ಬೆಂಗಳೂರು(ಡಿ.12): ಶಾಲಾ ಕಾಲೇಜು ಆರಂಭಕ್ಕೆ ಡಿಸೆಂಬರ್‌ ಕೊನೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸಭೆ ನಡೆಯಲಿದೆ. ಈ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದ್ದಾರೆ. 

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ‘ಈಗಾಗಲೇ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳನ್ನು ಆರಂಭಿಸಲಾಗಿದೆ. ಡಿಸೆಂಬರ್‌ ಕೊನೆಯ ವಾರದ ಸೋಂಕಿನ ಪ್ರಮಾಣ ವನ್ನು ಪರಿಶೀಲಿಸಿ ನಂತರ 10 ಮತ್ತು 12 ನೇ ತರಗತಿಗಳಿಗೂ ಶಾಲೆ ಆರಂಭಿಸಬಹುದು ಎಂದು ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ. 

ಫೆಬ್ರವರಿ, ಮಾರ್ಚಲ್ಲಿ 10, 12ನೇ ಕ್ಲಾಸ್‌ ಪರೀಕ್ಷೆ

ಈ ಹಿನ್ನೆಲೆಯಲ್ಲಿ ಡಿಸೆಂಬರ್‌ ಮೂರು ಅಥವಾ ನಾಲ್ಕನೇ ವಾರದಲ್ಲಿ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖಾ ಸಚಿವರು, ಅಧಿಕಾರಿಗಳು, ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ತಜ್ಞರ ಸಭೆ ನಡೆಯಲಿದ್ದು, ಶಾಲೆಗಳು ಮತ್ತು ಪಿಯು ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ’ ಎಂದು ಹೇಳಿದರು.