Kannada Language: ಪದವಿಯಲ್ಲಿ ಕನ್ನಡ ಕಡ್ಡಾಯಕ್ಕೆ ಹೈಕೋರ್ಟ್‌ ತಡೆ

*   ಶಿಕ್ಷಣ ನೀತಿಯಲ್ಲೇ ಕಡ್ಡಾಯವಿಲ್ಲ ಹೊರಗಿನವರ ಮೇಲೇಕೆ ಹೇರುತ್ತೀರಿ?: 
*   ಶಿಕ್ಷಣದಲ್ಲಿ ಕನ್ನಡ ಭಾಷೆ ಕಲಿಕೆಯನ್ನು ಹೇರಲಾಗದು
*   ಕಡ್ಡಾಯ ಮಾಡಿದರೆ ಕನ್ನಡ ಕಲಿಯದವರಿಗೆ ತೊಂದರೆ
 

High Court Stay Kannada Mandatory in Degree in Karnataka grg

ಬೆಂಗಳೂರು(ಏ.07):  ಉನ್ನತ ಶಿಕ್ಷಣದಲ್ಲಿ ಕನ್ನಡ(Kannada) ಭಾಷೆ ಕಲಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಗಳಿಗೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್‌(High Court), ಈ ಸಂಬಂಧ ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.

ಇದರಿಂದಾಗಿ ಪದವಿ ಶಿಕ್ಷಣದಲ್ಲಿ ಕನ್ನಡ ಕಡ್ಡಾಯಗೊಳಿಸುವ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆಯಾದಂತಾಗಿದೆ. ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ(Government of Karnataka) ಹೊರಡಿಸಿದ್ದ ಆದೇಶಗಳನ್ನು ಪ್ರಶ್ನಿಸಿ ಸಂಸ್ಕೃತ ಭಾರತಿ (Karnataka) ಟ್ರಸ್ಟ್‌ ಸೇರಿ ಕೆಲ ಸಂಘ-ಸಂಸ್ಥೆಗಳು ಹಾಗೂ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರಿದ್ದ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿ ಆದೇಶಿಸಿದೆ.
‘ರಾಷ್ಟ್ರೀಯ ಶಿಕ್ಷಣ ನೀತಿಯಡಿ(National Education Policy) ಪ್ರಾದೇಶಿಕ ಭಾಷೆ ಕಲಿಕೆ ಕಡ್ಡಾಯಗೊಳಿಸಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿರುವುದರಿಂದ ಪದವಿ(Degree) ಹಂತದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ 2021ರ ಆ.7 ಹಾಗೂ ಸೆ.15ರಂದು ಹೊರಡಿಸಿರುವ ಆದೇಶ ಜಾರಿಗೆ ತಡೆಯಾಜ್ಞೆ ನೀಡಲಾಗುತ್ತಿದೆ’ ಎಂದು ನ್ಯಾಯಪೀಠ ತಿಳಿಸಿ ವಿಚಾರಣೆ ಮುಂದೂಡಿತು.

Kannada: ಪದವೀಲಿ ಕನ್ನಡ ಕಲಿಕೆ ಕಡ್ಡಾಯವಲ್ಲ: ಹೈಕೋರ್ಟ್‌

‘ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪ್ರಾದೇಶಿಕ ಭಾಷೆಗಳನ್ನು ಕಡ್ಡಾಯ ಮಾಡಿಲ್ಲ ಎಂದು ಕೇಂದ್ರ ಸರ್ಕಾರ(Central Government) ಸ್ಪಷ್ಟಪಡಿಸಿದೆ. ಹೀಗಿರುವಾಗ ಹೊರಗಿನಿಂದ ಬಂದ ವಿದ್ಯಾರ್ಥಿಗಳ ಮೇಲೆ ಕನ್ನಡ ಭಾಷೆ ಕಲಿಕೆಯನ್ನು ಏಕೆ ಹೇರುತ್ತೀರಿ? ಉದ್ಯೋಗ(Job) ಪಡೆಯಲು ಕನ್ನಡ ಕಲಿಯುವಂತೆ ಷರತ್ತು ವಿಧಿಸಿ. ಆದರೆ, ಶಿಕ್ಷಣದಲ್ಲಿ ಕನ್ನಡ ಕಲಿಕೆಯನ್ನು ಹೇರಲಾಗದು. ಸರ್ಕಾರದ ನೀತಿಯಿಂದ ಪದವಿಗೂ ಮೊದಲು ಕನ್ನಡ ಕಲಿಯದ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಹಾಗಾಗಿ ಸರ್ಕಾರ ತನ್ನ ನಿರ್ಧಾರವನ್ನು ಮರು ಪರಿಶೀಲಿಸಬೇಕು’ ಎಂದು ನ್ಯಾಯಪೀಠ ಸೂಚನೆ ನೀಡಿತು.

