ಆ.9ರಿಂದ ರಾಜ್ಯದಲ್ಲಿ ಪದವಿ ತರಗತಿ ಆರಂಭಕ್ಕೆ ಸಲಹೆ
- ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯ ಕೆಲ ದಿನಗಳಲ್ಲಿ ಪೂರ್ಣ
- ಆಗಸ್ಟ್ 9ರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗೆ ಸಲಹೆ
- ಶಿಕ್ಷಣ ಸುಧಾರಣೆಗಳ ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ ಸರ್ಕಾರಕ್ಕೆ ಸಲಹೆ
ಬೆಂಗಳೂರು (ಜು.07): ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯ ಕೆಲ ದಿನಗಳಲ್ಲಿ ಪೂರ್ಣಗೊಳ್ಳುವುದರಿಂದ ಆಗಸ್ಟ್ 9ರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ಆರಂಭಿಸಬೇಕು. ಶಾಲೆಗಳನ್ನು ಆರಂಭಿಸುವ ಜವಾಬ್ದಾರಿಯನ್ನು ಆಯಾ ಜಿಲ್ಲಾಧಿಕಾರಿಗಳಿಗೆ ನೀಡಬೇಕು ಎಂದು ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಶಾಲೆ, ಕಾಲೇಜುಗಳನ್ನು ಆರಂಭಿಸುವ ಬಗ್ಗೆ ನಾಲ್ಕು ಸಲಹೆಗಳನ್ನು ನೀಡಿದ್ದಾರೆ.
ದ್ವಿತೀಯ ಪಿಯು ಫಲಿತಾಂಶ ಮಾರ್ಗಸೂಚಿ ಪ್ರಕಟ: ಅಂಕ ನಿಗದಿ ಹೇಗೆ? ಇಲ್ಲಿದೆ ಮಾಹಿತಿ ...
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವು ಜುಲೈ 2ನೇ ವಾರದಲ್ಲಿ ಹೊರಬೀಳುವ ಸಾಧ್ಯತೆಯಿದೆ. ಫಲಿತಾಂಶ ನಂತರ ಕನಿಷ್ಠ 2ರಿಂದ 3 ವಾರದ ದಾಖಲಾತಿಗೆ ಕಾಲಾವಕಾಶ ನೀಡಿ ಆಗಸ್ಟ್ 9ರಿಂದ ಪದವಿ ತರಗತಿಗಳನ್ನು ಆರಂಭಿಸಬೇಕು. ಜತೆಗೆ ಬೆಸ ಸೆಮಿಸ್ಟರ್ (1,3,5,7) ಪರೀಕ್ಷೆಯನ್ನು ಜುಲೈ 15ರ ನಂತರ ಆರಂಭಿಸಬೇಕು ಎಂದು ಸಲಹೆ ನೀಡಿದ್ದಾರೆ.
ಇನ್ನು ಶಾಲಾರಂಭದ ಬಗ್ಗೆ ಡಾ.ದೇವಿಶೆಟ್ಟಿನೇತೃತ್ವದ ತಜ್ಞರ ಸಮಿತಿ ವರದಿಯ ಶಿಫಾರಸಿನಂತೆ ಕ್ರಮ ತೆಗೆದುಕೊಳ್ಳಬೇಕು. ಶಾಲಾರಂಭದ ಜವಾಬ್ದಾರಿಯನ್ನು ಆಯಾ ಜಿಲ್ಲಾಧಿಕಾರಿಗಳು ಪರಿಸ್ಥಿತಿಗೆ ಅನುಗುಣವಾಗಿ ತೀರ್ಮಾನ ತೆಗೆದುಕೊಳ್ಳಲು ಅನುಮತಿ ನೀಡಬೇಕು. ಜಿಲ್ಲೆಯಲ್ಲಿ ಎಲ್ಲೆಲ್ಲಿ ಶಾಲಾರಂಭ ಸಾಧ್ಯವೋ ಅಂತಹ ಕಡೆ ಶಾಲೆಗಳ ಆರಂಭದ ಬಗ್ಗೆ ಜಿಲ್ಲಾಧಿಕಾರಿಗಳೇ ಪರಿಶೀಲಿಸಿ ನಿರ್ಧಾರ ಕೈಗೊಳ್ಳಲು ತಿಳಿಸಬೇಕು ಎಂದು ತಿಳಿಸಿದ್ದಾರೆ.
ಶಾಲಾ ಕಾಲೇಜು ತರಗತಿಗಳು ಸರಿಯಾಗಿ ನಡೆಯದೇ ಇರುವುದರಿಂದ ವಿದ್ಯಾರ್ಥಿಗಳು, ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಮಾರ್ಗಸೂಚಿಗಳನ್ನು ಪಾಲಿಸಿ ಶಾಲೆ, ಕಾಲೇಜು ಆರಂಭಿಸುವಂತೆ ಸಲಹೆ ನೀಡಿದ್ದಾರೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona