ಕೋವಿಡ್‌ ತುರ್ತು ಪರಿಸ್ಥಿತಿ ಇರುವುದರಿಂದ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮತ್ತು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು| ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಸೇರಿದಂತೆ ಪರೀಕ್ಷಾ ಸಿಬ್ಬಂದಿಗೆ ಅನುಸರಿಸಬೇಕಾದ ನಿಯಮಗಳ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ| 

ಕೊಪ್ಪಳ(ಅ.01): ಜಿಲ್ಲೆಯಲ್ಲಿ ಅಕ್ಟೋಬರ್‌ 4ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಕಡ್ಡಾಯವಾಗಿ ಅನುಸರಿಸಿ, ವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಿ ಎಂದು ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ಹೇಳಿದ್ದಾರೆ. 

ಜಿಲ್ಲಾ ಪಂಚಾಯಿತಿಯ ಜೆ.ಎಚ್‌. ಪಟೇಲ್‌ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2019ರ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್‌ ತುರ್ತು ಪರಿಸ್ಥಿತಿ ಇರುವುದರಿಂದ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮತ್ತು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಪರೀಕ್ಷಾ ಕೇಂದ್ರಗಳ ಆವರಣದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಸಾಮಾನ್ಯವಾಗಿ ನೋಂದಣಿ ಸಂಖ್ಯೆ ಹಾಗೂ ಪರೀಕ್ಷಾ ಕೊಠಡಿ ಪರಿಶೀಲಿಸಿಕೊಳ್ಳಲು ಅಭ್ಯರ್ಥಿಗಳು ನೋಟಿಸ್‌ ಬೋರ್ಡ್‌ ಬಳಿ ಗುಂಪು ಸೇರುತ್ತಾರೆ. ಇದರಿಂದ ಸೋಂಕು ಹರಡುವ ಸಾಧ್ಯತೆ ಇರುತ್ತದೆ. ಆದ್ದರಿಂದ ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ನಾಲ್ಕೈದು ಕಡೆಗಳಲ್ಲಿ ಪರೀಕ್ಷಾ ಕೊಠಡಿ ಮತ್ತು ನೋಂದಣಿ ಸಂಖ್ಯೆಗಳ ಮಾಹಿತಿಯನ್ನು ದೊಡ್ಡ ಅಕ್ಷರಗಳಲ್ಲಿ ಮುದ್ರಿಸಿ ಬೋರ್ಡಿಗೆ, ಗೋಡೆಗಳಿಗೆ ಅಂಟಿಸಿ. ಇದರಿಂದ ನೂಕು ನುಗ್ಗಲು ತಪ್ಪಿಸಬಹುದು ಎಂದು ಹೇಳಿದರು.

ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಮೊದಲು ಮತ್ತು ನಂತರ ಸೋಂಕು ನಿವಾರಕಗಳನ್ನು ಸಿಂಪಡಿಸಲಾಗುತ್ತದೆ. ಅದರಂತೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಕುಡಿಯಲು ಶುದ್ಧ ಹಾಗೂ ಬಿಸಿ ನೀರು, ಕೈತೊಳೆಯಲು ಹ್ಯಾಂಡ್‌ವಾಶ್‌ ಅಥವಾ ಸಾಬೂನು ಒದಗಿಸಲು ಮತ್ತು ಶೌಚಾಲಯಗಳ ಸ್ವಚ್ಛತೆಗೆ ಆದ್ಯತೆ ನೀಡಿ. ಆ ಕುರಿತು ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಪರೀಕ್ಷೆ ಆರಂಭಕ್ಕೂ ಮುನ್ನ ಆರೋಗ್ಯ ಇಲಾಖೆ ಸಿಬ್ಬಂದಿ ಅಭ್ಯರ್ಥಿಗಳು ಮತ್ತು ಸಿಬ್ಬಂದಿಗೆ ಥರ್ಮಲ್‌ ಸ್ಕ್ರೀನಿಂಗ್‌ ಮಾಡಬೇಕು. ಸ್ಯಾನಿಟೈಸರ್‌ ಒದಗಿಸಬೇಕು. ಹೆಚ್ಚುವರಿಯಾಗಿ ಎರಡರಿಂದ ಮೂರು ಪರೀಕ್ಷಾ ಕೊಠಡಿಗಳನ್ನು ಸಿದ್ಧವಾಗಿಟ್ಟುಕೊಂಡು, ಪರೀಕ್ಷಾ ಕೇಂದ್ರದಲ್ಲಿ ಯಾರಿಗಾದರೂ ಕೋವಿಡ್‌ ಲಕ್ಷಣಗಳು, ಅನಾರೋಗ್ಯ ಕಂಡು ಬಂದಲ್ಲಿ ಅಂತಹವರಿಗೆ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು ಎಂದು ಅವರು ಹೇಳಿದರು.

