ಬೆಂಗಳೂರು (ನ.04):  ಕೊರೋನಾ ಸೋಂಕು ಕಡಿಮೆಯಾಗುತ್ತಿದೆ ಎಂಬುದನ್ನೇ ನೆಪ ಮಾಡಿಕೊಂಡು ಶಾಲೆ ಆರಂಭಕ್ಕೆ ಸಿದ್ಧತೆ ನಡೆಸುತ್ತಿರುವ ರಾಜ್ಯ ಸರ್ಕಾರ, ರಾಜ್ಯ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಹಾಗೂ ಕೊಠಡಿಗಳ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಡಿಡಿಪಿಐ ಹಾಗೂ ಬಿಇಓಗಳಿಗೆ ಮಂಗಳವಾರ ಸೂಚನೆ ನೀಡಿದೆ.

"

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ನೀರು, ಶೌಚಾಲಯ ಸೇರಿದಂತೆ ಹೆಚ್ಚುವರಿ ಮೂಲಸೌಕರ್ಯ ವ್ಯವಸ್ಥೆ, ಕುಸಿದಿರುವ ಕೊಠಡಿಗಳ ದುರಸ್ತಿ ಸೇರಿದಂತೆ ಅಗತ್ಯ ಸಿದ್ಧತೆಗಳಿಗೆ ಕ್ರಮ ವಹಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ.ಅನ್ಬುಕುಮಾರ್‌ ಇಲಾಖೆಯ ಎಲ್ಲಾ ಡಿಡಿಪಿಐಗಳು ಮತ್ತು ಬಿಇಒಗಳಿಗೆ ಸೂಚನೆ ನೀಡಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮಂಗಳವಾರ ಕಲಬುರಗಿ, ಬೆಳಗಾವಿ ವಿಭಾಗದ ಅಪರ ಆಯುಕ್ತರು ಹಾಗೂ ಎಲ್ಲಾ ಜಿಲ್ಲಾ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಮಂಗಳವಾರ ವಿಡಿಯೋ ಸಂವಾದದ ವೇಳೆ ಈ ಸೂಚನೆ ನೀಡಿದರು ಎಂದು ಮೂಲಗಳು ಹೇಳಿವೆ.

ರಾಜ್ಯದಲ್ಲಿ ಶಾಲೆ ಯಾವಾಗ ಆರಂಭ?: ಸಚಿವ ಸುರೇಶ್‌ ಕುಮಾರ್‌ ನೇತೃತ್ವದಲ್ಲಿ ಉನ್ನತ ಸಭೆ! ..

ಜಲ ಜೀವನ್‌ ಮಿಷನ್‌ ಅಡಿ ಶಾಲೆಗಳಿಗೆ ನೀರಿನ ಲಭ್ಯತೆ ಖಾತರಿಪಡಿಸಿಕೊಳ್ಳಬೇಕು, ಯಾವುದೇ ಶಾಲೆಯಲ್ಲಿ ನೀರಿನ ಸಮಸ್ಯೆ ಇದ್ದರೆ ಸರಿಪಡಿಸಬೇಕು. ಹೆಚ್ಚುವರಿ ಶೌಚಾಲಯ ಮತ್ತು ನೀರಿನ ವ್ಯವಸ್ಥೆಗೆ ಕ್ರಿಯಾಯೋಜನೆ ಸಿದ್ಧಪಡಿಸಿ ಸಲ್ಲಿಸಬೇಕು. 2020-21ನೇ ಸಾಲಿನಲ್ಲಿ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕೊಠಡಿಗಳ ಮರು ನಿರ್ಮಾಣ ಕಾಮಗಾರಿಗೆ ಆಯಾ ಜಿಲ್ಲಾಧಿಕಾರಿಗಳಿಗೆ ಮಾಹಿತಿ ಸಲ್ಲಿಸಿ ಅನುದಾನ ಪಡೆಯಬೇಕು ಎಂದು ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದೇ ವೇಳೆ ಸಭೆಯಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಯಾವ ರೀತಿ ನಡೆಸಬೇಕು. ಇದಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆಯಾ ಎಂಬ ಬಗ್ಗೆಯೂ ಚರ್ಚೆ ನಡೆಸಿ ಆಯುಕ್ತರು ಮಾಹಿತಿ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶಾಲೆ ಆರಂಭಕ್ಕೆ ಸಚಿವರ ಸಭೆ ನಂತರ ಮಹೂರ್ತ ಫಿಕ್ಸ್‌!

ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ನೇತೃತ್ವದಲ್ಲಿ ನ.4 ಮತ್ತು 5ರಂದು ಇಲಾಖೆ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಯಲಿದ್ದು, ಈ ಸಭೆಯ ನಂತರ ಶಾಲೆಗಳ ಪುನಾರಂಭ ದಿನ ಪ್ರಕಟಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಸಭೆಯ ವೇಳೆಯೇ ಶಿಕ್ಷಕರ ವರ್ಗವಣೆ ಪ್ರಕ್ರಿಯೆ ವಿಷಯವೂ ಚರ್ಚೆಗೆ ಬರಲಿದೆ. ಸಭೆಯಲ್ಲಿ ಚರ್ಚೆಯಾದ ನಂತರ ಶೀಘ್ರವೇ ವರ್ಗಾವಣೆಗೆ ಸಂಬಂಧಿಸಿದ ವೇಳಾಪಟ್ಟಿಪ್ರಕಟವಾಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಮಂಗಳವಾರ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಶಾಲೆಗಳ ಆರಂಭದ ಬಗ್ಗೆ ಚರ್ಚೆ ನಡೆದಿಲ್ಲ. ಶಾಲೆಗಳಿಗೆ ಅಗತ್ಯವಿರುವ ಹೆಚ್ಚುವರಿ ಮೂಲಸೌಕರ್ಯ, ಮಳೆಯಿಂದ ಹಾನಿಗೊಳಗಾಗಿರುವ ಶಾಲೆ, ಶಾಲಾ ಕೊಠಡಿಗಳ ದುರಸ್ತಿಗೆ ಸಂಬಂಧಿಸಿದ ವಿಚಾರಗಳ ಚರ್ಚಿಸಿ ಅಗತ್ಯ ಕ್ರಮಕ್ಕೆ ಸೂಚಿಸಲಾಯಿತು. ಶಾಲೆಗಳನ್ನು ಯಾವಾಗಿನಿಂದ ಆರಂಭಿಸಬೇಕು ಎಂಬ ಬಗ್ಗೆ ನ.4 ಮತ್ತು 5ರಂದು ಇಲಾಖೆಯ ಸಚಿವರಾದ ಸುರೇಶ್‌ ಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

- ವಿ.ಅನ್ಬುಕುಮಾರ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