ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡೋದು ಕೇಂದ್ರ ಸರ್ಕಾರಕ್ಕೆ ಸರ್ವೇ ಸಾಮಾನ್ಯ: ಡಿಕೆಶಿ ಗರಂ
ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬುದು ದೃಢಪಟ್ಟಿದೆ. ಕೇಂದ್ರ ಸಚಿವರೇ ಈ ಬಗ್ಗೆ ಒಪ್ಪಿಕೊಂಡಿದ್ದಾರೆ. ಇನ್ನು 1500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವುದು ಈ ಸಮಸ್ಯೆಯ ತೀವ್ರತೆಯನ್ನು ಎತ್ತಿ ತೋರಿಸುತ್ತದೆ ಎಂದು ಹೇಳಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಂಗಳೂರು(ಜೂ.18): ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬುದನ್ನು ಕೇಂದ್ರ ಸಚಿವರೇ ಒಪ್ಪಿಕೊಂಡಿದ್ದಾರೆ. ನೀಟ್ ಫಲಿತಾಂಶದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಸಾವಿಗೆ ಯಾವ ನ್ಯಾಯ ಕೊಡುತ್ತೀರಾ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ನಮ್ಮ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುವುದು ಕೇಂದ್ರ ಸರ್ಕಾರಕ್ಕೆ ಸರ್ವೇ ಸಾಮಾನ್ಯವಾಗಿದೆ. ಶಿಕ್ಷಣ ಕ್ಷೇತ್ರದಲ್ಲೇ ಪಾರದರ್ಶಕ ವ್ಯವಸ್ಥೆ ಇಲ್ಲ ಎಂದರೆ ನಮ್ಮ ಮಕ್ಕಳ ಮುಂದಿನ ಭವಿಷ್ಯ ನೆನೆಸಿಕೊಂಡರೆ ಭಯವಾಗುತ್ತದೆ. ಈ ಹಗರಣದ ಹಿಂದಿರುವ ವ್ಯಕ್ತಿಗಳನ್ನು ತ್ವರಿತವಾಗಿ ಪತ್ತೆ ಮಾಡಿ ಅವರಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಪರೀಕ್ಷೆ ಪಾಸ್‌ಗಾಗಿ ಲಂಚ: ನೀಟ್ ಹಗರಣದಲ್ಲಿ ಕನ್ನಡಿಗರೂ ಭಾಗಿ!
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬುದು ದೃಢಪಟ್ಟಿದೆ. ಕೇಂದ್ರ ಸಚಿವರೇ ಈ ಬಗ್ಗೆ ಒಪ್ಪಿಕೊಂಡಿದ್ದಾರೆ. ಇನ್ನು 1500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವುದು ಈ ಸಮಸ್ಯೆಯ ತೀವ್ರತೆಯನ್ನು ಎತ್ತಿ ತೋರಿಸುತ್ತದೆ ಎಂದು ಹೇಳಿದ್ದಾರೆ.
ಆದರೆ ಫಲಿತಾಂಶದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಸಾವಿಗೆ ನ್ಯಾಯ ಏನು? ವಿದ್ಯಾರ್ಥಿಗಳಿಗೆ ಶಿಕ್ಷಣ ವ್ಯವಸ್ಥೆಯ ಬಗ್ಗೆ ಮತ್ತು ನಂಬಿಕೆ ಹುಟ್ಟುವಂತೆ ಏನು ಮಾಡುತ್ತೀರಿ ಎಂದು ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.