Muslim Women College: ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಪ್ರಸ್ತಾವನೆ ಇಲ್ಲವೆಂದ ಸಿಎಂ ಬೊಮ್ಮಾಯಿ
ವಕ್ಫ್ ಮಂಡಳಿ ವತಿಯಿಂದ ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿವಮೊಗ್ಗ (ಡಿ.1): ವಕ್ಫ್ ಮಂಡಳಿ ವತಿಯಿಂದ ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಭದ್ರಾವತಿಯ ಬೊಮ್ಮನಕಟ್ಟೆ ಪ್ರದೇಶದಲ್ಲಿನ ಹೆಲಿಪ್ಯಾಡ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿಯವರು, ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ, ಇದು ಕೇವಲ ಹೇಳಿಕೆಯಾಗಿದ್ದು, ಈ ರೀತಿಯ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಹಿಜಾಬ್ ನಿರ್ಣಯದ ನಂತರ ಮುಸ್ಲಿಂ ಹೆಣ್ಣುಮಕ್ಕಳ ಹಾಜರಾತಿ ಕಡಿಮೆಯಾಗಿದೆ ಎಂಬುದಕ್ಕೆ ಪ್ರತಿಕ್ರಿಯಿಸಿ, ಇದು ಸತ್ಯಕ್ಕೆ ದೂರವಾಗಿದ್ದು, ವಿದ್ಯಾರ್ಥಿನಿಯರ ಹಾಜರಾತಿ ಸಂಪೂರ್ಣವಾಗಿದೆ. ರಾಜ್ಯದ ಸಾಕ್ಷರತಾ ದರ ಹೆಚ್ಚಾಗಿದ್ದು, ಅಲ್ಪಸಂಖ್ಯಾತ ಹೆಣ್ಣುಮಕ್ಕಳು ಆಸಕ್ತಿಯಿಂದ ವಿದ್ಯೆ ಕಲಿಯುತ್ತಿದ್ದಾರೆ. ಈ ವಿಷಯದಲ್ಲಿಯಾವುದೇ ಗೊಂದಲವಿಲ್ಲ ಎಂದರು.
ಹಿನ್ನೆಲೆ ಏನು?: ರಾಜ್ಯದಲ್ಲಿ ಮುಸ್ಲಿಂ ಹೆಣ್ಮಕ್ಕಳಿಗಾಗಿಯೇ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮುಂದಿನ ತಿಂಗಳು ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವ ನಿರೀಕ್ಷೆಯಿದೆ. ಮೂರು ತಿಂಗಳ ಹಿಂದೆ, ರಾಜ್ಯ ವಕ್ಫ್ ಬೋರ್ಡ್‌ನಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ಒಂದೂವರೆ ತಿಂಗಳ ಹಿಂದೆ ಸರ್ಕಾರದಿಂದ ಇದಕ್ಕೆ ಅನುಮೋದನೆಯೂ ದೊರೆತಿತ್ತು. ಪ್ರತಿ ಕಾಲೇಜಿಗೆ 2.50 ಕೋಟಿ ರು.ಅನುದಾನವನ್ನೂ ಮೀಸಲಿರಿಸಲಾಗಿದ್ದು, ವಕ್ಫ್ ಬೋರ್ಡ್‌ಗೆ ರಾಜ್ಯ ಸರ್ಕಾರ ನೀಡುವ ಅನುದಾನದಲ್ಲಿ ಈ ವೆಚ್ಚವನ್ನು ಭರಿಸಲು ನಿರ್ಧರಿಸಲಾಗಿದೆ ಎಂದು ಸುದ್ದಿಯಾಗಿತ್ತು.
ಉಡುಪಿಯಲ್ಲಿ ಹಿಜಾಬ್ ವಿವಾದ ಉದ್ಭವಿಸಿದ ಬಳಿಕ ತರಗತಿಯಲ್ಲಿ ಹಿಜಾಬ್ ಧರಿಸದಂತೆ ಸರ್ಕಾರ ಆದೇಶ ಹೊರಡಿಸಿತ್ತು. ಈ ವಿಚಾರ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ವಿಷಯವಾಗಿ ಬಹುತೇಕ ಮುಸ್ಲಿಂ ಸಂಘ, ಸಂಸ್ಥೆಗಳು ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದವು. ಇದೀಗ ಚುನಾವಣೆಯ ಪರ್ವ ಕಾಲದಲ್ಲಿ ಸರ್ಕಾರವೇ ಮುತುವರ್ಜಿ ವಹಿಸಿ ಮುಸ್ಲಿಂ ಹೆಣ್ಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ಸ್ಥಾಪನೆಗೆ ಮುಂದಾಗಿದೆ ಎನ್ನಲಾಗಿತ್ತು. ಅಲ್ಲದೆ, ಇಂತಹ ಪ್ರತ್ಯೇಕ ಕಾಲೇಜು ಸ್ಥಾಪನೆ ವಿಚಾರ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿತ್ತು.