ಅರ್ಜಿದಾರು, ಸರ್ಕಾರ ವಾದ-ಪ್ರತಿವಾದ:

‘ರಾಜ್ಯದ ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವಾಗಿ ಕಲಿಯುವುದನ್ನು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಸಂವಿಧಾನ ಬಾಹಿರವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲೂ ಕನ್ನಡ ಕಡ್ಡಾಯ ಎಂದು ಹೇಳಿಲ್ಲ. ಶಾಲಾ ಕಲಿಕೆಯಲ್ಲೂ ಕನ್ನಡ ಕಡ್ಡಾಯವಿಲ್ಲ. ಇಂತಹ ಸನ್ನಿವೇಶದಲ್ಲಿ ಪದವಿ ಹಂತದಲ್ಲಿ ಕನ್ನಡ ಕಲಿಕೆ ಕಡ್ಡಾಯ ಮಾಡಲಾಗಿದೆ. ಇದರಿಂದ ಹೊರ ರಾಜ್ಯಗಳಿಂದ ಬಂದ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುತ್ತದೆ ಹಾಗೂ ಪದವಿಯಲ್ಲಿ ಭಾಷೆ ವಿಷಯ ಆಯ್ಕೆಗೂ ಅಡ್ಡಿಯಾಗಿದೆ. ಆದ್ದರಿಂದ ಸರ್ಕಾರದ ಆದೇಶ ರದ್ದುಗೊಳಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು.

Karnataka Hijab Row ಹಿಜಾಬ್ ವಿವಾದದ ಮಧ್ಯೆ ಕಾಲೇಜು ಪ್ರಾರಂಭಿಸಲು ತೀರ್ಮಾನ, ಫೆ.16ರಿಂದ ಕ್ಲಾಸ್ ಶುರು

ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ, ‘ಒಂದು ಭಾಷಾ ವಿಷಯವಾಗಿ ಕಲಿಯಲು ಕನ್ನಡವನ್ನು ಪರಿಚಯಿಸಲಾಗುತ್ತಿದೆ. ಆದರೆ, ಶಾಸ್ತ್ರೀಯವಾಗಿ ಕನ್ನಡ ಕಲಿಸುವ ಉದ್ದೇಶವಿಲ್ಲ . ಸರ್ಕಾರದ ನೀತಿಯ ಭಾಗವಾಗಿ ಕನ್ನಡ ಭಾಷೆ ಕಲಿಕೆಯನ್ನು ಕಡ್ಡಾಯ ಮಾಡಲಾಗಿದೆ. ಇದೊಂದು ಸದುದ್ದೇಶದ ಪ್ರಯತ್ನವಾಗಿದೆ. ಕನ್ನಡ ಕಲಿಯುವುದರಿಂದ ರಾಜ್ಯದಲ್ಲಿ ಉದ್ಯೋಗ ಪಡೆಯುವುದಕ್ಕೆ ಸಹಕಾರಿಯಾಗುತ್ತದೆ. ಸರ್ಕಾರದ ಆದೇಶ ಅಥವಾ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಸಮಸ್ಯೆಯಾದರೆ ಶಿಕ್ಷಕರು, ವಿದ್ಯಾರ್ಥಿಗಳು ನ್ಯಾಯಾಲಯದ ಮುಂದೆ ಬರಬೇಕು. ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ರೂಪದಲ್ಲಿ ಪ್ರಶ್ನಿಸಿರುವುದು ಸಮರ್ಥನೀಯವಲ್ಲ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಕೇಂದ್ರ ಸರ್ಕಾರದ ಪರ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಂ.ಬಿ. ನರಗುಂದ ವಾದ ಮಂಡಿಸಿ, ‘ಯಾವುದೇ ಭಾಷೆಯನ್ನು ಕಡ್ಡಾಯಗೊಳಿಸುವ ಬಗ್ಗೆ ರಾಷ್ಟ್ರೀಯ ಶಿಕ್ಷಣ ನೀತಿ-2020 (ಎನ್‌ಇಪಿ) ಹಾಗೂ ಅದರ ನಿಯಮಗಳಲ್ಲಿ ಉಲ್ಲೇಖಸಿಲ್ಲ. ಸ್ಥಳೀಯ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಮಟ್ಟದ ಮಹಾತ್ವಾಕಾಂಕ್ಷೆ ಹಾಗೂ ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಸುಲಭವಾಗಿ ಸಮಗ್ರ ಶೈಕ್ಷಣಿಕ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಎನ್‌ಇಪಿ ಜಾರಿಗೊಳಿಸಲಾಗಿದೆ. ಎನ್‌ಇಪಿಯ 22ನೇ ಅಧ್ಯಾಯದಲ್ಲಿ ಭಾರತದ ಭಾಷೆಗಳು(Indian Languages), ಕಲೆ ಮತ್ತು ಸಂಸ್ಕೃತಿ ಪ್ರಚಾರದ ಬಗ್ಗೆ ಹೇಳಲಾಗಿದೆ. ಇದೇ ಅಧ್ಯಾಯದಲ್ಲಿ ದ್ವಿಭಾಷೆಗೆ ಅವಕಾಶವಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳು ಮಾತೃಭಾಷೆ ಅಥವಾ ಸ್ಥಳೀಯ ಭಾಷೆಯನ್ನು ಬೋಧನಾ ಭಾಷೆಯನ್ನಾಗಿ ಬಳಕೆ ಮಾಡಬಹುದಾಗಿದೆ. ಎನ್‌ಇಪಿ ಮತ್ತದರ ನಿಯಮಗಳಲ್ಲಿ ಯಾವುದೇ ಭಾಷೆಯನ್ನು ಕಡ್ಡಾಯಗೊಳಿಸುವ ಸಂಬಂಧ ಉಲ್ಲೇಖಗಳಿಲ್ಲ. ಹೀಗಾಗಿ, ಎನ್‌ಇಪಿ ನಿಯಮಗಳನ್ನು ಪುನರ್‌ ವ್ಯಾಖ್ಯಾನಿಸುವ ಅಗತ್ಯ ಉದ್ಭವಿಸುವುದಿಲ್ಲ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
 

Latest Videos
Follow Us:
Download App:
  • android
  • ios