ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನಲೆ: ಆತ್ಮವಿಶ್ವಾಸ ಹೆಚ್ಚಿಸಲು ವಿದ್ಯಾರ್ಥಿಗಳಿಗೆ ಗುಲಾಬಿ ಹೂವು, ಸಿಹಿ ವಿತರಣೆ
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ಹಾಗೂ ಸಿಹಿಯನ್ನು ನೀಡಿ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಕಾರ್ಯಕೈಗೊಳ್ಳಲಾಗಿದೆ.
ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು
ಚಿಕ್ಕಮಗಳೂರು (ಮಾ.31): ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ಹಾಗೂ ಸಿಹಿಯನ್ನು ನೀಡಿ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಕಾರ್ಯ ಕೈಗೊಳ್ಳಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸದ ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಬಂದ 382 ವಿದ್ಯಾರ್ಥಿಗಳಿಗೆ ಪುಷ್ಪಗಿರಿ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಗುಲಾಬಿ ಹೂವು ಹಾಗೂ ಸಿಹಿ ವಿತರಿಸಲಾಯಿತು.
ವಿದ್ಯಾರ್ಥಿಗಳಲ್ಲಿ ನೈತಿಕ ಸ್ಥೈರ್ಯ: ವಿದ್ಯಾರ್ಥಿಗಳಲ್ಲಿ ನೈತಿಕ ಸ್ಥೈರ್ಯ ತುಂಬಿ ಉತ್ತಮ ರೀತಿಯಲ್ಲಿ ಪರೀಕ್ಷೆ ಬರೆಯುವ ಆತ್ಮವಿಶ್ವಾಸ ಬರಬೇಕೆನ್ನುವ ಕಾರಣಕ್ಕೆ ಹೂಗಳನ್ನು ನೀಡಿ ಬರಮಾಡಿಕೊಳ್ಳಲಾಗಿದೆ.ಮಕ್ಕಳಿಗೆ ಗುಲಾಬಿ ಹೂವಿನ ಜೊತೆಗೆ ಸಿಹಿಯನ್ನು ಕಳಸಾ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಠಾಣಾಧಿಕಾರಿ ಡಾ.ಸಿ.ಆರ್.ಮೋಹನ್ ಕುಮಾರ್ ವಿತರಣೆ ಮಾಡಿದರು. ನಂತರ ಮಾತಾಡಿದ ಅವರುಮಕ್ಕಳು ಉತ್ತಮ ಅಂಕಗಳನ್ನು ಗಳಿಸಿ ಶಾಲೆ ಮತ್ತು ಪೋಷಕರಿಗೆ ಒಳ್ಳೆಯ ಹೆಸರು ತರುವಂತಾಗಲಿ ಎಂದು ಶುಭ ಹಾರೈಸಿದರು. ಪಿಎಸ್ಐ ಗಜೇಂದ್ರ, ವಿವಿಧ ಶಾಲೆಗಳ ಮುಖ್ಯ ಶಿಕ್ಷಕರುಗಳಾದ ಶಿವಕುಮಾರ ಸ್ವಾಮಿ, ಲೋಕೇಶ್, ಸತೀಶ್, ಗೋವಿಂದಪ್ಪ, ಮೇನಕಾ, ಮಲ್ಲಿಕಾರ್ಜುನ ಇತರರು ಇದ್ದರು.
ಕೊಡಗಿನ ಅಭ್ಯರ್ಥಿಗಳ ಆಯ್ಕೆಗೆ ಮತದಾನದ ಮೂಲಕ ಅಭಿಪ್ರಾಯ ಸಂಗ್ರಹಿಸಿದ ಬಿಜೆಪಿ!
ಜಿಲ್ಲೆಯ 65 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ: ಜಿಲ್ಲೆಯ 65 ಪರೀಕ್ಷಾ ಕೇಂದ್ರಗಳಲ್ಲಿ ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಿದ್ದು, 12,502 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದಾರೆ. ಎಲ್ಲಾ ಕೇಂದ್ರಗಳಿಗೆ ಖಜಾನೆಯಿಂದ ಸುರಕ್ಷಿತವಾಗಿ ಪ್ರಶ್ನೆ ಪತ್ರಿಕೆಗಳನ್ನು ವಿತರಿಸುವುದು ಮತ್ತು ಉತ್ತರ ಪತ್ರಿಕೆಗಳನ್ನು ಸಂಗ್ರಹಿಸುವ ಪ್ರಕ್ರಿಯೆಗಳಿಗೆ ಅಧಿಕಾರಿಗಳನ್ನು ನೇಮಿಸಲಾಗಿತ್ತು. ಸರ್ಕಾರಿ ಜೂನಿಯರ್ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ್ದ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಜಿ.ಪ್ರಭು ಮಾತನಾಡಿದರು.
ಅರಣ್ಯಾಧಿಕಾರಿಗಳ ಸಮಸ್ಯೆ ಪರಿಹಾರಕ್ಕಾಗಿ ಸರ್ಕಾರಕ್ಕೆ ವರದಿ: ರಿಷಬ್ ಶೆಟ್ಟಿ
ಮುಕ್ತ ವಾತಾವರಣದಲ್ಲಿ ಮಕ್ಕಳು ಪರೀಕ್ಷೆ ಬರೆಯಬೇಕು ಎನ್ನುವ ದೃಷ್ಠಿಯಿಂದ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದೆ ಎಲ್ಲಾ ಪ್ರಕ್ರಿಯೆ ಪಾರದರ್ಶಕವಾಗಿರಬೇಕು ಎನ್ನುವು ಉದ್ದೇಶಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಕಣ್ಗಾವಲನ್ನೂ ಇರಿಸಲಾಗಿದೆ. ಒಟ್ಟಾರೆ ಜಿಲ್ಲಾಡಳಿತದ ಉನ್ನತಾಧಿಕಾರಿಗಳು ಆಗಿಂದ್ದಾಗ್ಗೆ ಕೇಂದ್ರಗಳಿಗೆ ಭೇಟಿ ನೀಡಿ ಪಾರದರ್ಶಕವಾಗಿ ಪರೀಕ್ಷೆ ನಡೆಯುತ್ತಿರುವುದನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ. ಯಾವುದೇ ನಕಲು ಇತ್ಯಾಧಿ ಪರೀಕ್ಷಾ ಅಕ್ರಮಗಳು ನಡೆಯಲು ಅವಕಾಶವಿಲ್ಲದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.