ಎಲ್ಲೆಲ್ಲಿ ಕಾಲೇಜು ಸ್ಥಾಪನೆ?:
ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯಾರ್ ಕಣ್ಣೂರಿನ 16 ಎಕರೆ ಜಾಗದಲ್ಲಿ ಮುಸ್ಲಿಂ ಮಹಿಳಾ ಕಾಲೇಜು ಸ್ಥಾಪನೆಗೆ ಜಾಗ ಗುರುತಿಸಲಾಗಿದೆ. ಉಳಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿರುವ ಉತ್ತರ ಕರ್ನಾಟಕ, ಹೈದ್ರಾಬಾದ್ ಕರ್ನಾಟಕದ ಕೆಲವೆಡೆ ಕಾಲೇಜು ಆರಂಭಿಸಲಾಗುತ್ತದೆ ಎಂದು ವರದಿಯಾಗಿತ್ತು.
ಪಿಯುಗೆ ಬಹು ಆಯ್ಕೆ ಪ್ರಶ್ನೆ ಮಾದರಿ ಜಾರಿಗೆ ಸರಕಾರದ ಚಿಂತನೆ
ರಾಜ್ಯಾದ್ಯಂತ ಇರುವ ವಕ್ಫ್ ಆಸ್ತಿಯಲ್ಲೇ ಈ ಕಾಲೇಜುಗಳು ತಲೆ ಎತ್ತಲಿದ್ದು, ಶಂಕುಸ್ಥಾಪನೆ ನೆರವೇರಿದ ಬಳಿಕ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಲಿದೆ. 2024-25ನೇ ಸಾಲಿನಿಂದ ಕಾಲೇಜುಗಳು ಕಾರ್ಯಾರಂಭವಾಗುವ ನಿರೀಕ್ಷೆಯಿದೆ. ಆರಂಭದಲ್ಲಿ ಪ್ರಥಮ ಪಿಯುಸಿ ಆರಂಭವಾಗಲಿದ್ದು, ನಂತರದ ವರ್ಷ ದ್ವಿತೀಯ ಪಿಯುಸಿ ಹೀಗೆ ಪದವಿ ಹಂತದವರೆಗೆ ಇದನ್ನು ವಿಸ್ತರಿಸಲಾಗುತ್ತದೆ ಎಂದು ಮಾಧ್ಯಮ ವರದಿ ತಿಳಿಸಿತ್ತು.
ಮಾನಸಿಕ ಒತ್ತಡವಿಲ್ಲದೆ ಮುಕ್ತವಾಗಿ ವಿದ್ಯೆ ಕಲಿಯುವುದು 21 ನೇ ಶತಮಾನದ ಅವಶ್ಯಕತೆ: ಸಿಎಂ ಬೊಮ್ಮಾಯಿ
ಹಿಜಾಬ್ ವಿವಾದದ ಬಳಿಕ ರಾಜ್ಯಾದ್ಯಂತ ಸುಮಾರು ಏಳೆಂಟು ಸಾವಿರ ಮುಸ್ಲಿಂ ವಿದ್ಯಾರ್ಥಿನಿಯರು ಒಂದೋ ಶಿಕ್ಷಣದಿಂದಲೇ ವಿಮುಖರಾಗಿದ್ದಾರೆ, ಇಲ್ಲವೇ ಮುಸ್ಲಿಂ ಆಡಳಿತದ ಕಾಲೇಜುಗಳಿಗೆ ಹಾಗೂ ಹಿಜಾಬ್‌ಗೆ ಅವಕಾಶವಿರುವ ಖಾಸಗಿ ಕಾಲೇಜುಗಳಿಗೆ ಸೇರ್ಪಡೆಯಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಬೆಳವಣಿಗೆ ನಂತರ ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲಿಯೇ ಮುಸ್ಲಿಂ ಶಿಕ್ಷಣ ಸಂಸ್ಥೆಗಳಿಂದ ಕಾಲೇಜು ಸ್ಥಾಪನೆಗೆ 13 ಅರ್ಜಿ ಸಲ್ಲಿಕೆಯಾಗಿದ್ದು, ಇದರಲ್ಲಿ ಎರಡು ಕಾಲೇಜುಗಳು ಈಗಾಗಲೇ ಮಂಜೂರಾಗಿವೆ. ಮುಂದಿನ ವರ್ಷ ಇನ್ನಷ್ಟು ಶಿಕ್ಷಣ ಸಂಸ್ಥೆಗಳಿಗೆ ಅನುಮತಿ ದೊರೆಯುವ ನಿರೀಕ್ಷೆಯಿದೆ ಎಂದು ಹೇಳಲಾಗಿತ್ತು.