ಬೆ<ಗಳೂರು(ಡಿ.15): ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಕ್ಷೀಣಿಸುತ್ತಿರುವ ನಡುವೆಯೇ ಶಾಲಾರಂಭದ ಪ್ರಸ್ತಾವಕ್ಕೆ ಮತ್ತೆ ಜೀವ ಬಂದಿದೆ. ‘ರಾಜ್ಯದಲ್ಲಿ 10ರಿಂದ 12ರ ವರೆಗೆ ತರಗತಿಗಳನ್ನು ಆರಂಭಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಹಾಗೂ ವಿವಿಧ ಇಲಾಖೆಗಳ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾ ಗುವುದು’ ಎಂದು ಪ್ರಾಥ ಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸೋಮವಾರ ರಾಜ್ಯದ ವಿವಿಧ ಖಾಸಗಿ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯ ಬಳಿಕ ಮಾತನಾಡಿದ ಅವರು, ‘ರಾಜ್ಯದಲ್ಲಿ ಶಾಲೆಗಳನ್ನು ತೆರೆಯುವ ಸಂಬಂಧ ರಾಜ್ಯದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮತ್ತು ಆರೋಗ್ಯ ಇಲಾಖೆಯೊಂದಿಗೆ ಶೀಘ್ರವೇ ಚರ್ಚಿಸಲಾಗುತ್ತದೆ’ ಎಂದು ಹೇಳಿದರು.

‘ಕೊರೋನಾ ನಿಯಮಗಳನ್ನು ಪಾಲಿಸಿಕೊಂಡು ಶಾಲೆಗಳನ್ನು ಆರಂಭಿಸುವ ಕುರಿತು ಚರ್ಚಿಸಲಾಗುತ್ತದೆ. ಆರೋಗ್ಯ ಇಲಾಖೆ ತಜ್ಞರು ಹಾಗೂ ಶಿಕ್ಷಣ ತಜ್ಞರ ಅಭಿಪ್ರಾಯ ಮೇಲೆ ಶಾಲೆಗಳನ್ನು ಆರಂಭಿಸುವ ನಿರ್ಧಾರಕ್ಕೆ ಬರಲಾಗುತ್ತದೆ’ ಎಂದರು

ಮಕ್ಕಳ ಹಿತದೃಷ್ಟಿಯಿಂದ ಖಾಸಗಿ ಶಾಲೆಗಳು ಶುಲ್ಕ ಹೆಚ್ಚಳ ಮಾಡದಿರುವುದು, ಸಾಧ್ಯವಾದಷ್ಟು ಶುಲ್ಕ ಇಳಿಸುವಂತಹ ಮತ್ತು ಶುಲ್ಕ ಪಾವತಿಸಲು ಕಂತುಗಳನ್ನು ನೀಡುವಂತಹುದು ಸೇರಿದಂತೆ ಮಾನವೀಯ ನಿಲುವುಗಳನ್ನು ಕೈಗೊಳ್ಳಬೇಕಿದೆ. ಈ ವಿಚಾರದಲ್ಲಿ ಶಾಲಾ ಸಂಘಟನೆಗಳು ಪೋಷಕರೊಂದಿಗೆ ಚರ್ಚಿಸಿ ಶೀಘ್ರ ಒಂದು ನಿರ್ಧಾರಕ್ಕೆ ಬರಬೇಕು ಎಂದೂ ಅವರು ಸಲಹೆ ನೀಡಿದರು. ಸಭೆಯಲ್ಲಿ ವಿವಿಧ ಖಾಸಗಿ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಮುಖ್ಯಸ್ಥರು, ಪ್ರಾಚಾರ‌್ಯರು, ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.