ಬೆಂಗಳೂರು (ಜೂ.01): ರಾಜ್ಯದ ಖಾಸಗಿ ಶಾಲೆಗಳ ಶಿಕ್ಷಕರಿಗೆ ಪರಿಹಾರ ನೀಡುವ ಸಂಬಂಧ ಇಲಾಖೆಯಲ್ಲಿರುವ ಅನುದಾನದ ಮಾಹಿತಿ ನೀಡುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಕೋವಿಡ್ ಸಂದರ್ಭದಲ್ಲಿ ಪರಿಹಾರ ನೀಡುವ ಸಂಬಂಧ ಸೋಮವಾರ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಪರಿಹಾರ ನೀಡುವ ವಿಚಾರವಾಗಿ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್‌ ಸದಸ್ಯರ ಜೊತೆ ಚರ್ಚಿಸಲಾಗಿದೆ. ಇಲಾಖೆಯಲ್ಲಿ ಎಷ್ಟುಅನುದಾನ ಲಭ್ಯತೆ ಎಂಬುದರ ಮಾಹಿತಿಯನ್ನು ಮಂಗಳವಾರ ನೀಡುವಂತೆ ಸೂಚಿಸಿದ್ದೇನೆ. ಅಧಿಕಾರಿಗಳು ನೀಡಿದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ಇಲಾಖೆಯಲ್ಲಿ ಲಭ್ಯವಿರುವ ಅನುದಾನದ ಮಾಹಿತಿಯನ್ನು ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗುತ್ತದೆ. ಬಳಿಕ ಮತ್ತೊಮ್ಮೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೇ ಶಾಲೆಗಳಿಂದ ಫೀಸ್ ಟಾರ್ಚರ್ ..

ಪ್ರತಿ ಶಿಕ್ಷಕರಿಗೆ ತಲಾ 10 ಸಾವಿರ ರು.ಗಳಂತೆ ಪರಿಹಾರ ನೀಡಿದರೂ ಕನಿಷ್ಠ 300 ಕೋಟಿ ರು.ಗಳಿಗಿಂತಲೂ ಅಧಿಕ ಮೊತ್ತದ ಅನುದಾನದ ಅವಶ್ಯಕತೆ ಇದೆ. ಹೀಗಾಗಿ, ಮೊದಲಿಗೆ ಇಲಾಖೆಯಲ್ಲಿರುವ ಅನುದಾನ ಎಷ್ಟುಎಂಬುದನ್ನು ತಿಳಿಯುವ ಪ್ರಯತ್ನ ಮಾಡಿದ್ದೇವೆ. ಮುಂದಿನ ಹಂತದಲ್ಲಿ ಮುಖ್ಯಮಂತ್ರಿಗಳ ಬಳಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್‌ ಸದಸ್ಯರೊಬ್ಬರು ಮಾಹಿತಿ ನೀಡಿದರು.

ಸಭೆಯಲ್ಲಿ ವಿಧಾನ ಪರಿಷತ್‌ ಸದಸ್ಯರಾದ ಪುಟ್ಟಣ್ಣ, ಅರುಣ್‌ ಶಹಾಪೂರ, ಇಲಾಖೆ ಆಯಕ್ತ ಅನ್ಬುಕುಮಾರ್‌ ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona