ಬೆಂಗಳೂರು (ಅ.27):  ಆನ್‌ಲೈನ್‌ ಮೂಲಕ ಶಿಕ್ಷಣ ಪಡೆಯಲು ಬಡ ಮಕ್ಕಳಿಗೆ ಲ್ಯಾಪ್‌ಟಾಪ್‌ ಹಾಗೂ ಮೊಬೈಲ್‌ ಒದಗಿಸುವ ಕುರಿತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ನಗರದ ವಕೀಲರಾದ ಎ.ಎ. ಸಂಜೀವ್‌ ನರೈನ್‌ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರ ನೇತೃತ್ವದ ವಿಭಾಗೀಯ ಪೀಠ, ಕೇಂದ್ರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವಾಲಯದ ಕಾರ್ಯದರ್ಶಿ, ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮತ್ತು ಬಿಬಿಎಂಪಿ ಆಯುಕ್ತರಿಗೆ ನೋಟಿಸ್‌ ಜಾರಿ ಮಾಡಿತು. ಜತೆಗೆ, ಅರ್ಜಿಗೆ ಆಕ್ಷೇಪಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿ ವಿಚಾರಣೆ ಮುಂದೂಡಿತು.

ಶಿಕ್ಷಕರ ಅರ್ಹತಾ ಪರೀಕ್ಷೆ (TET) ಪಾಸಾದವರಿಗೆ ಗುಡ್‌ ನ್ಯೂಸ್..! ..

ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 2020-21ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ತರಗತಿಗಳು ಇನ್ನೂ ಆರಂಭವಾಗಿಲ್ಲ. ಪರ್ಯಾಯವಾಗಿ ಆನ್‌ಲೈನ್‌ ಶಿಕ್ಷಣ ಕೊಡಲಾಗುತ್ತಿದೆ. ಆದರೆ, ವಿದ್ಯಾರ್ಥಿಗಳಿಗೆ ಮೊಬೈಲ್‌, ಲ್ಯಾಪ್‌ ಟಾಪ್‌ ಮತ್ತು ಇಂಟರ್ನೆಟ್‌ ಸೇರಿದಂತೆ ಯಾವುದೇ ಸೌಲಭ್ಯ ನೀಡದೆಯೇ ಆನ್‌ಲೈನ್‌ ತರಗತಿ ಆರಂಭಿಸಲಾಗಿದೆ. ಅನುಕೂಲ ಪರಿಸ್ಥಿತಿಯಲ್ಲಿರುವ ಮಕ್ಕಳಷ್ಟೇ ಪಾಠ ಕೇಳುತ್ತಿದ್ದಾರೆ. ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿದ ಮಕ್ಕಳು ಆನ್‌ಲೈನ್‌ ಶಿಕ್ಷಣ ಕಲಿಕೆಯಿಂದ ದೂರ ಉಳಿದಿದ್ದಾರೆ. ಹಾಗೆಯೇ, ಕೊರೋನಾ ಪರಿಣಾಮ ಸಾಕಷ್ಟುಪೋಷಕರು ಕೆಲಸ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಅವರ ಮಕ್ಕಳು ಆನ್‌ಲೈನ್‌ ತರಗತಿಗೆ ಬೇಕಾದ ಸೌಲಭ್ಯ ಕಲ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಅಲ್ಲದೆ, ಈ ಹಿಂದೆ ಆನ್‌ ಲೈನ್‌ ತರಗತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕಲಿಕೆಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವಂತೆ ಸೂಚಿಸಿತ್ತು. ಸರ್ಕಾರ ಮಾತ್ರ ಯಾವುದೇ ಸೌಲಭ್ಯ ಕಲ್ಪಿಸಿಲ್ಲ. ಇದು ಸಂವಿಧಾನದ ಪರಿಚ್ಛೇದ 14 ಹಾಗೂ 21(ಎ) ಅಡಿ ನೀಡಲಾಗಿರುವ ಶೈಕ್ಷಣಿಕ ಹಕ್ಕು, ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯ ನಿಯಮಗಳ ಸ್ಪಷ್ಟಉಲ್ಲಂಘನೆಯಾಗಿದೆ. ಆದ್ದರಿಂದ ಬಡ ಮಕ್ಕಳಿಗೆ ಆನ್‌ಲೈನ್‌ನಲ್ಲಿ ಪಾಠ ಕೇಳಲು ಪೂರಕವಾಗಿ ಲ್ಯಾಪ್‌ ಟಾಪ್‌, ಟ್ಯಾಬ್ಲೆಟ್‌, ಕಂಪ್ಯೂಟರ್‌ ಮತ್ತು ಹೈ ಸ್ಪೀಡ್‌ ಇಂಟರ್‌ ನೆಟ್‌ ಸೇರಿ ಎಲ್ಲಾ ಅಗತ್ಯ ಸೌಲಭ್ಯ ಉಚಿತವಾಗಿ ಒದಗಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿದ್ದಾರೆ.