ಬೆಂಗಳೂರು(ಫೆ.12): ರಾಜ್ಯದ ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ-ಕೇರಳ ಗಡಿಭಾಗದ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್‌ ಪಾಸ್‌ಗಳನ್ನು ವಿತರಿಸಬೇಕು ಮತ್ತು ಶಾಲಾ ಅವಧಿಯಲ್ಲಿ ಬಸ್‌ ಸೌಲಭ್ಯ ಕಲ್ಪಿಸಬೇಕು ಎಂದು ಕೋರಿ ಕೇರಳ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ.

ಈ ಸಂಬಂಧ ಗುರುವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ಅವರು ಕೇರಳ ಸರ್ಕಾರಕ್ಕೆ ಪತ್ರ ಬರೆದಿದ್ದು, ಕೊರೋನಾದಂತಹ ಸಂಕಷ್ಟದ ಸಮಯದಲ್ಲಿ ರಿಯಾಯಿತಿ ದರದಲ್ಲಿ ಬಸ್‌ ಪಾಸ್‌ಗಳನ್ನು ವಿತರಿಸಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿಗೆ ಧೈರ್ಯ ತುಂಬಿದ ಸಚಿವ ಸುರೇಶ್‌ ಕುಮಾರ್‌

ಕರ್ನಾಟಕ ಸರ್ಕಾರವು ರಿಯಾಯಿತಿ ದರದಲ್ಲಿ ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ವಿತರಿಸುತ್ತಿದೆ. ಆದರೆ, ಕನ್ನಡ ಮಾತನಾಡುವ ಸುಮಾರು 24 ಸಾವಿರ ವಿದ್ಯಾರ್ಥಿಗಳು ಕೇರಳ ಗಡಿಭಾಗದಿಂದ ಮಂಗಳೂರಿಗೆ ಸಂಚರಿಸುತ್ತಾರೆ. ಈ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್‌ ಸೌಲಭ್ಯ ಇಲ್ಲದಿರುವುದರಿಂದ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಮಾಧ್ಯಮಗಳಿಂದ ತಿಳಿದು ಬಂದಿದೆ. ಆದ್ದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬಸ್‌ ಸೌಲಭ್ಯ ಹಾಗೂ ರಿಯಾಯಿತಿ ಬಸ್‌ ಪಾಸ್‌ ನೀಡುವಂತೆ ಮನವಿ ಮಾಡಿದ್ದಾರೆ.

ಕನ್ನಡಪ್ರಭ ವರದಿಗೆ ಸ್ಪಂದನೆ

‘ಕ್ಲಾಸಿಗೆ ಬರಲು ಕಾಸರಗೋಡು ವಿದ್ಯಾರ್ಥಿಗಳ ತೀವ್ರ ಪರದಾಟ’ ಎಂಬ ತಲೆಬರಹದಡಿ ಗುರುವಾರ ಮುಖಪುಟದಲ್ಲಿ ‘ಕನ್ನಡಪ್ರಭ’ ವಿಶೇಷ ವರದಿ ಪ್ರಕಟಿಸಿತ್ತು. ಈ ವರದಿಗೆ ಸ್ಪಂದಿಸಿರುವ ಸಚಿವರು, ವಿದ್ಯಾರ್ಥಿಗಳ ಮೇಲಿನ ಕಾಳಜಿಯಿಂದ ಕೇರಳ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.