ಮುಸ್ಲಿಂ ವಿದ್ಯಾರ್ಥಿಗಳ ಶಿಕ್ಷಣಕ್ಕೆ ರಾಜ್ಯ ಸರ್ಕಾರದಿಂದ ಹೊಸ ವ್ಯವಸ್ಥೆ

ಕೋವಿಡ್‌ ಪಾಸಿಟಿವ್‌ ದೃಢಪಟ್ಟಅಭ್ಯರ್ಥಿಗಳು ಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ ಮುಂಚಿತವಾಗಿ ಮಾಹಿತಿ ನೀಡಿದರೆ ಅವರಿಗೆ ತಳಕಲ್‌ನ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗುವುದು. ಪರೀಕ್ಷಾ ಅಕ್ರಮ ತಡೆಯುವ ಉದ್ದೇಶದಿಂದ ಪರೀಕ್ಷಾ ದಿನದಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್‌ ಅಂತರದ ಪ್ರದೇಶದಲ್ಲಿ ಸಿಆರ್‌ಪಿಸಿ ಕಲಂ 144ರನ್ವಯ ನಿಷೇಧಾಜ್ಞೆ ಜಾರಿಯಿರುತ್ತದೆ. ಆದ್ದರಿಂದ ಪೊಲೀಸ್‌ ಇಲಾಖೆಯವರು ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪ್ರಮಾಣದ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತೆ, ಶಾಂತಿ, ಸುವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು. ಪರೀಕ್ಷಾ ಸಿಬ್ಬಂದಿ ಹಾಗೂ ಪ್ರವೇಶ ಪತ್ರ ಹೊಂದಿದ ಅಭ್ಯರ್ಥಿಗಳನ್ನು ಹೊರತುಪಡಿಸಿ ಇತರರಿಗೆ ಪರೀಕ್ಷಾ ಕೇಂದ್ರದೊಳಗೆ ಪ್ರವೇಶವಿಲ್ಲ. ಪರೀಕ್ಷಾ ಕರ್ತವ್ಯಕ್ಕೆ ಸಾರಿಗೆ ಇಲಾಖೆಯಿಂದ 8 ಸುಸಜ್ಜಿತ ವಾಹನಗಳನ್ನು ಒದಗಿಸಬೇಕು. ಖಜಾನೆ ಇಲಾಖೆಯವರು ಯಾವುದೇ ಗೊಂದಲಕ್ಕೆ ಆಸ್ಪದ ಕೊಡದೆ ಪರೀಕ್ಷಾ ನಿಯಮಗಳನ್ನು ಪಾಲಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದೊಡ್ಡಬಸಪ್ಪ ನೀರಲಕೇರಿ ಮಾತನಾಡಿ, ಜಿಲ್ಲೆಯಲ್ಲಿ ಟಿಇಟಿ ಪರೀಕ್ಷೆಯ ಬೆಳಗಿನ ಅಧಿವೇಶನಕ್ಕೆ 11 ಕೇಂದ್ರಗಳಲ್ಲಿ 2,717 ಅಭ್ಯರ್ಥಿಗಳು ಮತ್ತು ಮಧ್ಯಾಹ್ನದ ಅಧಿವೇಶನಕ್ಕೆ 24 ಕೇಂದ್ರಗಳಲ್ಲಿ 6,401 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯ ಹಿಂದಿನ ದಿನ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಆಸನ ವ್ಯವಸ್ಥೆಯ ಕುರಿತ ಮಾಹಿತಿಯನ್ನು ಪ್ರಕಟಿಸಲಾಗುವುದು. ಅಭ್ಯರ್ಥಿಗಳು ಈ ಬಗ್ಗೆ ಪರೀಕ್ಷಾ ಕೇಂದ್ರಗಳಿಗೆ ಮುಂಚಿತವಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ತಿಳಿಸಿದರು. ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಸೇರಿದಂತೆ ಪರೀಕ್ಷಾ ಸಿಬ್ಬಂದಿಗೆ ಅನುಸರಿಸಬೇಕಾದ ನಿಯಮಗಳ ಕುರಿತು ಮಾಹಿತಿ ನೀಡಿದರು.

ಸಭೆಯಲ್ಲಿ ಟಿಇಟಿ ನೋಡಲ್‌ ಅಧಿಕಾರಿ ನೀಲಕಂಠಪ್ಪ ಕಂಬಳಿ, ಎಲ್ಲ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ನಿಯೋಜಿತ ಸಿಬ್ಬಂದಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.