ಗೋಕಾಕ್‌(ಡಿ.27): ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಐದು ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವ ಮೂಲಕ ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಅವರು ಇತರರಿಗೂ ಮಾದರಿಯಾಗಿದ್ದಾರೆ.

ಗೋಕಾಕ್‌ ತಾಲೂಕಿನಲ್ಲಿರುವ ಖನಗಾಂವ ಗ್ರಾಮದ ಕನ್ನಡ ಪ್ರಾಥಮಿಕ ಶಾಲೆ, ಮಮದಾಪೂರದ ಸರ್ಕಾರಿ ಮಾದರಿ ಗಂಡು ಮಕ್ಕಳ ಶಾಲೆ, ಅಂಕಲಗಿಯ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ, ಧುಪದಾಳದ ಮತ್ತು ಸುಲಧಾಳ ಗ್ರಾಮದಲ್ಲಿರುವ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗಳನ್ನು ಸಚಿವರು ದತ್ತು ಪಡೆದುಕೊಂಡಿದ್ದು, ಶಿಕ್ಷಣ ಇಲಾಖೆಯ ಪ್ರಮಾಣಪತ್ರವನ್ನು ಪಡೆದುಕೊಂಡಿದ್ದಾರೆ. ದತ್ತು ಪಡೆದಿರುವ ಶಾಲೆಗಳಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಾಣ, ಶಾಲಾ ಕಟ್ಟಡಗಳ ನವೀಕರಣ ಸೇರಿದಂತೆ ಈ ಶಾಲೆಗಳಿಗೆ ವಿವಿಧ ಸೌಲಭ್ಯ ದೊರಕಿಸಲು ಕಾರ್ಯಕ್ರಮ ರೂಪಿಸಿದ್ದಾರೆ.

CBSE 10 ಮತ್ತು 12ನೇ ತರಗತಿ ಪರೀಕ್ಷಾ ದಿನಾಂಕ 31ಕ್ಕೆ ಪ್ರಕಟ

ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಉತ್ತಮ ಶಿಕ್ಷಣದಿಂದ ಸುಭದ್ರ ಸಮಾಜ ನಿರ್ಮಾಣ ಸಾಧ್ಯ ಎಂಬುದರಲ್ಲಿ ನಂಬಿಕೆ ಹೊಂದಿದ್ದೇನೆ. ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಮಾರ್ಗದರ್ಶನದಲ್ಲಿ ಸಾಗಿ ಬಂದಿದ್ದು, ಅವರ ಪ್ರಮುಖ ಆಶಯಗಳಲ್ಲಿ ಒಂದಾಗಿರುವ ಸರ್ವರಿಗೂ ಶಿಕ್ಷಣ ನೀಡಬೇಕೆಂಬ ಮಹದಾಸೆಯಿಂದ ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಈ ಶಾಲೆಗಳನ್ನು ಯಾವುದೇ ಹೈಟೆಕ್‌ ಶಾಲೆಗಿಂದ ಕಡಿಮೆ ಇಲ್ಲದಂತೆ ಮಾದರಿ ಶಾಲೆಗಳನ್ನಾಗಿ ರೂಪಿಸುವ ಕನಸು ಹೊಂದಿದ್ದೇನೆ ಎಂದು ತಿಳಿಸಿದ್ದಾರೆ.