜನೆ ರೂಪಿಸಬೇಕು ಎಂದು ಅಭಿಪ್ರಾಯಪಟ್ಟಿತು.