ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿವಿಗೆ ಕೆಳದಿ ಶಿವಪ್ಪ ನಾಯಕ ಹೆಸರು
* ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ಹೊಸ ಹೆಸರು
* ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಎಂದು ನಾಮಕರಣ
* ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಂದ ಘೋಷಣೆ
ಶಿವಮೊಗ್ಗ (ಜು.24): ಜಿಲ್ಲೆಯ ಸಾಗರ ತಾಲೂಕಿನ ಇರುವಕ್ಕಿಯಲ್ಲಿ ಲೋಕಾರ್ಪಣೆ ಮಾಡಲಾದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಲಾಗಿದೆ.
ಇಂದು (ಶನಿವಾರ) ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಗೃಹ ಕಚೇರಿ ಕೃಷ್ಟಾದಲ್ಲಿ ವರ್ಚುವಲ್ ವೇದಿಕೆ ಮೂಲಕ ಉದ್ಘಾಟಿಸಿ ಮಾತನಾಡಿದರು. ಈ ವೇಳೆ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಲಾಗುವುದು' ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ತವರು ಜಿಲ್ಲೆಗೆ ಬಂಪರ್ : ಭಾರಿ ಕೊಡುಗೆ ನೀಡಿದ ಬಿಎಸ್‌ವೈ
ಕಳೆದ ಎರಡು ವರ್ಷಗಳ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಗರಿಷ್ಟ ಪ್ರಯತ್ನ ಮಾಡಿದ ತೃಪ್ತಿ ನನಗಿದೆ. ನನಗೆ ರಾಜಕೀಯ ಜನ್ಮ ನೀಡಿದ ಶಿವಮೊಗ್ಗ ಜಿಲ್ಲೆಯ ಅದರಲ್ಲೂ ಶಿಕಾರಿಪುರ ತಾಲೂಕಿನ ಜನತೆಯ ಋಣವನ್ನು ತೀರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದ್ದೇನೆ ಎಂದು ಅವರು ಭಾವುಕರಾಗಿ ಹೇಳಿದರು.
ಜಿಲ್ಲೆಯಲ್ಲಿ ರೈತರ ಹೊಲಗಳಿಗೆ ನೀರುಣಿಸುವ ನೀರಾವರಿ ಯೋಜನೆಗಳನ್ನು ಕಳೆದ ಎರಡು ವರ್ಷಗಳ ಅವಧಿಯಲ್ಲಿ ಯುದ್ದೋಪಾಧಿಯಲ್ಲಿ ಅನುಷ್ಟಾನಗೊಳಿಸಲಾಗಿದೆ. ಕೆರೆಗಳನ್ನು ತುಂಬಿಸುವ ಏತ ನೀರಾವರಿ ಯೋಜನೆಗಳಿಗೆ ದಾಖಲೆ ಪ್ರಮಾಣದ ಅನುದಾನವನ್ನು ಒದಗಿಸಲಾಗಿದೆ. ಈ ನೀರಾವರಿ ಯೋಜನೆಗಳು ಭವಿಷ್ಯದಲ್ಲಿ ಜಿಲ್ಲೆಯ ರೈತರ ಆರ್ಥಿಕ ಚಿತ್ರಣವನ್ನೇ ಬದಲಾಯಿಸುವ ವಿಶ್ವಾಸವಿದೆ ಎಂದರು.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಲವರು ಕವೇಂಪು ಹೆಸರಿಡಬೇಕೆಂದು ಆಗ್ರಹಿಸುತ್ತಿದ್ದರೆ, ಇನ್ನೂ ಕೆಲವರು ಕೆಳದಿ ಶಿವಪ್ಪ ನಾಯಕ ಎಂದು ಹೆಸರಿಡಬೇಕೆಂದು ಆಗ್ರಹಿಸಿದ್ದಾರೆ.